ಕನ್ನಡಪ್ರಭ ವಾರ್ತೆ ಬೆಳಗಾವಿ

ದೆಹಲಿಯಲ್ಲಿನ ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಸೂಚಿಸಿ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಲು ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಶುಕ್ರವಾರ ಸಂಜೆ ವಿದ್ಯಾರ್ಥಿಗಳು ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಕ್ಯಾಂಡಲ್ ಮಾರ್ಚ್ ನಡೆಸಿದರು.

ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಕ್ಯಾಂಡಲ್ ಹಿಡಿದು ಚೆನ್ನಮ್ಮ ವೃತ್ತದಲ್ಲಿ ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಮೌನ ಪ್ರಾರ್ಥನೆ ಸಲ್ಲಿಸಿದರು. ಬಳಿಕ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಪ್ರತಿಭಟನಾಕಾರರು ಕೆಲಕಾಲ ಚೆನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.