ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕೇಸು: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

| Published : Mar 13 2025, 12:49 AM IST

ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆದರೆ ಕೇಸು: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ
Share this Article
  • FB
  • TW
  • Linkdin
  • Email

ಸಾರಾಂಶ

ನಗರಸಭೆ ಸಿಬ್ಬಂದಿಯಿಂದ ನಿರಂತರವಾಗಿ ನಿಗಾ ವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚಬೇಕು.

ಕಾರವಾರ: ಜಿಲ್ಲೆಯಲ್ಲಿನ ಎಲ್ಲ ನಗರ ಸ್ಥಳೀಯ ಸಂಸ್ಥೆಗಳು, ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಕಸ ಎಸೆಯುವವರು, ಹಾಕುವವರ ವಿರುದ್ಧ ಗರಿಷ್ಠ ಮಟ್ಟದ ದಂಡ ವಸೂಲಿ ಮಾಡುವುದರ ಜತೆಗೆ ಪೊಲೀಸ್ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.ಇಲ್ಲಿನ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ನಡೆದ ಹಸಿ ಮತ್ತು ಘನ ತ್ಯಾಜ್ಯ ವಿಲೇವಾರಿ ಹಾಗೂ ಪ್ಲಾಸ್ಟಿಕ್ ನಿಯಂತ್ರಣ ಕುರಿತು ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಈಗಾಗಲೇ ಗುರುತಿಸಿರುವ ಬ್ಲಾಕ್ ಸ್ಪಾಟ್‌ಗಳಲ್ಲಿ ಸಿಸಿಟಿವಿ ಅಳವಡಿಸುವ ಮೂಲಕ

ಮತ್ತು ನಗರಸಭೆ ಸಿಬ್ಬಂದಿಯಿಂದ ನಿರಂತರವಾಗಿ ನಿಗಾ ವಹಿಸುವ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನು ಪತ್ತೆ ಹಚ್ಚಬೇಕು. ಕಸ ಹಾಕುವವರಿಗೆ ಗರಿಷ್ಠ ಮಟ್ಟದ ದಂಡವನ್ನು ವಿಧಿಸುವ ಜತೆಗೆ ಸಾರ್ವಜನಿಕ ಸ್ಥಳವನ್ನು ವಿರೂಪಗೊಳಿಸಿದ ಕುರಿತಂತೆ ಪೊಲೀಸ್ ಪ್ರಕರಣವನ್ನು ದಾಖಲಿಸಿ, ಪ್ರಕರಣ ದಾಖಲಿಸಿದ ಮತ್ತು ದಂಡ ಸಂಗ್ರಹಿಸಿ ಪ್ರಗತಿಯ ವರದಿಯನ್ನು ನೀಡುವಂತೆ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯ ವ್ಯಾಪ್ತಿಯಲ್ಲಿ ತ್ಯಾಜ್ಯ ಕಂಡು ಬಂದಲ್ಲಿ ಸಂಬಂಧಪಟ್ಟ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೆದ್ದಾರಿಯಲ್ಲಿ ಪ್ರವಾಸಿಗರಿಗಿಂತ ಸ್ಥಳೀಯರಿಂದಲೇ ಹೆಚ್ಚಿನ ಪ್ರಮಾಣದ ತ್ಯಾಜ್ಯ ಸಂಗ್ರಹವಾಗುತ್ತಿದ್ದು, ಈ ಬಗ್ಗೆ ಪರಿಶೀಲಿಸಬೇಕು. ನಗರ ಪ್ರದೇಶದಲ್ಲಿ ಕಸ ಹಾಕುವ ಪ್ರದೇಶದಲ್ಲಿನ ಅಕ್ಕಪಕ್ಕದ ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿ ಕಸ ಹಾಕುವವರನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರೂ ಕೂಡ ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರ ಕುರಿತು ಮಾಹಿತಿಯನ್ನು ನಗರ ಸ್ಥಳೀಯ ಸಂಸ್ಥೆಗೆ ನೀಡುವ ಮೂಲಕ ತಮ್ಮ ನಗರವನ್ನು ಸ್ವಚ್ಛವಾಗಿಡಲು ಸಹಕರಿಸಬೇಕು ಎಂದರು.

