ಸಾರಾಂಶ
ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ರಾಯಚೂರು
ಇಲ್ಲಿನ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಉನ್ನತೀಕರಿಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ದೊರಕಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದ್ದಾರೆ.10 ಎಕರೆ ಪ್ರದೇಶದಲ್ಲಿ ವಿಸ್ತಾರಗೊಂಡಿರುವ ವಿಜ್ಞಾನ ಕೇಂದ್ರವನ್ನು 22.25 ಕೋಟಿ ರು. ವೆಚ್ಚದಲ್ಲಿ ಕೆಟಗರಿ-2 ವಿಜ್ಞಾನ ಕೇಂದ್ರವನ್ನಾಗಿ ಉನ್ನತೀಕರಿಸುವುದರ ಕುರಿತು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು ಅದಕ್ಕೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ವತಿಯಿಂದ ರಾಜ್ಯದ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಜನಸಾಮಾನ್ಯರಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ಚಿಂತನೆಯನ್ನು ಮೂಡಿಸುವ ಉದ್ದೇಶದಿಂದ ಜಿಲ್ಲಾ ಕೇಂದ್ರಗಳಲ್ಲಿ ವಿಜ್ಞಾನ ಕೇಂದ್ರಗಳೂ ಹಾಗೂ ತಾರಾಲಯವನ್ನು ಸ್ಥಾಪಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿದ್ದ ಸಂಧರ್ಭದಲ್ಲಿ ಅಗತ್ಯ ಅನುದಾನ ನೀಡುವ ಮೂಲಕ ರಾಯಚೂರಿನಲ್ಲಿ 10 ಏಕರೆ ಪ್ರದೇಶದಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರವನ್ನು ಸ್ಥಾಪಿಸಲಾಗಿತ್ತು. ಈ ವಿಜ್ಞಾನ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ದೆಹಲಿಗೆ ತೆರಳಿ ಕೇಂದ್ರ ಸಂಸ್ಕೃತಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಇದಕ್ಕೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸುವ ಮೂಲಕ ಕೇಂದ್ರ ಸರ್ಕಾರ ನ್ಯಾಷನಲ್ ಕೌನ್ಸಿಲ್ ಆಫ್ ಸೈನ್ಸ್ ಮ್ಯೂಸಿಯಮ್ ನ ಸ್ಕೀಂ ಫಾರ್ ಪ್ರಮೋಷನ್ ಆಫ್ ಕಲ್ಚರ್ ಆಫ್ ಸೈನ್ಸ್ ಮಾರ್ಗಸೂಚಿಯ ಅನ್ವಯ ಕೇಂದ್ರ ತಂಡ ರಾಯಚೂರಿಗೆ ಭೇಟಿ ನೀಡಿತು. ಕೇಂದ್ರ ಸರಕಾರಕ್ಕೆ ಈ ತಂಡ ಸಲ್ಲಿಸಿದ ವರದಿಯ ಅನ್ವಯ ಕೆಟಗರಿ-2ರ ವಿಜ್ಞಾನ ಕೇಂದ್ರವನ್ನಾಗಿ ಮೇಲ್ದರ್ಜೇಗೇರಿಸುವಂತಹ ಸಲ್ಲಿಸಲಾಗಿದ್ದ ಪ್ರಸ್ತಾವನೆಯನ್ನ ಸಚಿವ ಸಂಪುಟ ಅನುಮೋದಿಸಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.