ಸಾರಾಂಶ
ಕನ್ನಡಪ್ರಭ ವಾರ್ತೆ ಮಂಗಳೂರು
ಶಾಲೆ ಕಾಲೇಜುಗಳ 100 ಮೀ. ಅಂತರದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ಪರವಾನಗಿ ನವೀಕರಣ ಮಾಡದೆ ರದ್ದುಗೊಳಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2024-25ನೇ ಸಾಲಿನ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.ಹೊಸ ತಂಬಾಕು ಪರವಾನಗಿ ನೀತಿಯು ಮಹಾನಗರ ಪಾಲಿಕೆಯಲ್ಲಿ ಜಾರಿಯಾದ ತಕ್ಷಣ ಶಾಲೆ ಕಾಲೇಜುಗಳ 100 ಮೀ. ಅಂತರದೊಳಗೆ ತಂಬಾಕು ಮಾರಾಟ ಮಾಡುತ್ತಿದ್ದರೆ ಕಡ್ಡಾಯವಾಗಿ ಪರವಾನಗಿ ರದ್ದು ಮಾಡಬೇಕು. ಇತರ ಸ್ಥಳಗಳಲ್ಲಿ ತಂಬಾಕು ಮಾರಾಟ ಮಾಡುವವರು ಕಡ್ಡಾಯವಾಗಿ ಪಾಲಿಕೆಯಿಂದ ಪರವಾನಗಿ ಪಡೆಯುವಂತೆ ಪ್ರತಿ ತಿಂಗಳ ವರದಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸುವಂತೆ ನಗರ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಮಿಕರಲ್ಲಿ ತಂಬಾಕು ಸೇವನೆ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ವೆನ್ಲಾಕ್ ಆಸ್ಪತ್ರೆಯ ಸಹಭಾಗಿತ್ವದೊಂದಿಗೆ ಕಾರ್ಮಿಕರ ಕಾಲೋನಿಗಳಿಗೆ ತೆರಳಿ ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವಂತೆ ಅಪರ ಜಿಲ್ಲಾಧಿಕಾರಿ ಸಲಹೆ ನೀಡಿದರು.ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯ್ತಿ ಪಿಡಿಒಗಳು ತಂಬಾಕು ನಿಯಂತ್ರಣ ಬಗ್ಗೆ ನಿರಂತರ ಕಾರ್ಯಾಚರಣೆ ಮಾಡಬೇಕು. ತಮ್ಮ ವ್ಯಾಪ್ತಿಯ ಸುತ್ತಮುತ್ತಲಿನ ಶಾಲಾ ಕಾಲೇಜು, ಧಾರ್ಮಿಕ ಕೇಂದ್ರಗಳು, ಅಂಗನವಾಡಿ ಕೇಂದ್ರಗಳ 100 ಮೀಟರ್ ವ್ಯಾಪ್ತಿಯ ಒಳಗೆ ತಂಬಾಕು ಮಾರಾಟವಾಗುತ್ತಿದ್ದರೆ ರೈಡ್ ಮಾಡಿ ಪರವಾನಗಿ ರದ್ದುಗೊಳಿಸುವಂತೆ ಸೂಚಿಸಿದರು.
ಮಹಾನಗರ ಪಾಲಿಕೆ, ಅಬಕಾರಿ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹಾಗೂ ಸಂಬಂಧಪಟ್ಟ ಇಲಾಖೆಗಳಿಗೆ ತಮ್ಮ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಕಾನೂನು ಬಾಹಿರ ತಂಬಾಕು ಮಾರಾಟ ನಡೆಯುತ್ತಿದ್ದರೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದರು.ಆಹಾರ ಸುರಕ್ಷತೆ ಗುಣಮಟ್ಟ ಅಂಕಿತ ಅಧಿಕಾರಿ ಪ್ರವೀಣ್ ಮಾತನಾಡಿ, ಈಗಾಗಲೇ ರಾಜ್ಯ ಸರ್ಕಾರದಿಂದ ಆಹಾರಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಲಾಗಿದೆ. ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಆಹಾರ ಘಟಕಗಳಲ್ಲಿ ಕೃತಕ ಬಣ್ಣ ಬಳಸುತ್ತಿದ್ದರೆ ಅಂಥವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.ಶಾಲಾ ಕಾಲೇಜುಗಳಿಗೆ ರವಾನೆಯಾಗುವ ಬಿಸಿ ಊಟ, ಹಾಸ್ಟೆಲ್, ಅಂಗನವಾಡಿ, ಕ್ಯಾಂಟೀನ್‍ಗಳಲ್ಲಿ ನೀಡಲಾಗುವ ಆಹಾರಗಳನ್ನು ಕಾಯಿದೆ ಅಡಿ ನೋಂದಣಿಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನವೀನ್ ಚಂದ್ರ ಕುಲಾಲ್, ಸೈಬರ್ ಕ್ರೈಂ ಡಿವೈಎಸ್ಪಿ ಮಂಜುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಿಬ್ಬಂದಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))