ಜಿಲ್ಲೆಯಲ್ಲಿ ಹಸಿ ಮತ್ತು ಒಣ ತ್ಯಾಜ್ಯ ಸಂಗ್ರಹಣೆಯನ್ನು ವ್ಯವಸ್ಥಿತವಾಗಿ ಸಂಗ್ರಹಿಸಬೇಕು. ಸಂಗ್ರಹಿಸಿದ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಂಗಡಣೆ ಮಾಡಿ ಅದನ್ನು ಆದಾಯದ ಮೂಲವನ್ನಾಗಿ ಪರಿವರ್ತಿಸಬೇಕು. ಹಸಿ ಕಸದಿಂದ ಕಾಂಪೋಸ್ಟ್ ತಯಾರಿಕೆಗೆ ಆದ್ಯತೆ ನೀಡಬೇಕು. ಒಣ ಕಸವನ್ನು ಸಂಸ್ಕರಿಸಿ ಮಾರಾಟ ಮಾಡಬೇಕು ಎಂದ ಅವರು ಮನೆಗಳಲ್ಲಿ ಸಂಗ್ರಹವಾಗುವ ಹಸಿಕಸವನ್ನು ಮನೆಗಳಲ್ಲಿಯೇ ವಿಲೇವಾರಿ ಮಾಡುವ ಬಗ್ಗೆ ಸಾರ್ವಜನಿಕರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಇ-ತ್ಯಾಜ್ಯ ಸಂಗ್ರಹಣೆ ಕುರಿತಂತೆ ಅರಿವು ಮೂಡಿಸಿ, ಆಭಿಯಾನ ಮಾದರಿಯಲ್ಲಿ ಕ್ರಮ ಕೈಗೊಂಡು ಈ ತಿಂಗಳ ಅಂತ್ಯಕ್ಕೆ ಸಂಗ್ರಹಿಸಿದ ಇ-ತ್ಯಾಜ್ಯದ ವಿವರಗಳನ್ನು ನೀಡಬೇಕು. ಜಿಲ್ಲೆಯಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು. ಈ ಬಗ್ಗೆ ನಗರ ಸ್ಥಳೀಯ ಸಂಸ್ಥೆಗಳು ಮತ್ತು ಮಾಲಿನ್ಯ ನಿಯಮತ್ರಣ ಮಂಡಳಿಯಿಂದ ನಿರಂತರವಾಗಿ ದಾಳಿಗಳನ್ನು ನಡೆಸಬೇಕು. ಏಕಬಳಕೆ ಪ್ಲಾಸ್ಟಿಕ್‌ಗೆ ಪರ್ಯಾಯವಾಗಿ ಲಭ್ಯವಿರುವ ವಸ್ತುಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ಅಂಗಡಿ ಮಾಲೀಕರಿಗೆ ತಿಳಿಸುವ ಜತೆಗೆ ಜಿಲ್ಲಾದ್ಯಂತ ಈ ಕುರಿತು ವಸ್ತು ಪ್ರದರ್ಶನ ಆಯೋಜಿಸುವಂತೆ ಸೂಚಿಸಿದರು. ಜಿಲ್ಲಾ ಮಟ್ಟದ ಕಾರ್ಯಪಡೆ ಸಮಿತಿ ಸಭೆಯನ್ನು ಕಡ್ಡಾಯವಾಗಿ 3 ತಿಂಗಳಿಗೊಮ್ಮೆ ನಡೆಸುವ ಮೂಲಕ ಜಿಲ್ಲೆಯನ್ನು ಸಂಪೂರ್ಣ ತ್ಯಾಜ್ಯ ಮುಕ್ತ ಸ್ವಚ್ಛ ಜಿಲ್ಲೆಯನ್ನಾಗಿ ಮಾಡಲು ಶ್ರಮವಹಿಸಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರೀ ಸಿ.ಎಂ., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಜಿಪಂ ಉಪ ಕಾರ್ಯದರ್ಶಿ ನಾಗೇಶ ರಾಯ್ಕರ್, ಜಿಲ್ಲಾ ಪರಿಸರ ಅಧಿಕಾರಿ ಬಿ.ಕೆ. ಸಂತೋಷ್, ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳು ಪೌರಾಯುಕ್ತರು, ಮುಖ್ಯಾಧಿಕಾರಿಗಳು ಇದ್ದರು.