ಸಾರಾಂಶ
ಹೊಸಪೇಟೆ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಸಂಯುಕ್ತಾಶ್ರಯದಲ್ಲಿ ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಪಡಿಸುವ ಅಭಿಯಾನಕ್ಕೆ ಜಿಪಂ ಸಿಇಒ ಸದಾಶಿವಪ್ರಭು ಹಸಿರು ನಿಶಾನೆ ತೋರಿದರು.
ನಗರದ ನೂರು ಹಾಸಿಗೆ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಅಭಿಯಾನಕ್ಕೆ ರಾಜ್ಯಾದ್ಯಂತ ಏಕಕಾಲದಲ್ಲಿ ಚಾಲನೆ ಸಿಕ್ಕಿದೆ. ಇದರ ಭಾಗವಾಗಿ ಜಿಲ್ಲೆಯಲ್ಲೂ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಜಿಲ್ಲೆಯ ಎಲ್ಲ ಇಲಾಖೆಗಳ ಅಧಿಕಾರಿಗಳು, ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯತಿಗಳ ಅಧಿಕಾರಿಗಳಿಗೆ ಈ ಕಾರ್ಯಕ್ರಮದ ಬಗ್ಗೆ ಈಗಾಗಲೇ ಅರಿವು ಮೂಡಿಸಲಾಗಿದೆ. ಕಾರ್ಯಕ್ರಮದ ಮುಖಾಂತರ ಮನೆ, ಮನೆಗೆ ತೆರಳಿ ಡೆಂಘೀ ಮತ್ತು ಅದರ ಉತ್ಪತ್ತಿ ತಾಣಗಳನ್ನು ನಾಶಪಡಿಸುವ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು ಎಂದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ ಮಾತನಾಡಿ, ಈ ಮೊದಲು ತಿಂಗಳಲ್ಲಿ ಮೊದಲನೇ ವಾರದ ಒಂದು ದಿನ ಮತ್ತು ಕೊನೆಯ ವಾರದ ಒಂದು ದಿನ ಶುಕ್ರವಾರ ಈ ಕಾರ್ಯಕ್ರಮ ಮಾಡಲಾಗುತ್ತಿತ್ತು. ಈಗ ರಾಜ್ಯ ಸರ್ಕಾರದ ಆದೇಶದಂತೆ ವಾರದ ಪ್ರತಿ ಶುಕ್ರವಾರ ಮನೆ, ಮನೆಗೆ ತೆರಳಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಗುವುದು. ಮಳೆಗಾಲ ಇರುವುದರಿಂದ ನಿಂತ ನೀರಿನಲ್ಲಿ ಈಡಿಸ್ ಸೊಳ್ಳೆಯ ಲಾರ್ವ ಉತ್ಪತ್ತಿಯಾಗುತ್ತದೆ. ಸಾರ್ವಜನಿಕರು ಮನೆಯಲ್ಲಿ ಹೆಚ್ಚು ದಿನಗಳ ಕಾಲ ನೀರನ್ನು ಶೇಖರಣೆ ಮಾಡದೇ ಹಾಗೂ ಮನೆಯ ಅಕ್ಕ ಪಕ್ಕ ಜಾಗದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಈ ಅಭಿಯಾನಕ್ಕೆ ಸಾರ್ವಜನಿಕರು ಸಹಕರಿಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಕಮಲಮ್ಮ ಮಾತನಾಡಿ, ಡೆಂಘೀ ಜ್ವರ ನಿಯಂತ್ರಣ ನಮ್ಮೆಲ್ಲರ ಜವಾಬ್ದಾರಿ. ಬಳಸಿ ಎಸೆಯುವ ಟೀ ಕಪ್, ಪ್ಲಾಸ್ಟಿಕ್ ಬಾಟಲ್, ಡಬ್ಬಗಳು ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗುವುದರಿಂದ ಈಡಿಸ್ ಸೊಳ್ಳೆಯ ಲಾರ್ವಗಳು ಬೆಳೆಯುತ್ತವೆ. ನಮ್ಮ ಸಣ್ಣ ನಿರ್ಲಕ್ಷ್ಯವೂ ಡೆಂಘೀ ಜ್ವರದಿಂದ ನರಳುವಂತೆ ಮಾಡಬಹುದು. ಮನೆಯ ಸುತ್ತಲಿನ ಪರಿಸರವನ್ನು ಸೊಳ್ಳೆ ಉತ್ಪತ್ತಿ ತಾಣಗಳಿಂದ ಮುಕ್ತಗೊಳಿಸೋಣ ಎಂದರು.ತುಂಗಭದ್ರಾ ಸ್ಕೂಲ್ ಆಫ್ ನರ್ಸಿಂಗ್, ಮಲ್ಲಿಗೆ ಪ್ಯಾರಾ ಮೆಡಿಕಲ್, ದಿಪಾಲಿ ಸ್ಕೂಲ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇರಿದಂತೆ ಬೇರೆ ಗುಂಪುಗಳಿಂದ ಮನೆ, ಮನೆಗೆ ತೆರಳಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಆರ್‌ಸಿಎಚ್ ಅಧಿಕಾರಿ ಡಾ.ಬಿ. ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಷಣ್ಮುಖ ನಾಯಕ, ಜಿಲ್ಲಾ ಅರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ತಾಲೂಕು ಅರೋಗ್ಯ ಅಧಿಕಾರಿ ಡಾ. ಭಾಸ್ಕರ್, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ ಸೇರಿದಂತೆ ಅರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.