ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ಪೇಟೆ
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ತಾಲೂಕಿನ ವಿವಿಧ ಗ್ರಾಮ ಪಂಚಾಯತಿ ವ್ಯಾಪ್ತಿ ಗ್ರಾಮಗಳಲ್ಲಿ ಎರಡನೇ ಸುತ್ತಿನ ಬಿರುಸಿನ ಪ್ರಚಾರ ನಡೆಸಿದರು.ತಾಲೂಕಿನ ಶೀಳನೆರೆ ಹೋಬಳಿಯ ಮಲ್ಲಕೋನಹಳ್ಳಿ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಗ್ರಾಮದಿಂದ ಪ್ರಚಾರ ಆರಂಭಿಸಿದ ಸ್ಟಾರ್ ಚಂದ್ರು ಅನಂತರ ಬೂಕನಕೆರೆ ಹೋಬಳಿಯ ಐಚನಹಳ್ಳಿ, ಬೂಕನಕೆರೆ, ಬಲ್ಲೇನಹಳ್ಳಿ, ಗಂಜೀಗೆರೆ, ಬಳ್ಳೇಕೆರೆ, ಮಡುವಿನಕೋಡಿ, ಕಸಬಾ ಹೋಬಳಿಯ ಹರಿಹರಪುರ, ಬಂಡೀಹೊಳೆ, ಮಾಕವಳ್ಳಿ, ಕಿಕ್ಕೇರಿ ಹೋಬಳಿಯ ಚೌಡೇನಹಳ್ಳಿ, ದಬ್ಬೇಘಟ್ಟ, ಮಾದಾಪುರ, ಆನೆಗೊಳ, ಐಕನಹಳ್ಳಿ, ಲಕ್ಷ್ಮೀಪುರ ಮತ್ತು ಕಿಕ್ಕೇರಿ ಗ್ರಾಮ ಪಂಚಾಯತಿ ಕೇಂದ್ರಗಳಲ್ಲಿ ರೋಡ್ ಶೋ ಹಾಗೂ ಬಹಿರಂಗ ಸಭೆ ನಡೆಸಿ ಮತಯಾಚನೆ ಮಾಡಿದರು.
ಕೆಲವು ಗ್ರಾಪಂ ಕೇಂದ್ರಗಳಲ್ಲಿ ತೆರೆದ ವಾಹನದಿಂದ ಕೆಳಗಿಳಿದು ಮತದಾರರ ಕೈಕುಲುಕಿ ಮತಯಾಚಿಸಿದ ಅಭ್ಯರ್ಥಿ ಸ್ಟಾರ್ ಚಂದ್ರು ನಾನು ಜಿಲ್ಲೆಯ ಹೊರಗಿನ ಅಭ್ಯರ್ಥಿಯಲ್ಲ. ನಾಗಮಂಗಲ ತಾಲೂಕಿನ ಕನ್ನಘಟ್ಟ ಗ್ರಾಮದವನು. ನಾನು ಸಾಮಾನ್ಯ ರೈತನ ಮಗ. ಸ್ವಂತ ಪರಿಶ್ರಮದಿಂದ ಮೇಲೆ ಬಂದಿದ್ದೇನೆ. ನನಗೆ ನನ್ನದೇ ಆದ ಉದ್ದಿಮೆಯಿದೆ. ಸಾವಿರಾರು ಜನ ನಮ್ಮ ಸಂಸ್ಥೆಯಲ್ಲಿ ದುಡಿಯುತ್ತಿದ್ದಾರೆ ಎಂದರು.ನನಗೆ ಹಣದ ಅವಶ್ಯಕತೆಯಿಲ್ಲ. ಹಣ ಮಾಡಲು ನಾನು ರಾಜಕೀಯಕ್ಕೆ ಬಂದಿಲ್ಲ. ಚುನಾವಣೆ ನನಗೆ ಹೊಸತಾದರೂ ರಾಜಕೀಯ ಹೊಸದಲ್ಲ. ಜಿಲ್ಲೆಯ ಜನರ ಸೇವೆಗಾಗಿ ರಾಜಕೀಯಕ್ಕೆ ಬಂದಿದ್ದೇನೆ. ಜಿಲ್ಲೆಯ ಅಭಿವೃದ್ದಿಯ ಬಗ್ಗೆ ನನಗೆ ನನ್ನದೇ ಆದ ಕನಸುಗಳಿವೆ. ಉತ್ತಮ ಸಂಸದೀಯ ಪಟುವಾಗಿ ಕೆಲಸ ಮಾಡಿ ಕೇಂದ್ರ ಸರ್ಕಾರದಿಂದ ಜಿಲ್ಲೆಯ ಅಭಿವೃದ್ಧಿಗೆ ಬರಬಹುದಾದ ಎಲ್ಲಾ ಸವಲತ್ತುಗಳನ್ನು ತಂದು ಜಿಲ್ಲೆಯ ಜನರ ಕಷ್ಟಸುಖಗಳಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.
