ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಕರೆ: ಸಂಸದ ಸುನೀಲ್ ಬೋಸ್

| Published : Nov 23 2024, 12:32 AM IST

ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಕರೆ: ಸಂಸದ ಸುನೀಲ್ ಬೋಸ್
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಅಮೃತ್ ೨.೦ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದ ಸುನೀಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಚಾಮರಾಜನಗರ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಗಳಿಗೆ ಸೂಚನೆ । ಚಾಮರಾಜನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಸಭೆ । ಗುಣಮಟ್ಟದ ಕಾಮಗಾರಿಗೆ ಸೂಚನೆ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೇಂದ್ರ ಸರ್ಕಾರದ ಅಮೃತ್ ೨.೦ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಸದ ಸುನೀಲ್ ಬೋಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಚಾಮರಾಜನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಮೃತ್ ೨.೦ ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಕಾಮಗಾರಿ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ಖುದ್ದು ಸ್ಥಳ ಪರಿಶೀಲನೆ ಮಾಡಬೇಕು. ಸಮರ್ಪಕವಾಗಿ ಪೈಪ್‌ಲೈನ್ ಅಳವಡಿಸಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಗ್ಗೆ ಜನರಿಂದ ದೂರು ಬರದಂತೆ ನೋಡಿಕೋಳ್ಳಬೇಕು ಎಂದು ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೇಂದ್ರ ಪುರಸ್ಕೃತ ಯೋಜನೆಗಳನ್ನು ಜನರಿಗೆ ತಲುಪಿಸಲು ಮುಂದಾಗಬೇಕು. ರೈತರಿಗೆ ಸೌಲಭ್ಯಗಳ ಮಾಹಿತಿ ನೀಡಬೇಕು. ಅರ್ಹ ರೈತರಿಗೆ ಸವಲತ್ತುಗಳು ದೊರೆಯಬೇಕು. ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು. ಅಧಿಕಾರಿಗಳು ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ಕೃಷಿ ಯಾಂತ್ರೀಕರಣ ಯೋಜನೆಗಳ ಸವಲತ್ತು ವಿತರಣೆ ಕುರಿತು ಆಯಾ ಕ್ಷೇತ್ರದ ಶಾಸಕರ ಗಮನಕ್ಕೆ ತರಬೇಕು ಎಂದರು.

ನಗರದ ಸಂತೇಮರಹಳ್ಳಿ ರಸ್ತೆಯ ದೊಡ್ಡರಾಯಪೇಟೆ ಜಂಕ್ಷನ್‌ನಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಅಲ್ಲಿ ವೃತ್ತವೊಂದನ್ನು ನಿರ್ಮಿಸಬೇಕು. ನೂತನವಾಗಿ ಬೈಪಾಸ್ ರಸ್ತೆಯಾಗಿರುವುದರಿಂದ ಅಲ್ಲಿ ನಾಮಫಲಕಗಳು ಅವಶ್ಯವಾಗಿವೆ. ಪ್ರತಿ ೩ ತಿಂಗಳಿಗೊಮ್ಮೆ ರಸ್ತೆ ಸುರಕ್ಷತಾ ಸಭೆ ಏರ್ಪಡಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗುಂಡ್ಲುಪೇಟೆ ಪಟ್ಟಣದಲ್ಲಿ ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ನಿದೇಶನ ನೀಡಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ಹರದನಹಳ್ಳಿಯ ಬಂಡಿಗೆರೆಯಿಂದ ಅಮಚವಾಡಿಗೆ ಹೋಗುವ ರಸ್ತೆಯಲ್ಲಿ ೨೫೦ ಮೀ. ರಸ್ತೆ ಕಾಮಗಾರಿ ಅಂದಾಜುಪಟ್ಟಿಯಲ್ಲಿ ಅನುಮೋದನೆಗೊಂಡಿದ್ದರೂ ರಸ್ತೆ ಕಾಮಗಾರಿ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಅಲ್ಲದೇ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರ ಪುರಸ್ಕೃತ ಯೋಜನೆಗಳನ್ನು ಪರಿಶೀಲಿಸಿದ ಲೋಕಸಭಾ ಸದಸ್ಯರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಕ್ಕಳ ಪೌಷ್ಟಿಕ ಆಹಾರಕ್ಕೆ ಸಾಕಷ್ಟು ಅನುದಾನ ನೀಡುತ್ತಿವೆ. ಅನುದಾನ ಸದ್ಭಳಕೆ ಮಾಡಿಕೊಂಡು ಅಪೌಷ್ಟಿಕತೆಯನ್ನು ಸಂಪೂರ್ಣ ನಿವಾರಣೆಗೆ ಅಧಿಕಾರಿಗಳು ಮುಂದಾಗಬೇಕು. ಜಿಲ್ಲೆಯ ಕಾಡಂಚಿನ ಪ್ರದೇಶಗಳು ಹಾಗೂ ಹಾಡಿಗಳಿಗೆ ಪೌಷ್ಟಿಕ ಆಹಾರ ಸಮರ್ಪಕ ವಿತರಣೆಯಾಗಬೇಕು. ಬಾಲ್ಯವಿವಾಹ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು ಎಂದರು.

ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ಜನರಿಗೆ ಅಗತ್ಯ ಔಷಧಗಳು ದಾಸ್ತಾನು ಇಟ್ಟುಕೊಳ್ಳಬೇಕು. ಕ್ಲಿನಿಕ್‌ಗಳಿಗೆ ಚೀಟಿ ಬರೆಯಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಂಜೆ ೪ ಗಂಟೆಯ ಬಳಿಕ ವೈದ್ಯರು ಇರುವುದಿಲ್ಲ ಎಂಬ ದೂರುಗಳು ಸಾಕಷ್ಟಿವೆ. ಇದನ್ನು ಸರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಸೆಂಟರ್‌ಗಳ ಅವಶ್ಯವಿದ್ದರೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಂಸದರು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, ಎಲ್ಲಾ ತಾಲೂಕು ಕಚೇರಿ, ನಾಡಕಚೇರಿ ಹಾಗೂ ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳನ್ನು ನಿಯಂತ್ರಿಸಲು ಅವಶ್ಯ ನಾಮಫಲಕ ಅಳವಡಿಸಲಾಗಿದೆ. ಸಕಾಲದಲ್ಲಿ ಪಿಂಚಣಿಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಪೌತಿ ಆಂದೋಲನವನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.

ಇದಕ್ಕೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಇತರರು ಮಾಲಾರ್ಪಣೆ ಮಾಡಿದರು.

ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ. ಕವಿತ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಹಾಜರಿದ್ದರು.