ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಮಡಿಕೇರಿ : ರಾಜ್ಯದ ಜಲಾಶಯಗಳು ಇನ್ನೂ ಸಂಪೂರ್ಣವಾಗಿ ತುಂಬಿಲ್ಲ. ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕು. ಎರಡೂ ಬಹಳ ಮುಖ್ಯ. ಕಾವೇರಿ ವಿಚಾರದಲ್ಲಿ ರೈತರ ಹಿತ ಕಾಯುವುದು ನನ್ನ ಕರ್ತವ್ಯ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಹೇಳಿದರು.
ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಅವರು ಮಾತನಾಡಿದರು. ಕುಡಿಯುವ ನೀರು, ಕೃಷಿಗೆ ಜಲಾಶಯಗಳಲ್ಲಿನ ನೀರಿನ ಲಭ್ಯತೆ ಗಮನದಲ್ಲಿಟ್ಟುಕೊಂಡೇ ನಾವು ನಿರ್ಧಾರ ಕೈಗೊಳ್ಳಬೇಕು. ಉತ್ತಮ ಮಳೆಯಾಗಿ ಬೆಳೆ ಸಮೃದ್ಧಿಯಾಗಬೇಕು, ರೈತರಿಗೆ ಅನ್ನ ಸಿಗಬೇಕು ಎಂಬುದು ನಮ್ಮ ಆಶಯ ಎಂದರು.
ನಮ್ಮ ರಾಜ್ಯದ ಒಳಗೆ ಯಾವುದೇ ಅಣೆಕಟ್ಟು ಕಟ್ಟಲು ಅಭ್ಯಂತರವಿಲ್ಲ ಎಂದು ಸುಪ್ರೀಂಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ. ಕೇಂದ್ರ ಸರ್ಕಾರ ಕೂಡ ತಮಿಳುನಾಡಿನ ಸಂಸದರಿಗೆ ಉತ್ತರ ನೀಡುವಾಗ ಈ ಕುರಿತು ಸ್ಪಷ್ಟಪಡಿಸಿದೆ. ಮೇಕೆದಾಟು ನಿರ್ಮಾಣದಿಂದ ತಮಿಳುನಾಡಿಗೆ ನಿಗದಿಯಾಗಿರುವ 177.25 ಟಿಎಂಸಿ ನೀರಿನ ಹಂಚಿಕೆಗೆ ತೊಂದರೆಯಾಗುವುದಿಲ್ಲ ಎಂದರು.
ಸಂಕಷ್ಟದ ಸಂದರ್ಭದಲ್ಲಿ ನೀರು ಹಂಚಿಕೆಗೆ ಪ್ರತ್ಯೇಕ ನಿಯಮಗಳಿವೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವೂ ಈ ಬಗ್ಗೆ ಅಗತ್ಯ ನಿರ್ದೇಶನಗಳನ್ನು ನೀಡಿದೆ. ನಮ್ಮ ಡ್ಯಾಂಗಳಲ್ಲಿ ನೀರಿನ ಲಭ್ಯತೆ ಕಡಿಮೆಯಾದರೆ ಅನಗತ್ಯ ಸಂಕಷ್ಟ ಎದುರಾಗಬಹುದು. ಆ ಪರಿಸ್ಥಿತಿ ಬರಬಾರದು. ನಾವು ಕಾನೂನು ಪಾಲಿಸದಿದ್ದರೆ ಅಣೆಕಟ್ಟು ನಿಯಂತ್ರಣವನ್ನು ಕೇಂದ್ರ ಸರ್ಕಾರಕ್ಕೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು ಎಂದರು.