ನನಗೆ ಮತ ಹಾಕಿ ಗೆಲ್ಲಿಸುವ ಮೂಲಕ ಕಾಂಗ್ರೆಸ್ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಂತ್ರಿ ಡಿ.ಕೆ. ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಜನಪರ ಕಾರ್ಯಗಳಿಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳಿಂದ ತೀವ್ರ ಬರಗಾಲದ ಸಂದರ್ಭದಲ್ಲಿ ಜನ ನೆಮ್ಮದಿಯಿಂದ ಜೀವನ ನಡೆಸುವಂತಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲ ಮನ್ನಾ, ಪ್ರತಿ ಕುಟುಂಬದ ಮಹಿಳೆಗೆ ವಾರ್ಷಿಕ 1 ಲಕ್ಷ ಸೇರಿದಂತೆ ನೀಡಿರುವ ಎಲ್ಲಾ ಗ್ಯಾರಂಟಿಗಳನ್ನೂ ಅನುಷ್ಠಾನಕ್ಕೆ ತರಲಿದೆ ಎಂದು ತಿಳಿಸಿದರು.
ಗ್ಯಾರಂಟಿ ಯೋಜನೆಗಳನ್ನು ದೇಶದಾದ್ಯಂತ ವಿಸ್ತರಿಸಲು ಜಿಲ್ಲೆಯ ಜನ ಕಾಂಗ್ರೆಸ್ ಅಭ್ಯರ್ಥಿಯಾದ ನನಗೆ ಮತನೀಡಿ ಆಶೀರ್ವಾದ ಮಾಡಬೇಕು. ಪ್ರಚಾರಕ್ಕೆ ಹೋದ ಕಡೆಯಲೆಲ್ಲ ಉತ್ತಮ ಸ್ಪಂದನೆ ಸಿಗುತ್ತಿದೆ. ಮಹಿಳೆಯರು ಆರತಿ ಎತ್ತಿ ಬರಮಾಡಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಬೆಂಬಲಿಸುವ ಭರವಸೆ ನೀಡುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ತಾಲೂಕಿನ ಬಳ್ಳೇಕೆರೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಗ್ರಾಪಂನ ಬಿಜೆಪಿ ಕಾರ್ಯಕರ್ತರು ಹಾಗೂ ಹರಿಹರಪುರದಲ್ಲಿ ಬಿಜೆಪಿ ಮಹಿಳಾ ಉಪಾಧ್ಯಕ್ಷರು, ಸೇರಿದಂತೆ ಹಲವು ಮಹಿಳಾ ಕಾರ್ಯಕರ್ತೆಯರು ಕಾಂಗ್ರೆಸ್ ಗೆ ಸೇರ್ಪಡೆಯಾದರು. ಸ್ಟಾರ್ ಚಂದ್ರು ಅವರು ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಈ ವೇಳೆ ಮಾಜಿ ಶಾಸಕರಾದ ಕೆ.ಬಿ. ಚಂದ್ರಶೇಖರ್, ಬಿ. ಪ್ರಕಾಶ್, ಕಾಂಗ್ರೆಸ್ ಮುಖಂಡರಾದ ಬಿ.ಎಲ್. ದೇವರಾಜು, ವಿಜಯ್‌ರಾಮೇಗೌಡ, ಜಿಲ್ಲಾಧ್ಯಕ್ಷ ಸಿ.ಡಿ. ಗಂಗಾಧರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಳಹಳ್ಳಿ ವಿಶ್ವನಾಥ್, ಬಿ. ನಾಗೇಂದ್ರ ಕುಮಾರ್, ಕಾಂಗ್ರೆಸ್ ಉಸ್ತುವಾರಿ ಚಿನಕುರಳಿ ರಮೇಶ್, ಮತ್ತಿಘಟ್ಟ ಕೃಷ್ಣಮೂರ್ತಿ, ಬೂಕನಕೆರೆ ವೆಂಕಟೇಶ್ ಸೇರಿದಂತೆ ಆಯಾ ಭಾಗದ ಕಾಂಗ್ರೆಸ್ ಮುಖಂಡರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪ್ರಚಾರಕ್ಕೆ ಸಾಥ್ ನೀಡಿದರು.