ದಾಬಸ್‍ಪೇಟೆ: ಕಾರೊಂದು ವೇಗವಾಗಿ ಚಲಿಸುವ ವೇಳೆ ಕಾರಿನ ಚಕ್ರ ಗುಂಡಿಗೆ ಇಳಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ

ದಾಬಸ್‍ಪೇಟೆ: ಕಾರೊಂದು ವೇಗವಾಗಿ ಚಲಿಸುವ ವೇಳೆ ಕಾರಿನ ಚಕ್ರ ಗುಂಡಿಗೆ ಇಳಿದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನೆಲಮಂಗಲ ತಾಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್ ಪೋಸ್ಟ್ ಬಳಿ ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿ-75ರಲ್ಲಿ ನಡೆದಿದೆ.

ಬೆಂಗಳೂರಿನ ಸಪ್ತಗಿರಿ ಕಾಲೇಜಿನ ವಿದ್ಯಾರ್ಥಿಗಳಾದ ಜಾನ್ಹವಿ(19), ವೈಷ್ಣವಿ (19) ಮೃತಪಟ್ಟಿರುವ ವಿದ್ಯಾಥಿಗಳು. ಗಗನ್, ಜಶ್ವಂತ್, ಹರ್ಣಿನಿ.ಎಸ್, ಹರ್ಷಿಣಿ.ಜಿ ನಾಲ್ವರಿಗೆ ಗಂಭೀರವಾಗಿ ಗಾಯಗಳಾಗಿವೆ. ಕಾರು ಜಖಂಗೊಂಡಿದೆ.

ಅಪಘಾತದಲ್ಲಿ ಮೃತಪಟ್ಟ ಇಬ್ಬರು ಹಾಗೂ ಗಾಯಗೊಂಡಿರುವ ನಾಲ್ವರು ವಿದ್ಯಾರ್ಥಿಗಳು, ಬೆಂಗಳೂರಿನ ಸಪ್ತಗಿರಿ ಕಾಲೇಜಿನಲ್ಲಿ ಎರಡನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಿಂದ ಪ್ರಾಜೆಕ್ಟ್ ವರ್ಕ್ ಮೇಲೆ ಕುಣಿಗಲ್ ಬಳಿಯ ಉತ್ತರಿ ಬೆಟ್ಟಕ್ಕೆ ಹೋಗುವ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಗಗನ್, ಜಶ್ವಂತ್ ಇಬ್ಬರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು, ಹರ್ಷಿಣಿ, ಹರ್ಣಿನಿಗೆ ನೆಲಮಂಗಲ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತಪಟ್ಟ ಇಬ್ಬರು ವಿದ್ಯಾರ್ಥಿಗಳ ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಿದರು.

ಪೋಷಕರ ಆಕ್ರಂದನ : ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ವಿದ್ಯಾರ್ಥಿಗಳ ಪೋಷಕರು ಮಕ್ಕಳ ಆರೋಗ್ಯವನ್ನು ವಿಚಾರಿಸುತ್ತಿದ್ದಾರೆ. ಇನ್ನೂ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸಂಬಂಧ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.