ನಿಯಂತ್ರಣ ತಪ್ಪಿ ತಡೆಗೋಡೆಗೆ ಕಾರು ಡಿಕ್ಕಿ: ನಾಲ್ವರ ಸಾವು

| Published : Apr 07 2025, 12:37 AM IST

ಸಾರಾಂಶ

ನೂಲ್ವಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ

ಹುಬ್ಬಳ್ಳಿ: ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನೂಲ್ವಿ ಕ್ರಾಸ್ ಬಳಿ ಭಾನವಾರ ನಡೆದಿದೆ.

ಇಲ್ಲಿಯ ಲಿಂಗರಾಜ ನಗರ ಹಾಗೂ ವಿದ್ಯಾನಗರ ನಿವಾಸಿಗಳಾದ ಸುಜಾತಾ ಹಿರೇಮಠ (60), ಶಕುಂತಲಾ ಹಿರೇಮಠ (72) ಮತ್ತು ಗಾಯತ್ರಿ (67) ಸ್ಥಳದಲ್ಲಿಯೇ ಮೃತಪಟ್ಟಿದ್ದರೆ, ಕೆಎಂಸಿಆರ್‌ಐ ದಾಖಲಾಗಿದ್ದ ಸಂಪತಕುಮಾರಿ (68) ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ತೀವ್ರ ಗಾಯಗೊಂಡಿರುವ ವೀರಬಸಯ್ಯ ಹಿರೇಮಠ (65)ಗೆ ಚಿಕಿತ್ಸೆ ಮುಂದುವರಿದಿದೆ.

ಕುಟುಂಬಸ್ಥರೆಲ್ಲರೂ ಹಾವೇರಿಯ ಸಂಬಂಧಿಕರ ಮನೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದರು. ನೂಲ್ವಿ ಕ್ರಾಸ್ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಮೂವರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರನ್ನು ಕೆಎಂಸಿಆರ್‌ಐಗೆ ದಾಖಲಿಸಲಾಗಿತ್ತು. ಈ ಪೈಕಿ ಮತ್ತೊಬ್ಬ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಸಿಪಿಐ ಮುರಗೇಶ ಚನ್ನಣ್ಣವರ ನೇತೃತ್ವದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಗಿಲು ಮುಟ್ಟಿದ ಆಕ್ರಂದನ: ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಕೆಎಂಸಿಆರ್‌ಐಗೆ ಆಗಮಿಸಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಅಪಘಾತದಲ್ಲಿ ತಾಯಿ, ಅಜ್ಜಿಯನ್ನು ಕಳೆದುಕೊಂಡ ಮಕ್ಕಳು, ಮೊಮ್ಮಕ್ಕಳು ದೇವರಿಗೆ ಹಿಡಿಶಾಪ ಹಾಕುತ್ತಾ ರೋದಿಸುತ್ತಿದ್ದ ದೃಶ್ಯ ಮನಕಲಕುವಂತಿತ್ತು.