ಸಾರಾಂಶ
ಶಿವಮೊಗ್ಗ: ಜಿಲ್ಲೆಯಾದ್ಯಂತ ಆ.27ರಂದು ನಡೆಯಲಿರುವ ಗಣೇಶ ಚತುರ್ಥಿ ಮತ್ತು ಸೆಪ್ಟಂಬರ್ 5 ರಂದು ನಡೆಯಲಿರುವ ಈದ್ ಮಿಲಾದ್ ಹಬ್ಬಗಳನ್ನು ಸರ್ವಧರ್ಮಗಳ ಬಂಧುಗಳು ಸೌಹಾರ್ದಯುತವಾಗಿ ಸಡಗರ ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕರೆ ನೀಡಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲೆಯಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಹಬ್ಬಗಳ ಸಂದರ್ಭದಲ್ಲಿ ಬೈಕ್ ರ್‍ಯಾಲಿ ನಡೆಸುವುದು. ಡಿ.ಜೆ.ಧ್ವನಿವರ್ಧಕಗಳನ್ನು ಬಳಸಿ ಮೆರವಣಿಗೆ ಮಾಡದಂತೆ ಈಗಾಗಲೇ ಆದೇಶ ಹೊರಡಿಸಲಾಗಿದೆ. ಗಣಪತಿ ವಿಸರ್ಜನಾ ಸ್ಥಳಗಳಲ್ಲಿ ತೆಪ್ಪ ಇಟ್ಟುಕೊಂಡಿರಬೇಕು. ನೀರಿಗಿಳಿಯುವವರು ಈಜು ಬಲ್ಲವರಾಗಿದ್ದು, ಮೂರ್ನಾಲ್ಕು ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನ ನೀರಿಗೆ ಇಳಿಯಬಾರದು. ಅಲ್ಲದೇ ಲೈವ್ ಜಾಕೇಟ್‌ಗಳನ್ನು ಕಡ್ಡಾಯವಾಗಿ ಧರಿಸಿರಬೇಕು ಎಂದು ತಿಳಿಸಿದರು.ಪ್ರಮುಖ ಬೀದಿಗಳಲ್ಲಿ, ವರ್ತುಲಗಳಲ್ಲಿ ಸಾಕಷ್ಟು ಬೀದಿದೀಪಗಳನ್ನು ಅಳವಡಿಸಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಅಗತ್ಯವಿರುವಲ್ಲಿ ಡ್ರೋಣ್ ಕಣ್ಗಾವಲು ಇಡಲಾಗುವುದು ಎಂದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಧರ್ಮಗಳ ಹಬ್ಬ ಆಚರಣೆಗಳು ಶಾಂತಿ-ಸೌಹಾರ್ದಯುತವಾಗಿ ನಡೆಯಲು ಮಹಾನಗರಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಸ್ಥಳೀಯ ಪೊಲೀಸ್ ಇಲಾಖೆಯ ಅಧಿಕಾರಿಗಳೊಂದಿಗೆ ಸಹಕರಿಸಬೇಕು. ಉತ್ಸವ, ಮೆರವಣಿಗೆಗಳು ನಡೆಯುವ ಸ್ಥಳಗಳಲ್ಲಿ ಸಿ.ಸಿ. ಕ್ಯಾಮೆರಾ, ಬೀದಿದೀಪ ಅಳವಡಿಕೆ ಹಾಗೂ ರಾಜಬೀದಿಗಳ ಸ್ವಚ್ಛತೆ ಹಾಗೂ ಕಲ್ಲುಮಣ್ಣುಗಳ ರಾಶಿಗಳು ಇಲ್ಲದಿರುವಂತೆ ಗಮನಹರಿಸಬೇಕು. ಆರೋಗ್ಯ ಇಲಾಖೆಯಿಂದ ಅಂಬ್ಯುಲೆನ್ಸ್, ಸ್ಥಳೀಯ ಸಂಸ್ಥೆಗಳಿಂದ ಶುದ್ಧ ಕುಡಿಯುವ ನೀರಿನ ಸ್ಥಾವರಗಳನ್ನು ಅಗತ್ಯವಿರುವಲ್ಲಿ ಸ್ಥಾಪಿಸುವಂತೆ ಸೂಚಿಸಲಾಗಿದೆ. ಈ ಕಾರ್ಯದಲ್ಲಿ ಪೊಲೀಸ್ ಇಲಾಖೆಯು ಸಂಬಂಧಿತ ಇಲಾಖೆಯ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಲಿದೆ ಎಂದು ತಿಳಿಸಿದರು.
