ಸಾರಾಂಶ
ಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರಚಾಮರಾಜನಗರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೆರೆಯಲಾಗಿರುವ ವಿವಿಧ ಚೆಕ್‌ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಾಗಿ ತಪಾಸಣಾ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣಾ ಪ್ರಕ್ರಿಯೆ ನಿರ್ವಹಣೆ ಕುರಿತು ಚಾಮರಾಜನಗರ ಲೋಕಸಭಾ ಕ್ಷೇತ್ರವ್ಯಾಪ್ತಿಯ ವಿಧಾನಸಭಾ ಕ್ಷೇತ್ರವಾರು ಸಹಾಯಕ ಚುನವಣಾಧಿಕಾರಿಗಳು, ನಿಯೋಜಿತ ನೋಡೆಲ್ ಅಧಿಕಾರಿಗಳೊಂದಿಗೆ ನಡೆದ ವರ್ಚುವೆಲ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಕ್ಷೇತ್ರವ್ಯಾಪ್ತಿಯಲ್ಲಿ ಈಗಾಗಲೇ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಹೆಚ್.ಡಿ.ಕೋಟೆ, ನಂಜನಗೂಡು, ವರುಣ, ಟಿ. ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಂತರರಾಜ್ಯ ಹಾಗೂ ಅಂತರಜಿಲ್ಲಾ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯವನ್ನು ಚುರುಕುಗೊಳಿಸಬೇಕು. ದಾಖಲೆ ಇಲ್ಲದೇ ಸಾಗಿಸುವ ಹಣ, ಅಕ್ರಮ ಮದ್ಯ ಸಾಗಣೆ, ಅಮಿಷ ಒಡ್ಡುವ ವಸ್ತುಗಳ ಮೇಲೆ ಹೆಚ್ಚಿನ ನಿಗಾ ಇರಬೇಕು. ಎಲ್ಲಾ ವಾಹನಗಳನ್ನು ವ್ಯಾಪಕವಾಗಿ ತಪಾಸಣೆ ಮಾಡಬೇಕೆಂದರು. ಚೆಕ್‌ಪೋಸ್ಟ್‌ಗಳಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ವ್ಯವಸ್ಥೆ ಇರಬೇಕು. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗೆ ಅವಶ್ಯವಾಗಿರುವ ಜರ್ಕಿನ್, ಟಾರ್ಚ್‌ಗಳಿರಬೇಕು, ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಟಿವಿ ಕಾರ್ಯನಿರ್ವಹಿಸಬೇಕು. ವಿದ್ಯುತ್ ಅಡಚಣೆಯಾಗದಿರಲು ಯುಪಿಎಸ್ ವ್ಯವಸ್ಥೆ ಸಹ ಇರಬೇಕು ಎಂದು ನಿರ್ದೇಶನ ನೀಡಿದರು.ಚೆಕ್‌ಪೋಸ್ಟ್‌ಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಿಬ್ಬಂದಿ ವಾಹನಗಳನ್ನು ಕೂಲಂಕುಷವಾಗಿ ವಾಹನ ತಪಾಸಣೆ ಮಾಡಬೇಕು. ಈ ಬಗ್ಗೆ ವಹಿ (ರಿಜಿಸ್ಟರ್)ಗಳಲ್ಲಿ ಕಡ್ಡಾಯವಾಗಿ ನಮೂದಿಸಬೇಕು. ಚುನಾವಣಾ ಕೆಲಸಗಳಿಗಾಗಿ ನಿಯೋಜಿತರಾಗಿರುವ ಎಆರ್‌ಒ ಮತ್ತು ತಹಸೀಲ್ದಾರರು ಭೇಟಿ ನೀಡಿ ಚೆಕ್ ಪೋಸ್ಟ್ ಕಾರ್ಯನಿರ್ವಹಣೆಯನ್ನು ಪರಿಶೀಲಿಸಬೇಕೆಂದರು.ಮಾದರಿ ನೀತಿ ಸಂಹಿತೆ ಪಾಲನೆಗೆ ನಿಗಾ ವಹಿಸಲು ನಿಯೋಜಿತರಾಗಿರುವ ಫೈಯಿಂಗ್ ಸ್ಕ್ವಾಡ್ ತಂಡ, ವಿಡಿಯೋ ಸರ್ವೇಲೆನ್ಸ್ ಘಟಕ, ವಿಡಿಯೋ ವೀವಿಂಗ್ ತಂಡಗಳು ಹೆಚ್ಚು ಚಟುವಟಿಕೆಯಿಂದ ಕೆಲಸ ನಿರ್ವಹಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಚುನಾವಣಾ ಸಂಬಂಧ ನೇಮಕವಾಗಿರುವ ಇನ್ನಿತರ ತಂಡಗಳ ಕಾರ್ಯಚಟುವಟಿಕೆಗಳನ್ನು ಸಮಗ್ರವಾಗಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಎಲ್ಲಾ ಅಧಿಕಾರಿಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸುವಂತೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾಮಟ್ಟದ ಅಧಿಕಾರಿಗಳು, ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.