ಕೇಡರ್‌ ಮಾದರಿ ಜೆಡಿಎಸ್‌ ಪರಿವರ್ತನೆ: ಎಚ್‌ಡಿಕೆ

| Published : Jul 07 2024, 01:15 AM IST

ಸಾರಾಂಶ

ಮುಂದಿನ ದಿನದಲ್ಲಿ ಜೆಡಿಎಸ್‌ ಪಕ್ಷವನ್ನು ಬಲಗೊಳಿಸಲು ಕೇಡರ್‌ ಮಾದರಿಯಲ್ಲಿ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು ಮುಂದಿನ ದಿನದಲ್ಲಿ ಜೆಡಿಎಸ್‌ ಪಕ್ಷವನ್ನು ಬಲಗೊಳಿಸಲು ಕೇಡರ್‌ ಮಾದರಿಯಲ್ಲಿ ಪರಿವರ್ತನೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು ಕೋರ್‌ ಕಮಿಟಿ ಸಭೆಯಲ್ಲಿ ನಿರ್ಣಯಿಸಲಾಗಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶನಿವಾರ ಪಕ್ಷದ ಕಚೇರಿ ಜೆ.ಪಿ.ಭವನದಲ್ಲಿ ಕೋರ್‌ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪಕ್ಷವನ್ನು ಸಂಘಟನೆಗೊಳಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಳ್ಳಲಾಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಸಚಿವ ಎಚ್‌.ಡಿ.ಕುಮಾರಸ್ವಾಮಿ ಸಭೆಯ ತೀರ್ಮಾನಗಳ ಮಾಹಿತಿ ನೀಡಿದರು. ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಹಲವಾರು ಮಹತ್ವದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಪಕ್ಷವನ್ನು ತಳಮಟ್ಟದಿಂದ ಮರು ಸಂಘಟನೆ ಮಾಡುವುದು, ಸದಸ್ಯತ್ವ ಅಭಿಯಾನವನ್ನು ದೊಡ್ಡ ಪ್ರಮಾಣದಲ್ಲಿ ನಡೆಸುವುದು, ವಿಧಾನ ಕಲಾಪದಲ್ಲಿ ಮಿತ್ರಪಕ್ಷ ಬಿಜೆಪಿ ಜತೆ ಜನಪರವಾಗಿ ಹೋರಾಟ ನಡೆಸುವುದು ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಯ ದೃಷ್ಟಿಯಿಂದ ಅತ್ಯಂತ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಪದಾಧಿಕಾರಿಗಳ ಬದಲಾವಣೆ ಮಾಡಲಾಗುವುದು ಮತ್ತು ಹೊಸ ರಾಜ್ಯಾಧ್ಯಕ್ಷರ ಚುನಾವಣೆಯೂ ನಡೆಯಲಿದೆ. ಸದಸ್ಯತ್ವ ಅಭಿಯಾನಕ್ಕೆ ರಾಜ್ಯದ 31 ಜಿಲ್ಲೆಗಳಲ್ಲಿನ ವಿಧಾನಸಭೆ ಕ್ಷೇತ್ರಗಳಲ್ಲಿ ಮುಖಂಡರಿಗೆ ಉಸ್ತುವಾರಿ ಕೊಡಲಾಗುವುದು. ಕೋರ್ ಕಮಿಟಿ ಸದಸ್ಯರು, ಶಾಸಕರು, ಮಾಜಿ ಶಾಸಕರು ಸೇರಿದಂತೆ ಎಲ್ಲರೂ ಈ ಬಗ್ಗೆ ಬದ್ಧತೆಯಿಂದ ಕೆಲಸ ಮಾಡಬೇಕು. ಈ ಮೂಲಕ ನಾವು ಜೆಡಿಎಸ್ ಪಕ್ಷವನ್ನು ಕೇಡರ್ ಬೇಸ್ ಪಕ್ಷವನ್ನಾಗಿ ರೂಪಿಸುತ್ತೇವೆ ಎಂದರು.ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌-ಬಿಜೆಪಿ ಕಾರ್ಯಕರ್ತರು ಅವಿರತವಾಗಿ ಶ್ರಮಿಸಿ ಒಳ್ಳೆಯ ಫಲಿತಾಂಶ ತಂದುಕೊಟ್ಟಿದ್ದಾರೆ. ಇವರೆಲ್ಲರ ಶ್ರಮ ಮತ್ತು ಮಂಡ್ಯ ಜನತೆಯ ಆಶೀರ್ವಾದದಿಂದ ಕೇಂದ್ರದಲ್ಲಿ ಸಚಿವನಾಗಿದ್ದೇನೆ. ಪ್ರಧಾನಿ ನರೇಂದ್ರ ಮೋದಿಯವರು ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ನನ್ನ ಅನುಪಸ್ಥಿತಿಯಲ್ಲಿ ಪಕ್ಷಕ್ಕೆ ಬಲ ತುಂಬಬೇಕಿದೆ. ಅದಕ್ಕೆ ಏನೆಲ್ಲಾ ಮಾಡಬೇಕು ಎಂಬ ಬಗ್ಗೆ ನಾಯಕರು, ಶಾಸಕರ ಜತೆ ಚರ್ಚೆ ಮಾಡಲಾಗಿದೆ ಎಂದು ನುಡಿದರು. ನಿಖಿಲ್‌ ಕುಮಾರಸ್ವಾಮಿಗೆ ಸಲಹೆ: ಸಾಮೂಹಿಕ ಜವಾಬ್ದಾರಿ ಮೂಲಕ ಸಂಘಟನೆಗೆ ಹೆಚ್ಚು ಶಕ್ತಿ ತುಂಬಲು ನಿರ್ಧಾರ ಮಾಡಲಾಗಿದೆ. ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸಂಘಟನೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಕೊಳ್ಳಬೇಕು ಎಂಬ ಸಲಹೆಯನ್ನು ಎಲ್ಲರೂ ನೀಡಿದ್ದಾರೆ. ಅವರ ಸಲಹೆಗಳನ್ನು ಕಾರ್ಯರೂಪಕ್ಕೆ ತರಲು ಅವರೆಲ್ಲರ ಜತೆಯಲ್ಲಿ ವಿಶ್ವಾಸದಿಂದ ಸಂಘಟನೆಯಲ್ಲಿ ತೊಡಗಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಅದರಂತೆ ನಿಖಿಲ್ ಪಕ್ಷದ ಸಂಘಟನೆಯಲ್ಲಿ ಹೆಚ್ಚು ಸಮಯ ತೊಡಗಿಕೊಳ್ಳಲಿದ್ದಾರೆ. ಅಲ್ಲದೇ ಎಲ್ಲ ನಾಯಕರ ಸಲಹೆ ಮತ್ತು ವಿಶ್ವಾಸವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ ಎಂದು ಹೇಳಿದರು. ಇದಕ್ಕೂ ಮುನ್ನ ನಡೆದ ಶಾಸಕಾಂಗ ಪಕ್ಷ ಹಾಗೂ ಕೋರ್ ಕಮಿಟಿ ಸಭೆಯಲ್ಲಿ ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೊರ್, ಸಾ.ರಾ.ಮಹೇಶ್, ವೆಂಕಟರಾವ್ ನಾಡಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ, ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯ ನಾಯಕ್ ಸೇರಿದಂತೆ ಇತರರು ಭಾಗವಹಿಸಿದ್ದರು.ಗೌಡರ ಜೊತೆ ಚರ್ಚಿಸಿ ಶಾಸಕಾಂಗ ಪಕ್ಷದ ನಾಯಕ ಆಯ್ಕೆ: ಎಚ್‌ಡಿಕೆವಿಧಾನಸಭೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಧಿಕಾರವನ್ನು ತಮಗೆ ನೀಡಲಾಗಿದ್ದು, ಈ ಬಗ್ಗೆ ಪಕ್ಷದ ವರಿಷ್ಠ ಎಚ್.ಡಿ.ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ಶನಿವಾರ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ 15ರಿಂದ ಅಧಿವೇಶನ ಆರಂಭವಾಗುತ್ತಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಬಗ್ಗೆ ಪಕ್ಷದ ಶಾಸಕರ ಜತೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಅವರ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಶಾಸಕಾಂಗ ಪಕ್ಷದ ನಾಯಕರನ್ನಾಗಿ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಕುರಿತು ದೇವೆಗೌಡರ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ಬಗ್ಗೆ ನನಗೆ ಅಧಿಕಾರ ನೀಡಿದ್ದಾರೆ ಎಂದರು.ಲೋಕಸಭಾ ಚುನಾವಣೆ ನಂತರ ಶಾಸಕಾಂಗ ಪಕ್ಷದ ಸ್ಥಾನಕ್ಕೆ ನಾನು ರಾಜೀನಾಮೆ ನೀಡಿದ್ದೇನೆ. ಶಾಸಕಾಂಗ ಪಕ್ಷದ ಹೊಸ ನಾಯಕನ ಆಯ್ಕೆ ಮಾಡಲು ಸರ್ವಾನುಮತದಿಂದ ಶಾಸಕರು ನನಗೆ ಜವಾಬ್ದಾರಿ ನೀಡಿದ್ದಾರೆ. ಶೀಘ್ರದಲ್ಲಿಯೇ ಹೆಸರನ್ನು ಘೋಷಣೆ ಮಾಡಲಾಗುವುದು ಎಂದು ತಿಳಿಸಿದರು.