ಸಾರಾಂಶ
ಗುಬ್ಬಿ: ಪಟ್ಟಣದ ನಿವಾಸಿ, ಹೊನ್ನಶೆಟ್ಟಿಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಜಯಂತಿಮಾಲ (58) ಅವರು ಗುರುವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಹೇರೂರಿನ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ.
ತುಮಕೂರು ಕಡೆಯಿಂದ ಅತಿ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕಿ ರಸ್ತೆಗೆ ಬಿದ್ದರು. ತಲೆಗೆ ತೀವ್ರವಾದ ಪೆಟ್ಟಾಗಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಗುಬ್ಬಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದ ಶಿಕ್ಷಕಿ ಗುರುವಾರ ರಾತ್ರಿ ಮೃತಪಟ್ಟರು ಎಂದು ತಿಳಿದು ಬಂದಿದೆ.
ಗುಬ್ಬಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಾರಿಯಾಗಿರುವ ವಾಹನದ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಅಗತ್ಯ ಕಾನೂನು ಪ್ರಕ್ರಿಯೆಗಳ ನಂತರ ಶುಕ್ರವಾರ ಪಟ್ಟಣದಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಮೃತರಿಗೆ ಪತಿ, ಓರ್ವ ಪುತ್ರ ಹಾಗೂ ಪುತ್ರಿ ಇದ್ದಾರೆ.