ಸಾರಾಂಶ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಬರುವ ಡಿಸೆಂಬರ್ 12 ರಿಂದ 14 ರವರೆಗೆ ಶಾಂತಿಯುತವಾಗಿ ದತ್ತ ಜಯಂತಿ ನಡೆಸುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಹೇಳಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ದತ್ತ ಜಯಂತಿ ಕಾರ್ಯಕ್ರಮದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರ ಮತ್ತು ನ್ಯಾಯಾಲಯದ ನಿರ್ದೇಶನದಂತೆ ವ್ಯವಸ್ಥಾಪನ ಸಮಿತಿ ಮೂಲಕ ಮೂರು ದಿನಗಳ ಕಾಲ ವಿವಿಧ ಪೂಜಾ ಕಾರ್ಯಕ್ರಮ ನಡೆಯಲಿದ್ದು, ಇದಕ್ಕೆ ಬೇಕಾದ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದತ್ತ ಜಯಂತಿ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ವಿವಿಧ ಜವಾಬ್ದಾರಿಗಳನ್ನು ನೀಡಲಾಗಿದೆ.
ರಸ್ತೆ, ಕುಡಿಯುವ ನೀರು, ಪಾರ್ಕಿಂಗ್, ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಸೂಚನಾ ಫಲಕಗಳನ್ನು ಆಳವಡಿಸಬೇಕು. ಆರೋಗ್ಯ ಸೇವೆ ಮತ್ತು ವಾಹನಗಳ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ಕಾರ್ಯಕ್ರಮ ಶಾಂತಿ ಮತ್ತು ವ್ಯವಸ್ಥಿತವಾಗಿ ನಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.ವ್ಯವಸ್ಥಾಪನ ಸಮಿತಿ ಪೂಜಾ ವಿಧಿ ವಿಧಾನಗಳನ್ನು ಮಾಡಲು ಎಲ್ಲಾ ರೀತಿಯ ಸಹಕಾರ ನೀಡಲಾಗಿದೆ. ಬರುವ ಭಕ್ತರಿಗೆ ಅಗತ್ಯ ಮೂಲಭೂತ ಸೌಕರ್ಯ ಸೇರಿದಂತೆ ಡಿ. 12 ರಂದು ಅನುಸೂಯ ಜಯಂತಿ ಮತ್ತು 14 ರಂದು ದತ್ತ ಜಯಂತಿಗೆ ಐಡಿ ಪೀಠಕ್ಕೆ ಬರುವ ಭಕ್ತಾಧಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುವುದು. ಹೊರ ಜಿಲ್ಲೆಗಳಿಂದ ಬರುವ ಭಕ್ತರು ಲಾಂಗ್ ಚಾರ್ಸಿ ಬಸ್ ಅಥವಾ ಇತರೆ ವಾಹನಗಳನ್ನು ಬಳಸದೆ ಸಣ್ಣ ಸಣ್ಣ ವಾಹನಗಳಲ್ಲಿ ಬಂದು ದರ್ಶನ ಮಾಡಬೇಕು. ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಅದೇ ಸ್ಥಳದಲ್ಲಿ ವಾಹನಗಳ ಪಾರ್ಕಿಂಗ್ ಮಾಡಬೇಕು. ಭಕ್ತರ ಅನುಕೂಲಕ್ಕಾಗಿ ಸೂಚನಾ ಫಲಕಗಳನ್ನು ಆಳವಡಿಸಲಾಗುವುದು. ಅವುಗಳನ್ನು ಪಾಲಿಸುವಂತೆ ಹಾಗೂ ಬರುವ ಭಕ್ತರು ಯಾವುದೇ ಕಾರಣಕ್ಕೂ ಅಹಿತಕರ ವಾತಾವರಣ ಉಂಟಾಗದಿರುವಂತೆ ಸಹಕರಿಸಬೇಕು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿಕ್ರಂ ಅಮಟೆ ಮಾತನಾಡಿ, ದತ್ತ ಜಯಂತಿ ಭದ್ರತೆಗಾಗಿ ಹೊರ ಜಿಲ್ಲೆಗಳಿಂದ ಬರುವ ಪೊಲೀಸ್ ಸಿಬ್ಬಂದಿಗೆ ಆರೋಗ್ಯ ಪರೀಕ್ಷೆ ಮಾಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಗಳಿಗೆ ತಿಳಿಸಿದ ಅವರು, ಕೆಎಸ್‌ಆರ್‌ಟಿಸಿ ಯಿಂದ ಮಿನಿ ಬಸ್‌ಗಳ ವ್ಯವಸ್ಥೆ ಮಾಡಬೇಕು. 3 ದಿನಗಳು ವಿದ್ಯುತ್ ಕಡಿತ ವಾಗದಂತೆ ಮೆಸ್ಕಾಂ ಅಧಿಕಾರಿಗಳು ಕ್ರಮವಹಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಮೂರ್ತಿ, ಉಪ ವಿಭಾಗಾಧಿಕಾರಿ ದಲ್ಜಿತ್ ಕುಮಾರ್, ತಹಸೀಲ್ದಾರ್ ಡಾ. ಸುಮಂತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
22 ಕೆಸಿಕೆಎಂ 5ಚಿಕ್ಕಮಗಳೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಡಿಸಿ ಮೀನಾ ನಾಗರಾಜ್ ಅಧ್ಯಕ್ಷತೆಯಲ್ಲಿ ದತ್ತ ಜಯಂತಿಯ ಪೂರ್ವಭಾವಿ ಸಭೆ ನಡೆಯಿತು. ಎಸ್ಪಿ ಡಾ. ವಿಕ್ರಂ ಅಮಟೆ, ಜಿಪಂ ಸಿಇಓ ಕೀರ್ತನಾ ಇದ್ದರು.