ಸಾರಾಂಶ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ನಡೆದ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಎಲ್ಲಾ ಅಧಿಕಾರಿಗಳು ಮುಂಜಾಗ್ರತೆಯಾಗಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸೂಚನೆ ನೀಡಿದರು.
ಜಿಪಂ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಈಗಾಗಲೇ ಕಡೂರು-ಅಜ್ಜಂಪುರ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಹಾಗೂ ಕೊಪ್ಪ, ನರಸಿಂಹರಾಜಪುರ, ಶೃಂಗೇರಿ, ಮೂಡಿಗೆರೆ ಹಾಗೂ ಕಳಸ ತಾಲೂಕು ಗಳನ್ನು ಸಾಧಾರಣ ಬರ ಪೀಡಿತ ಪ್ರದೇಶವೆಂದು ಸರ್ಕಾರ ಘೋಷಿಸಿದ್ದು, ಅದರಂತೆ ಜಿಲ್ಲೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಪೂರೈಕೆಯಲ್ಲಿ ವ್ಯತ್ಯಯ ವಾಗದಂತೆ ಸಿದ್ಧತೆ ಮಾಡಿಕೊಳ್ಳಲು ಸೂಚಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು ಅವರು ಕೂಡಲೆ ಎಲ್ಲ ತಾಲೂಕು ಅಧಿಕಾರಿಗಳ ಸಭೆ ನಡೆಸಿ ಪ್ರತಿ ಹಳ್ಳಿಗಳ ಮಾಹಿತಿ ಪಡೆದು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಸಾಂಕ್ರಾಮಿಕ ರೋಗಗಳ ಬಗ್ಗೆ ಎಚ್ಚರ ವಹಿಸುವುದು ಬಹಳ ಮುಖ್ಯವಾಗಿದೆ ಎಂದು ಹೇಳಿದರು.ಹಳೇ ಬೋರ್ ವೆಲ್‌ಗಳನ್ನು ಮರುಪೂರಣಗೊಳಿಸುವಂತೆ ತಿಳಿಸಿದ ಅವರು, ಕುಡಿವ ನೀರಿನ ಸಮಸ್ಯೆ ಇರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ಆ ಮೂಲಕ ಗ್ರಾಮಗಳಿಗೆ ನೀರು ಒದಗಿಸಬೇಕು. ಖಾಸಗಿ ಬೋರ್‌ವೆಲ್ ಲಭ್ಯವಿಲ್ಲದ ಕಡೆ ಟ್ಯಾಂಕರ್‌ಗಳ ಮೂಲಕ ನೀರನ್ನು ಸರಬರಾಜಿಗೆ ಯೋಜನೆ ರೂಪಿಸಬೇಕು. ಕೃಷಿ, ಕುಡಿವ ನೀರು, ವಿದ್ಯುತ್ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ಜಿಲ್ಲೆಯಲ್ಲಿ ಅಗತ್ಯವಿರುವ ಕಡೆಗಳಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ತೆರೆಯಲು ಸರ್ವೆ ಮಾಡಿ ಅಗತ್ಯ ಕ್ರಮಕೈಗೊಳ್ಳಲು ತಾಲೂಕು ತಹಸೀಲ್ದಾರ್‌ಗಳು, ನೋಡಲ್ ಅಧಿಕಾರಿಗಳು ಹಾಗೂ ಸಂಬಂಧ ಪಟ್ಟ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು. ಬರ ನಿರ್ವಹಣೆ ಕುರಿತು ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ತಾಲೂಕು ಅಧಿಕಾರಿಗಳು ನರೇಗ ಯೋಜನೆಯಲ್ಲಿ ಗ್ರಾಮಗಳ ಕೆರೆ ಒತ್ತುವರಿ, ನಿರ್ವಹಣೆ, ಸ್ಮಶಾನ ಅಭಿವೃದ್ಧಿ ಹಾಗೂ ಒತ್ತುವರಿ ಕುಡಿಯುವ ನೀರಿನ ಯೋಜನೆಗಳು ಹಾಗೂ ಚೆಕ್ ಡ್ಯಾಂಗಳನ್ನು ನಿರ್ಮಿಸು ವುದು ಸೇರಿದಂತೆ ನರೇಗ ಹಾಗೂ ಬರ ನಿರ್ವಹಣೆ ಯೋಜನೆಯಲ್ಲಿ ಹಲವು ಉಪಯುಕ್ತ ಕಾರ್ಯ ಕ್ರಮಗಳ ಯೋಜನಾ ಪಟ್ಟಿ ಸಿದ್ದಪಡಿಸಿ ಶೀಘ್ರ ಸಲ್ಲಿಸಬೇಕು ಎಂದು ಸೂಚಿಸಿದರು.
ಗ್ರಾಪಂಗಳ ಮೂಲಕ ಗರಿಷ್ಠ ದಿನಗಳ ಉದ್ಯೋಗ ಸೃಷ್ಠಿಗೆ ಯೋಜನೆ ರೂಪಿಸಬೇಕು, ನಮ್ಮ ಜಿಲ್ಲೆಯಿಂದ ಜಾನುವಾರುಗಳ ಮೇವನ್ನು ಹೊರ ಜಿಲ್ಲೆ ಅಥವಾ ರಾಜ್ಯಕ್ಕೆ ಸರಬರಾಜಾಗುವುದನ್ನು ತಡೆಗಟ್ಟಬೇಕು. ಈ ಬಗ್ಗೆ ಎಲ್ಲ ಗ್ರಾಪಂ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರ ವಹಿಸಿ ಜಿಲ್ಲೆಯ ಗಡಿಭಾಗದ ಚೆಕ್ ಪೋಸ್ಟ್ ಗಳ ಬಳಿ ನಿಗಾ ವಹಿಸಿಬೇಕು ಎಂದರು. ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿರುವ ಮೇವನ್ನು ಎಲ್ಲಿಯೂ ಸಾಗಾಟಕ್ಕೆ ಅವಕಾಶ ಕಲ್ಪಿಸಬಾರದು. ಕೃಷಿ, ತೋಟಗಾರಿಕೆ ಮತ್ತಿತರ ಬೆಳೆಗಳ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಲು ಅಧಿಕಾರಿಗಳು ಸ್ಥಳಗಳಿಗೆ ಭೇಟಿ ಮಾಡಿ ಸಾಧ್ಯವಾದಷ್ಟು ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ ಮಾಹಿತಿ ಕಲೆವ್ಯವಸ್ಥೆ ಕಲ್ಪಿಸಿ ಎಂದು ಹೇಳಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ನಾರಾಯಣ ರೆಡ್ಡಿ ಕನಕ ರೆಡ್ಡಿ ಹಾಗೂ ಜಿಲ್ಲೆಯ ಎಲ್ಲಾ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು. 7 ಕೆಸಿಕೆಎಂ 3