ಕಾವೇರಿ ಹಾಗೂ ಕನ್ನಂಬಾಡಿ ಕಟ್ಟೆ, ನಮಗೆ ಅನ್ನದ ತಟ್ಟೆ ಇದ್ದ ಹಾಗೆ. ನಮ್ಮ ರೈತರು ಬೆಳೆ ತೆಗೆಯಲಿ, ಅವರು ಉಳಿಯಲಿ ಎಂದು ತಾಯಿ ಕಾವೇರಿಗೆ ಪ್ರಾರ್ಥನೆ ಸಲ್ಲಿಸಿದ್ದೇನೆ. ಈ ಹಿಂದೆ ಮೇಕೆದಾಟು ಹೋರಾಟದ ಸಂದರ್ಭದಲ್ಲಿಯೂ ನಮ್ಮ ನೀರು, ನಮ್ಮ ಹಕ್ಕು ಎಂಬ ಘೋಷಣೆಯಡಿ ಕಾವೇರಿ ತಾಯಿಗೆ ಪ್ರಾರ್ಥನೆ ಸಲ್ಲಿಸಿದ್ದೆ. ಮೂರು ವರ್ಷಕ್ಕೊಮ್ಮೆ ಇಂತಹ ನೀರಿನ ಸಮಸ್ಯೆ ಎದುರಾಗುವುದು ಪ್ರಕೃತಿಯ ನಿಯಮ ಎಂದರು.ಹೋರಾಟಕ್ಕೆ ಸಿಕ್ಕ ಫಲ:
ರಾಜ್ಯದ ಜನತೆ, ಪಕ್ಷದ ನಾಯಕರು ಹಾಗೂ ಗುರುಗಳ ಆಶೀರ್ವಾದದಿಂದ, ಕಳೆದ 45 ವರ್ಷಗಳಿಂದ ನಾನು ನಡೆಸಿದ ಹೋರಾಟಕ್ಕೆ ಈಗ ಫಲ ಸಿಕ್ಕಿದೆ. ನನ್ನ ಪ್ರಾರ್ಥನೆಗೆ ಈಗ ಫಲ ಸಿಕ್ಕಿದೆ ಎನ್ನುವ ಮೂಲಕ ಪರೋಕ್ಷವಾಗಿ ತಮಗೆ ಸಿಎಂ ಪದವಿ ಸಿಕ್ಕಿದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಭಗಂಡೇಶ್ವರ ದೇವಾಲಯಕ್ಕೆ ಭೇಟಿ, ವಿಶೇಷ ಪೂಜೆ:ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ ಶಿವಕುಮಾರ್ ಜೊತೆ ಪುಣ್ಯಕ್ಷೇತ್ರ ಭಾಗಮಂಡಲದ ಭಗಂಡೇಶ್ವರ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಮೊದಲಿಗೆ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದ ಸಿಎಂ, ನಂತರ ಭಗಂಡೇಶ್ವರ ದೇವಾಲಯದಲ್ಲಿ ಹೆಚ್ಚಿನ ಮಳೆ, ಬೆಳೆಯಾಗಿ ನಾಡಿನಲ್ಲಿ ಶಾಂತಿ, ನೆಮ್ಮದಿ ಮತ್ತು ಸಮೃದ್ಧಿ ತರುವಂತಾಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, ಮಹಾಗಣಪತಿ, ಮಹಾವಿಷ್ಣು, ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿದರು.
ತನಿಖೆ ಬಳಿಕ ಶೂಟೌಟ್ ಪ್ರಕರಣಕ್ಕೆ ಸ್ಪಷ್ಟತೆ:
ಹನೂರು ಶೂಟೌಟ್ ಬಗ್ಗೆ ಪ್ರತಿಕ್ರಿಯಿಸಿ, ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಶಂಕಿತ ಬೇಟೆಗಾರರ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರ ಬಳಿ ಕೋವಿ ಮತ್ತು 2 ಚೀಲ ಮಾಂಸ ಪತ್ತೆಯಾಗಿದೆ. ಓರ್ವ ಪರಾರಿಯಾಗಿದ್ದಾನೆ. ತನಿಖೆ ನಂತರ ಈ ಬಗ್ಗೆ ಸ್ಪಷ್ಟತೆ ದೊರಕಲಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಡಿಸೆಂಬರ್ ಒಳಗೆ ಜಿಪಂ, ತಾಪಂ ಚುನಾವಣೆ:
ಬಳಿಕ, ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ರಾಜ್ಯದಲ್ಲಿ ಡಿಸೆಂಬರ್ ಒಳಗೆ ಎಲ್ಲಾ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳನ್ನು ನಡೆಸಲಾಗುವುದು. ನೀವೆಲ್ಲ ಕಾರ್ಯಕರ್ತರಿಗೆ ಅಧಿಕಾರ ನೀಡಬೇಕು. ಅದರ ಮೂಲಕ ಎಲ್ಲಾ ಕೆಲಸ ಕಾರ್ಯಗಳಿಗೆ ವೇಗ ನೀಡಬೇಕು ಎಂದು ಕರೆ ನೀಡಿದರು.
ಗ್ರಾಮೀಣಾಭಿವೃದ್ಧಿ ಬಗ್ಗೆ ಮಾತನಾಡಿ, ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಭಾರತ್ ಜೋಡೋ ಯುವ ಘಟಕವನ್ನು ನಿರ್ಮಾಣ ಮಾಡಲಾಗುವುದು. ಪ್ರತಿ ಪಂಚಾಯಿತಿಗೆ 10 ಲಕ್ಷ ರೂ. ಅನುದಾನ ನೀಡಲಾಗುವುದು. ಇದು ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
