ಐತಿಹಾಸಿಕ ಸತ್ತೇಗಾಲ ದರ್ಗಾ ಅಭಿವೃದ್ಧಿಗೆ 1 ಕೋಟಿ ರು.ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿಪೂಜೆಯನ್ನು ನೆರವೇರಿಸಿದರು. ಕೊಳ್ಳೇಗಾಲ-ಹನೂರು ವಿಧಾನಸಭಾ ಕ್ಷೇತ್ರದ ಸತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ದರ್ಗಾಕ್ಕೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 1 ಕೋಟಿ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಹನೂರು

ಐತಿಹಾಸಿಕ ಸತ್ತೇಗಾಲ ದರ್ಗಾ ಅಭಿವೃದ್ಧಿಗೆ 1 ಕೋಟಿ ರು.ವೆಚ್ಚದಲ್ಲಿ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಶಾಸಕ ಎಂ.ಆರ್. ಮಂಜುನಾಥ್ ಭೂಮಿಪೂಜೆಯನ್ನು ನೆರವೇರಿಸಿದರು. ಕೊಳ್ಳೇಗಾಲ-ಹನೂರು ವಿಧಾನಸಭಾ ಕ್ಷೇತ್ರದ ಸತ್ತೇಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಐತಿಹಾಸಿಕ ದರ್ಗಾಕ್ಕೆ ಮೂಲಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 1 ಕೋಟಿ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಆರ್.ಮಂಜುನಾಥ್ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ, ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಈ ದರ್ಗಾ ಧಾರ್ಮಿಕ ನಂಬಿಕೆ ಹಾಗೂ ಸರ್ವಧರ್ಮಗಳ ಭಾವೈಕ್ಯತೆಯ ಪ್ರತೀಕವಾಗಿದೆ. ಚಾಮರಾಜನಗರ, ಹನೂರು, ಕೊಳ್ಳೇಗಾಲ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ಚಿಕ್ಕಬಳ್ಳಾಪುರ, ಚಿಂತಾಮಣಿ ಭಾಗಗಳಿಂದಲೂ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ. ಇಂತಹ ಐತಿಹಾಸಿಕ ಧಾರ್ಮಿಕ ಕ್ಷೇತ್ರದ ಅಭಿವೃದ್ಧಿ ಹಾಗೂ ಭಕ್ತರಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದರು.

ದರ್ಗಾಕ್ಕೆ ಆಗಮಿಸುವ ಭಕ್ತರು ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಸಿಸಿ ರಸ್ತೆ, ಚರಂಡಿ ಹಾಗೂ ಶೌಚಾಲಯ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಕಾಮಗಾರಿಯಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಸೂಚಿಸಲಾಗಿದೆ. ರಸ್ತೆ ಮತ್ತು ಚರಂಡಿ ಕಾಮಗಾರಿಗೆ ವಿಶೇಷ ಅನುದಾನದಲ್ಲಿ ಸುಮಾರು 1 ಕೋಟಿ ರು. ವೆಚ್ಚ ಮಾಡಲಾಗುತ್ತಿದ್ದು, ಶೌಚಾಲಯ ನಿರ್ಮಾಣಕ್ಕೆ ಪ್ರತ್ಯೇಕ ಅನುದಾನ ಒದಗಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಉಳಿತಾಯ ಅನುದಾನದಿಂದ ದರ್ಗಾಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯೂ ನಡೆಯುತ್ತಿದೆ. ವಕ್ಫ್‌ ಬೋರ್ಡ್‌ನಿಂದ ದರ್ಗಾ ಅಭಿವೃದ್ಧಿಗಾಗಿ 8.5 ಕೋಟಿ ರು. ಅನುದಾನ ಕಾಯ್ದಿರಿಸಿರುವ ಬಗ್ಗೆ ಮಾಹಿತಿ ಇದೆ. ಈ ಹಿಂದೆ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಭೇಟಿಯಾಗಿ ಅಭಿವೃದ್ಧಿಗೆ ಮನವಿ ಸಲ್ಲಿಸಲಾಗಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅಂಗಡಿ ಮಾಲೀಕರ ಸಮಸ್ಯೆಗಳನ್ನು ಬಗೆಹರಿಸಿದ ಬಳಿಕ ಫುಡ್ ಕೋರ್ಟ್ ಮಾದರಿಯಲ್ಲಿ ಶಾಶ್ವತ ವ್ಯವಸ್ಥೆ ಕಲ್ಪಿಸಿ, ದರ್ಗಾ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಯೋಜನೆ ರೂಪಿಸಲಾಗಿದೆ ಎಂದರು.

ಮುಂದಿನ ಮೂರರಿಂದ ಆರು ತಿಂಗಳ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರಸ್ತುತ ದರ್ಗಾಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸುವುದು ಮೊದಲ ಆದ್ಯತೆಯಾಗಿದೆ. ಆರಂಭಿಸಿರುವ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಅಭಿವೃದ್ಧಿ ಕಾರ್ಯಗಳು ಸಮರ್ಪಕವಾಗಿ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆಯ ಎಇಇ ಕುಮಾರ್,ಎಇ ಮಂಜು, ಎಂಜಿನಿಯರ್ ರಂಗನಾಥ್, ಸತ್ತೇಗಾಲ ಗ್ರಾಪಂ ಮಾಜಿ ಅಧ್ಯಕ್ಷ ಮಲ್ಲೇಶ್, ಮುಖಂಡರುಗಳಾದ ಪ್ರಭುಸ್ವಾಮಿ, ಮಹಾದೇವ,ನಂಜುಂಡ, ನಾಗರಾಜು, ಶಾಂತರಾಜು, ಪನ್ನಾಡಿ ನಾಯ್ಕ, ವಿನ್ಸೆಂಟ್, ಜಮೀರ್, ರಾಹುಲಯ್ಯ,ಲೂರ್ದ್ ಸ್ವಾಮಿ, ವೆಂಕಟಾಚಲ ಇತರರು ಇದ್ದರು.