ಹೂ ಅಳತೆ ಮೋಸ ತಡೆಯಲು ಸಿಸಿ ಟಿವಿ ಅಳವಡಿಕೆ

| Published : Mar 26 2025, 01:35 AM IST

ಸಾರಾಂಶ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ರೈತರ ಸಭೆಯಲ್ಲಿಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಚಿತ್ರದುರ್ಗ ಎಪಿಎಂಸಿ ಆವರಣದ ಹೂವಿನ ಮಾರುಕಟ್ಟೆಯಲ್ಲಿ ಅಳತೆಯಲ್ಲಿ ರೈತರಿಗೆ ಮೋಸವಾಗದಂತೆ ಹೆಚ್ಚಿನ ಸಿ.ಸಿ ಟಿವಿ ಕ್ಯಾಮೆರಾ ಅಳವಡಿಸಬೇಕು, ಜೊತೆಗೆ ಮೇಲ್ವಿಚಾರಣೆಗಾಗಿ ಎಪಿಎಂಸಿ ಸಿಬ್ಬಂದಿ ನೇಮಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಎಪಿಎಂಸಿ ಕಾರ್ಯದರ್ಶಿ ಕೃಷ್ಣಪ್ಪ ಅವರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ರೈತರ ಸಭೆಯಲ್ಲಿ ಮಾತನಾಡಿದ ಅವರು, ಎಪಿಎಂಸಿಗಳು ರೈತರ ಜೀವನಾಡಿ. ರೈತರಿಗೆ ಮೋಸವಾದರೆ ನಿರ್ಧಾಕ್ಷಿಣ್ಯವಾಗಿ ಕ್ರಮವಹಿಸಬೇಕು. ಯಾರಿಗೂ ಹೆದರುವ ಅಗತ್ಯವಿಲ್ಲ. ನಿಸ್ಪಕ್ಷಪಾತವಾಗಿ ಕಾರ್ಯನಿರ್ವಹಿಸಬೇಕು. ಎಪಿಎಂಸಿಯಲ್ಲಿ ಯಾವುದೇ ದೂರುಗಳು ಬಾರದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಕಳೆದ 25 ವರ್ಷದಿಂದಲೂ ಎಪಿಎಂಸಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಹೂವಿನ ಮಾರುಕಟ್ಟೆಯಲ್ಲಿ ಸಮಸ್ಯೆಗಳು ಇದ್ದರೆ ಲಿಖಿತವಾಗಿ ದೂರು ನೀಡಿದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ಎಪಿಎಂಸಿ ಕಾರ್ಯದರ್ಶಿ ಕೃಷ್ಣಪ್ಪ ತಿಳಿಸಿದರು.

ರೈತರ ಸಮಸ್ಯೆಗಳ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಬೆಸ್ಕಾಂ, ಕೆಪಿಟಿಸಿಎಲ್, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳನ್ನು ಒಳಗೊಂಡಂತೆ ಇಲಾಖೆವಾರು ರೈತರ ಸಮಸ್ಯೆಗಳನ್ನು ಪಟ್ಟಿಮಾಡಿಕೊಂಡು, ಇಲಾಖೆ ಮುಖ್ಯಸ್ಥರ ಸಮ್ಮುಖದಲ್ಲಿ ರೈತರ ಸಮಸ್ಯೆ ಬಗೆಹರಿಸಲಾಗುವುದು. ರೈತರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಯತ್ನ ಮಾಡಲಾಗುವುದು. ಇಲಾಖಾವಾರು ರೈತರ ಸಮಸ್ಯೆಗಳನ್ನು ಪಟ್ಟಿ ಮಾಡಿ ರೈತರ ಸಮಸ್ಯೆ ಪರಿಹಾರ ಸಂಬಂಧ ಯುಗಾದಿ ಹಬ್ಬದ ನಂತರ ಸಭೆಯ ದಿನಾಂಕ ನಿಗದಿಪಡಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಚಿತ್ರದುರ್ಗ ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ರೈತ ಮುಖಂಡರಾದ ಹಂಪಯ್ಯನಮಾಳಿಗೆ ಧನಂಜಯ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಕೆ.ಪಿ.ಭೂತಯ್ಯ, ಲಕ್ಷ್ಮಿಕಾಂತ್, ಬೇಡರೆಡ್ಡಿಹಳ್ಳಿ ಬಸವರೆಡ್ಡಿ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಸೇರಿದಂತೆ ಮತ್ತಿತರರು ಇದ್ದರು.