ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಮುಖ್ಯಮಂತ್ರಿಗೆ ಕಪಾಳ ಮೋಕ್ಷ ಕೊಟ್ಟಂತೆ ಆಗುತ್ತದೆ. ಹೀಗಾಗಿ ಮುಖ್ಯಮಂತ್ರಿಯಾದಿಯಾಗಿ ಸಚಿವರು ಬಾಗಲಕೋಟೆಯಲ್ಲಿ ಗಲ್ಲಿ ಗಲ್ಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತರೆ ಮುಖ್ಯಮಂತ್ರಿಗೆ ಕಪಾಳ ಮೋಕ್ಷ ಕೊಟ್ಟಂತೆ ಆಗುತ್ತದೆ. ಹೀಗಾಗಿ ಮುಖ್ಯಮಂತ್ರಿಯಾದಿಯಾಗಿ ಸಚಿವರು ಬಾಗಲಕೋಟೆಯಲ್ಲಿ ಗಲ್ಲಿ ಗಲ್ಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಉತ್ಸಾಹದಿಂದ ಕಣದಲ್ಲಿ ಕೆಲಸ ಮಾಡುತ್ತಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆಗಳಲ್ಲಿ ಮತದಾರರು ಕಾಂಗ್ರೆಸ್ ವಿರುದ್ಧ ಬೇಸತ್ತಿದ್ದಾರೆ. ಗ್ಯಾರಂಟಿ ಭ್ರಮೆಯಲ್ಲಿರುವ ಕಾಂಗ್ರೆಸ್, ಚುನಾವಣಾ ಫಲಿತಾಂಶದ ಬಳಿಕ ಆ ಭ್ರಮೆಯಿಂದ ಹೊರಬರುವ ಸ್ಥಿತಿ ಬರಲಿದೆಬಹುಶಃ ಯಾವಾಗಲೂ ಕೂಡ ಕಾಂಗ್ರೆಸ್ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬಂದಿರಲಿಲ್ಲ. ರಾಮನಗರ, ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಉಪಚುನಾವಣೆಗಳಲ್ಲಿ ನೋಡಿದ್ದೇನೆ, ಇಂಥ ಸ್ಥಿತಿ ಬಂದಿರಲಿಲ್ಲ. ಸಾಮಾನ್ಯವಾಗಿ ಮುಖ್ಯಮಂತ್ರಿ ಹಳ್ಳಿಗಳಲ್ಲಿ ರೋಡ್ ಶೋ ಮಾಡುತ್ತಿದ್ದರು, ಬೀದಿಯಲ್ಲಿ ಇಳಿದು ಮತಪ್ರಚಾರ ಮಾಡುತ್ತಿರಲಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಕಾಡುತ್ತಿದೆ ಎಂದು ವಿಜಯೇಂದ್ರ ಲೇವಡಿ ಮಾಡಿದರು.

ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ನಂತರ ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ. ಹಲವಾರು ತಿಂಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ ಇದೆ. ಚುನಾವಣಾ ಫಲಿತಾಂಶದ ನಂತರ ಸ್ಫೋಟ ಆಗಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ಭವಿಷ್ಯ ನುಡಿದರು. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳ ಚುನಾವಣೆಯನ್ನು ಕಾಂಗ್ರೆಸ್ ಸವಾಲಾಗಿ ಸ್ವೀಕಾರ ಮಾಡಿದೆ. ಬಿಜೆಪಿ ಕೂಡ ಈ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದೆ. ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಆಡಳಿತ ವಿರೋಧಿ ಅಲೆ ಕಾಣುತ್ತಿದೆ ಎಂದರು.

ಕಳೆದ ಮೂರು ವರ್ಷಗಳ ಆಡಳಿತ ಅವಧಿಯಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಹೊರತುಪಡಿಸಿ ಯಾವುದೇ ಅಭಿವೃದ್ಧಿ ಕಾರ್ಯ ಮಾಡಲು ಆಗಿಲ್ಲ. ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಸೌಕರ್ಯಗಳ ವಿಷಯದಲ್ಲಿ ಹೊಸ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಶಿಕ್ಷಣ ಇಲಾಖೆ ಹದಗೆಟ್ಟು ಹೋಗಿದೆ. ಆರೋಗ್ಯ ಇಲಾಖೆ ವೈದ್ಯರಿಲ್ಲದೆ, ಔಷಧ ಇಲ್ಲದೆ ಕುಸಿದು ಹೋಗಿದೆ. ಬಡವರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ. ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಗಾಧ ವಿಶ್ವಾಸವಿದ್ದು, ಚುನಾವಣಾ ಫಲಿತಾಂಶ ಬಂದ ನಂತರ ಅವರಿಗೆ ಗೊತ್ತಾಗಲಿದೆ ಎಂದು ತಿರುಗೇಟು ನೀಡಿದರು.

ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಉತ್ಸಾಹ ಇಲ್ಲ. ಬಿಜೆಪಿ ಕಾರ್ಯಕರ್ತರು ರಣೋತ್ಸಾಹದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತದಾರರು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೇಸತ್ತಿದ್ದಾರೆ. ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ. ಅಲ್ಪಸಂಖ್ಯಾತರಿಗೆ ಯಾವುದೇ ರೀತಿ ಅನುಕೂಲ ಕಾಂಗ್ರೆಸ್ ಸರ್ಕಾರದಿಂದ ಆಗಿಲ್ಲ. ಅಲ್ಪಸಂಖ್ಯಾತರನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬುದು ಗೊತ್ತಾಗಿದೆ. ಹೀಗಾಗಿ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಬದಲು ನೋಟಾಗೆ ಹಾಕಲು ತಿರ್ಮಾನಿಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.ಕಳೆದ ಒಂದು ವಾರದಿಂದ ಬಾಗಲಕೋಟೆ ನಗರ ಗ್ರಾಮಾಂತರ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಎಲ್ಲಾ ಮುಖಂಡರ ಜೊತೆ ಪ್ರವಾಸ ಮಾಡಿದ್ದೇನೆ. ನಮ್ಮ ಅಭ್ಯರ್ಥಿ ವೀರಣ್ಣ ಚರಂತಿಮಠ ಗೆಲ್ಲುತ್ತಾರೆ. ‌ನನಗೆ ನೂರಕ್ಕೆ ನೂರು ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರವೂ ಬಿಜೆಪಿಯ ಐತಿಹಾಸಿಕ ಗೆಲುವು ಸಾಕ್ಷಿಯಾಗುತ್ತೆ ಎಂದು ಬಿ.ವೈ.ವಿಜಯೇಂದ್ರ ಭರವಸೆ ವ್ಯಕ್ತಪಡಿಸಿದರು.