ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಗದಗ

ನ. 1ರಂದು ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ, ಸಡಗರ ಹಾಗೂ ವ್ಯವಸ್ಥಿತವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜರುಗಿದ ರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಕಂಡುಬಾರದಂತೆ ಶಿಷ್ಟಾಚಾರದನ್ವಯ ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.

ನ. 1ರಂದು ಬೆಳಗ್ಗೆ 7.30ಕ್ಕೆ ಗದಗ ಬೆಟಗೇರಿ ನಗರಸಭೆ ಪದವಿ ಪೂರ್ವ ಕಾಲೇಜು ಆವರಣದಿಂದ ವಿವಿಧ ಕಲಾತಂಡಗಳ ಮೆರವಣಿಗೆಯೊಂದಿಗೆ ತಾಯಿ ಭುವನೇಶ್ವರಿಯ ಭಾವಚಿತ್ರ ಮೆರವಣಿಗೆ ಆರಂಭವಾಗಿ ಜಿಲ್ಲಾ ಕ್ರೀಡಾಂಗಣ ತಲುಪಲಿದೆ. ಬಳಿಕ ಬೆಳಗ್ಗೆ 9ಕ್ಕೆ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸಲಿದ್ದಾರೆ. ಎಲ್ಲಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಸಮಯಕ್ಕೆ ಸರಿಯಾಗಿ ಹಾಜರಿರಬೇಕು.

ಪೊಲೀಸ್ ಪಡೆ, ಗೃಹರಕ್ಷಕ ದಳ ಹಾಗೂ ಭಾರತ ಸೇವಾದಳದಿಂದ ಆಕರ್ಷಕ ಪಥಸಂಚಲನ ನಡೆಯಲಿದ್ದು, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಇಲಾಖಾವಾರು ಸ್ತಬ್ಧಚಿತ್ರ ಪ್ರದರ್ಶನ ಆಯೋಜಿಸಲಾಗುವುದು. ಸಮಾರಂಭದಲ್ಲಿ ಕುಡಿಯುವ ನೀರು, ಲಘು ಉಪಹಾರ ಹಾಗೂ ತುರ್ತು ಸೇವೆಗಾಗಿ ಆಂಬುಲೆನ್ಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚಿಸಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ನೀಡಲಾಗುವ ಸನ್ಮಾನ ಕಾರ್ಯಕ್ರಮವನ್ನು ಶಿಷ್ಟಾಚಾರದಂತೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು. ಸಭೆಯಲ್ಲಿ ಜಿಪಂ ಸಿಇಓ ಮುಕುಲ್ ಜೈನ್, ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ರಾಧಾ ಮಣ್ಣೂರ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ.ಎಂ. ತುಂಬರಮಟ್ಟಿ ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.