ಎಚ್‌ಡಿಕೆ ಪರ ಪ್ರಚಾರ : ಮಾಜಿ ಸಚಿವ

| Published : Apr 11 2024, 12:50 AM IST / Updated: Apr 11 2024, 11:37 AM IST

ಸಾರಾಂಶ

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಜಿಪಂ ವ್ಯಾಪ್ತಿಯಲ್ಲಿ ಇಡೀ ದಿನ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು

 ಮದ್ದೂರು:  ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಎನ್ ಡಿಎ ಮೈತ್ರಿ ಅಭ್ಯರ್ಥಿ ಎಚ್. ಡಿ .ಕುಮಾರಸ್ವಾಮಿ ಪರ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ ಮಾರ್ಚ್ 12 ರಿಂದ ಬಿಜೆಪಿ ಮತ್ತು ಜೆಡಿಎಸ್ ಜಂಟಿ ಚುನಾವಣಾ ಪ್ರಚಾರ ನಡೆಸಲಾಗುವುದು ಎಂದು ಮಾಜಿ ಸಚಿವ ಡಿ. ಸಿ. ತಮ್ಮಣ್ಣ ಹೇಳಿದರು.

ಕ್ಷೇತ್ರ ವ್ಯಾಪ್ತಿಯ ಕೆಸ್ತೂರು ಜಿಪಂ ವ್ಯಾಪ್ತಿಯ ಗೊಲ್ಲರದೊಡ್ಡಿ ಗ್ರಾಮದ ಜುಂಜಪ್ಪ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮಾ. 12 ರಂದು ಕೆಸ್ತೂರು ಜಿ ಪಂ, ಮಾ. 13 ಚಾಮನಹಳ್ಳಿ, 14 ಭಾರತಿ ನಗರ, 15 ಚಿಕ್ಕ ಅರಸಿನಕೆರೆ, 16 ಸೋಮನಹಳ್ಳಿ ಹಾಗೂ ಬೆಸಗರಹಳ್ಳಿ ಜಿಪಂ ವ್ಯಾಪ್ತಿಯ ಗ್ರಾಮಗಳಲ್ಲಿ ನಂತರ ಸಂಜೆ ಮದ್ದೂರು ಪಟ್ಟಣದಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಪರ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಜಂಟಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಯಾವುದಾದರೂ ಒಂದು ಜಿಪಂ ವ್ಯಾಪ್ತಿಯಲ್ಲಿ ಇಡೀ ದಿನ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು ಎಂದು ಹೇಳಿದರು.

ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ತಾಲೂಕು ಮಟ್ಟದಲ್ಲಿ ಬೃಹತ್ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಇವರ ಜೊತೆ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಮಟ್ಟದ ನಾಯಕರು ಚುನಾವಣಾ ಪ್ರಚಾರದಲ್ಲಿ ಭಾಗವಹಿಸುವರು ಎಂದು ತಿಳಿಸಿದರು.

ಮಾಜಿ ಪ್ರಧಾನಿ ಎಚ್. ಡಿ . ದೇವೇಗೌಡರು ಚುನಾವಣಾ ಪ್ರಚಾರದಲ್ಲಿ ತೊಡಗಲಿದಾರೆ. ಈ ಬಗ್ಗೆ ಶೀಘ್ರದಲ್ಲೇ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಚುನಾವಣಾ ಪ್ರಚಾರ ಕಾರ್ಯದಲ್ಲಿ ಮನ್ಮುಲ್ ನಿರ್ದೇಶಕ ಎಸ್‌.ಪಿ. ಸ್ವಾಮಿ ಮತ್ತು ಅವರ ಬೆಂಬಲಿಗರು ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಜಂಟಿ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ ತಿಳಿಸಿದರು. ಪಕ್ಷದ ರಾಜ ಕಾರ್ಯದರ್ಶಿ ಬಿಳಿಯಪ್ಪ. ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ. ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ. ಪುರಸಭಾ ಸದಸ್ಯ ಟಿ.ಆರ್ .ಪ್ರಸನ್ನ ಕುಮಾರ್ ಮತ್ತಿತರರು ಇದ್ದರು.

ಇದೇ ಸಂದರ್ಭದಲ್ಲಿ ಕುದರಗುಂಡಿ ಗ್ರಾಮದ ಕೃಷ್ಣ ಮತ್ತು ಅವರ ಬೆಂಬಲಿಗರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅಲ್ಲದೆ ಲೋಕಸಭಾ ಚುನಾವಣೆಯ ಮಂಡ್ಯ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಮದ್ದೂರಿನ ಶಿವಾನಂದ ಹಾಗೂ ವಳಗರ ದೊಡ್ಡಿಯ ಚಿಕ್ಕ ಚೆನ್ನಾಚಾರಿ ತಮ್ಮ ನಾಮಪತ್ರ ವಾಪಸ್ ಪಡೆದು ಮೈತ್ರಿಯ ಅಭ್ಯರ್ಥಿ ಎಚ್ .ಡಿ. ಕುಮಾರಸ್ವಾಮಿ ಅವರಿಗೆ ಬೆಂಬಲ ಸೂಚಿಸಿದರು.