ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ
ಹೊಸಪೇಟೆ: ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ಚುರುಕುಗೊಂಡಿದೆ. ಸಕ್ಕರೆ ಕಾರ್ಖಾನೆ ಸ್ಥಾಪನೆ ಹೋರಾಟ ಸಮಿತಿಯ ಸದಸ್ಯರು ಹಳ್ಳಿ ಹಳ್ಳಿಗಳಿಗೆ ತೆರಳಿ ರೈತರು ಹಾಗೂ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಿದರು.
ಹೊಸಪೇಟೆ ಸುತ್ತಮುತ್ತಲಿನ ಗ್ರಾಮಗಳು ಸೇರಿದಂತೆ ಅಮರಾವತಿ ಸೊಸೈಟಿ ಹಾಗೂ ವಿವಿಧ ಕಡೆಗಳಲ್ಲಿ ಪ್ರಚಾರ ನಡೆಸಿರುವ ಹೋರಾಟ ಸಮಿತಿಯ ಸದಸ್ಯರು, ರೈತರ ಹಿತದೃಷ್ಟಿಯಿಂದ ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾಗಲೇಬೇಕು ಎಂದು ಒತ್ತಾಯಿಸಿದರು.ಈ ಕುರಿತು ನಗರಸಭೆ ಸದಸ್ಯ ಆನಂದ್ ಮಾತನಾಡಿ, ಹೊಸಪೇಟೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕಬ್ಬು ಬೆಳೆಗಾರರಿಗೆ ಸ್ಥಳೀಯವಾಗಿಯೇ ಕಬ್ಬು ಸಾಗಾಟ ಹಾಗೂ ಮಾರಾಟಕ್ಕೆ ಅನುಕೂಲವಾಗುವುದರ ಜತೆಗೆ ಕೃಷಿ ಚಟುವಟಿಕೆಗಳಿಗೆ ಉತ್ತೇಜನ ದೊರೆಯಲಿದೆ ಎಂದು ಹೇಳಿದರು.
ಇದೇ ಅ.18ರಂದು ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಚ್.ಆರ್.ಗವಿಯಪ್ಪ ನಿವಾಸದ ಎದುರು ಉಪವಾಸ ಸತ್ಯಾಗ್ರಹ ನಡೆಸಲು ರೈತ ಹೋರಾಟಗಾರರು ನಿರ್ಧರಿಸಿದ್ದಾರೆ. ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಅಗತ್ಯ ಕ್ರಮ ಕೈಗೊಳ್ಳುವವರೆಗೂ ಹೋರಾಟ ಮುಂದುವರಿಸುವುದಾಗಿ ಸಮಿತಿಯ ಸದಸ್ಯರು ತಿಳಿಸಿದರು.ಹೋರಾಟ ಸಮಿತಿಯ ಸದಸ್ಯರು ನಗರದ ಅಮರಾವತಿ, ಟಿ.ಬಿ. ಡ್ಯಾಂ, ಹೊಸೂರು, ಕರೆಗಲ್ ಮಾಗನಿ, ಎರೆಬೈಲು ಸೇರಿದಂತೆ ಇತರೆ ಪ್ರದೇಶಗಳಿಗೆ ಭೇಟಿ ನೀಡಿ ಸಕ್ಕರೆ ಕಾರ್ಖಾನೆಯ ಬಗ್ಗೆ ಜಾಗೃತಿ ಮೂಡಿಸಿದರು.