ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಕ್ರಮಗಳ ಕ್ಯಾಲೆಂಡರ್: ಖಾದರ್

| Published : Jun 27 2024, 01:13 AM IST

ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಕ್ರಮಗಳ ಕ್ಯಾಲೆಂಡರ್: ಖಾದರ್
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಿ ವಾರ್ಷಿಕ ಕ್ಯಾಲೆಂಡರ್ ರಚಿಸಲಾಗುವುದು. ಪ್ರತಿ ವರ್ಷವೂ ಇದರಂತೆ ಕಾರ್ಯಕ್ರಮ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಜಿಲ್ಲೆಯಲ್ಲಿ ಪ್ರವಾಸೋದ್ಯಮವನ್ನು ಇನ್ನಷ್ಟು ಆಕರ್ಷಿಸಲು ವಿವಿಧ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಆಯೋಜಿಸಲಾಗುವುದು. ಅದಕ್ಕಾಗಿ ಕ್ಯಾಲೆಂಡರ್‌ ರೂಪಿಸಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಈ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈಗಾಗಲೇ ನಡೆಯುತ್ತಿರುವ ವಿವಿಧ ಕಾರ್ಯಕ್ರಮಗಳು ಹಾಗೂ ಉತ್ಸವಗಳನ್ನು ಬಳಸಿಕೊಂಡು ಹೊಸದಾಗಿ ಇನ್ನಷ್ಟು ಕಾರ್ಯಕ್ರಮ ಏರ್ಪಡಿಸಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಬಲ ನೀಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಮಾತನಾಡಿ, ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು. ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ, ಸ್ಟ್ರೀಟ್‍ಫುಡ್ ಫೆಸ್ಟಿವಲ್, ಪೆಡಲ್ ಫೆಸ್ಟಿವಲ್, ಪುಸ್ತಕ ಪ್ರದರ್ಶನ, ನದಿ ಉತ್ಸವ, ಕರಾವಳಿ ಉತ್ಸವ, ಬೀಚ್ ಉತ್ಸವ, ಮ್ಯಾರಥಾನ್, ಆಟೋಕ್ರಾಸ್ ಮತ್ತಿತರ ಕಾರ್ಯಕ್ರಮಗಳನ್ನು ಪ್ರತಿ ತಿಂಗಳು ಏರ್ಪಡಿಸಲಾಗುವುದು. ಇದಕ್ಕಾಗಿ ಪ್ರಾಯೋಜಕರು, ಸಂಘಟಕರು ಹಾಗೂ ಶಿಕ್ಷಣ ಸಂಸ್ಥೆಗಳನ್ನು ತೊಡಗಿಸಿಕೊಳ್ಳಲಾಗುವುದು ಎಂದರು.

ಪ್ರತಿ ತಿಂಗಳು ಒಂದೊಂದು ಕಾರ್ಯಕ್ರಮವನ್ನು ಆಯೋಜಿಸಿ ವಾರ್ಷಿಕ ಕ್ಯಾಲೆಂಡರ್ ರಚಿಸಲಾಗುವುದು. ಪ್ರತಿ ವರ್ಷವೂ ಇದರಂತೆ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ.ಸಂತೋಷ್‌ ಕುಮಾರ್ ಜಿ. ಮತ್ತಿತರರು ಇದ್ದರು.