ಶಿವಮೊಗ್ಗ, ಭದ್ರಾವತಿ ಸೇರಿದಂತೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವೀಕ್ಷಣಾ ಗೋಪುರಗಳನ್ನು ನಿರ್ಮಿಸಲು ಸ್ಥಳೀಯ ಆಡಳಿತ ಗಮನಹರಿಸಬೇಕು. ಸಂಘ-ಸಂಸ್ಥೆಗಳ ಹಲವು ಕಾರ್ಯಕ್ರಮಗಳ ಪ್ರಚಾರಕ್ಕಾಗಿ ಸ್ಥಳೀಯ ಸಂಸ್ಥೆಗಳು ನೀಡಿರುವ ಪ್ರಚಾರ ಸಾಮಗ್ರಿಗಳನ್ನು ತಕ್ಷಣದಿಂದಲೇ ತೆರವುಗೊಳಿಸಲು ಸೂಚಿಸಬೇಕು. ಸರ್ಕಾರಿ ಸ್ವತ್ತುಗಳಿಗೆ ಹಾನಿ ಉಂಟಾದಲ್ಲಿ ಕಾರ್ಯಕ್ರಮಗಳ ಆಯೋಜಕರೇ ಹೊಣೆಗಾರರಾಗಿದ್ದು, ಅಲ್ಲಿನ ನಷ್ಟವನ್ನು ಭರಿಸಿಕೊಡಲು ಬದ್ಧರಾಗಿರಬೇಕು. ಕೆಲವು ಸಂದರ್ಭಗಳಲ್ಲಿ ಮತೀಯ, ಜನಾಂಗೀಯ ವಿಷಯಗಳಿದ್ದಾಗ ಸೂಕ್ಷ್ಮವಾಗಿ ಕ್ರಮ ಕೈಗೊಳ್ಳಬೇಕು. ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಹಕಾರ ಪಡೆದುಕೊಳ್ಳುವಂತೆ ಅವರು ಸೂಚಿಸಿದರು.ಸಭೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ, ಮಹಾನಗರಪಾಲಿಕೆ ಆಯುಕ್ತ ಮಾಯಣ್ಣಗೌಡ, ಉಪವಿಭಾಗಾಧಿಕಾರಿ ಸತ್ಯನಾರಾಯಣ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಪರಿಸರ ಸ್ನೇಹಿ ಗಣೇಶ ಪ್ರತಿಷ್ಠಾಪಿಸಿ: ಡೀಸಿ
ಸಾರ್ವಜನಿಕರು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದರು.ಥರ್ಮೋಕೋಲ್, ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಲ್ಪಟ್ಟ ಗಣೇಶನ ವಿಗ್ರಹಗಳನ್ನು ನೈಸರ್ಗಿಕವಾಗಿ ಜೈವಿಕವಾಗಿ ವಿಘಟನೀಯವಲ್ಲದವು ಮತ್ತು ಅವುಗಳು ದೀರ್ಘಕಾಲದವರೆಗೆ ನೀರಿನ ಮೇಲೆ ತೇಲುತ್ತಲೇ ಇರುತ್ತವೆ, ಇದರಿಂದಾಗಿ ಜಲಮೂಲಗಳು ಮತ್ತು ಜಲ ಪರಿಸರ ವ್ಯವಸ್ಥೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ ಎಂದು ತಿಳಿಸಿದರು.
ಜೇಡಿಮಣ್ಣಿನ ಗಣಪತಿ ಮೂರ್ತಿಗಳನ್ನು ನೈಸರ್ಗಿಕ ಮಣ್ಣು ಮತ್ತು ಸರಳ ಜೇಡಿಮಣ್ಣಿನಿಂದ ತಯಾರಿಸಲಾಗುತ್ತದೆ, ನೈಸರ್ಗಿಕ ರಾಸಾಯನಿಕಗಳಿಂದ ಅಲಂಕರಿಸಲಾಗುತ್ತದೆ. ಈ ವಿಗ್ರಹಗಳನ್ನು ನೀರಿನಲ್ಲಿ ಮುಳುಗಿಸಿದಾಗ ಅಥವಾ ಪ್ರಕೃತಿಗೆ ಬಿಟ್ಟಾಗ, ಅವು ಯಾವುದೇ ವಿಷಕಾರಿ ವಸ್ತುಗಳನ್ನು ಬಿಡುಗಡೆ ಮಾಡದೆ ಕರಗುತ್ತವೆ. ಆದ್ದರಿಂದ ಸಾರ್ವಜನಿಕರು ಪರಿಸರ ಸ್ನೇಹಿ ಜೇಡಿಮಣ್ಣಿನಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಬೇಕು ಎಂದರು ಕೋರಿದರು.