ಗಣರಾಜ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಡಿಸಿ ನಲಿನ್ ಅತುಲ್

| Published : Jan 19 2025, 02:15 AM IST

ಗಣರಾಜ್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಆಚರಿಸಿ: ಡಿಸಿ ನಲಿನ್ ಅತುಲ್
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಜ. 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕು

ಕನ್ನಡಪ್ರಭ ವಾರ್ತೆ ಕೊಪ್ಪಳ

ಜಿಲ್ಲೆಯಲ್ಲಿ ಜ. 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು ಅಚ್ಚುಕಟ್ಟಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಗಣರಾಜ್ಯೋತ್ಸವ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗಣರಾಜ್ಯೋತ್ಸವ ದಿನಾಚರಣೆಯ ನಿಮಿತ್ತ ಜ.26ರ ಬೆಳಗ್ಗೆ 8 ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. ನಂತರ ಅಂದು ಬೆಳಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು. ಧ್ವಜಾರೋಹಣ ಕಾರ್ಯಕ್ರಮಕ್ಕೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿರಬೇಕು. ಕಾರ್ಯಕ್ರಮವನ್ನು ಅಚ್ಚುಕಟ್ಟು ಹಾಗೂ ವ್ಯವಸ್ಥಿತವಾಗಿ ಆಯೋಜನೆ ಮಾಡಬೇಕು. ಅಧಿಕಾರಿ ಮತ್ತು ಸಿಬ್ಬಂದಿ ಪರಸ್ಪರ ಸಮನ್ವತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಗಣರಾಜ್ಯೋತ್ಸವ ದಿನಾಚರಣೆಯಂದು ಜಿಲ್ಲಾ ಕ್ರೀಡಾಂಗಣದಲ್ಲಿ ಸಾಂಸ್ಕೃತಿ ಕಾರ್ಯಕ್ರಮ, ಪೊಲೀಸ್, ಅರಣ್ಯ ಇಲಾಖೆ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ ಮುಂತಾದ ತಂಡಗಳಿಂದ ಕವಾಯತು ನಡೆಸಲು ಸಂಬಂಧಿಸಿದ ಅಧಿಕಾರಿಗಳು ಕ್ರಮ ವಹಿಸಬೇಕು. ಕ್ರೀಡಾಂಗಣದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ ಹಾಗೂ ನಗರದ ಪ್ರಮುಖ ವೃತ್ತಗಳಲ್ಲಿ ವಿದ್ಯುತ್ ದೀಪಗಳ ಅಲಂಕಾರಕ್ಕೆ ಕೊಪ್ಪಳ ನಗರಸಭೆ ವತಿಯಿಂದ ವ್ಯವಸ್ಥೆ ಮಾಡಬೇಕು. ವಿವಿಧ ಶಾಲಾ ಕಾಲೇಜುಗಳ ಮಕ್ಕಳನ್ನು ಜಿಲ್ಲಾ ಕ್ರೀಡಾಂಗಣಕ್ಕೆ ಕರೆತರಲು ಕೆಎಸ್‌ಆರ್‌ಟಿಸಿ ಯಿಂದ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗಣರಾಜ್ಯೋತ್ಸವ ಕಾರ್ಯಕ್ರಮ ಅಚ್ಚುಕಟ್ಟು ನಡೆಯಲು ರಚಿಸಲಾದ ವಿವಿಧ ಸಮಿತಿಗಳು ತಮಗೆ ಹಂಚಿಕೆ ಮಾಡಲಾದ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ನಿರ್ವಹಿಸಬೇಕು ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮಾತನಾಡಿ, ತಹಸೀಲ್ದಾರರು ಶಿಷ್ಠಾಚಾರದಂತೆ ಚುನಾಯಿತ ಪ್ರತಿನಿಧಿಗಳು ಹಾಗೂ ಗಣ್ಯರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು. ವೇದಿಕೆ ಕಾರ್ಯಕ್ರಮದಲ್ಲಿ ಯಾವುದೇ ವ್ಯತ್ಯಯವಾಗದಂತೆ ಎಚ್ಚರಿಕೆ ವಹಿಸಬೇಕು. ಅಗ್ನಿಶಾಮಕ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿಶಾಮಕ ವಾಹನ ಹಾಗೂ ತಮ್ಮ ಸಿಬ್ಬಂದಿಗಳನ್ನು ನಿಯೋಜಿಸಬೇಕು. ಡಿಡಿಪಿಐ ಹಾಗೂ ಡಿಡಿಪಿಯು ಕಾರ್ಯಕ್ರಮಕ್ಕೆ ಮಕ್ಕಳನ್ನು ಕರೆತರುವುದು, ನಂತರ ಸುರಕ್ಷಿತವಾಗಿ ಮಕ್ಕಳನ್ನು ಕರೆದುಕೊಂಡು ಹೋಗುವ ವ್ಯವಸ್ಥೆ ಮಾಡಬೇಕು. ಅಂದು ಎಲ್ಲಾ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಶಿಷ್ಠಾಚಾರದಂತೆ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕೆಂದು ಹೇಳಿದರು.

ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರೇಷ್ಮಾ ಹಾನಗಲ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಶ್ರಿಶೈಲ ಬಿರಾದಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ತಹಸೀಲ್ದಾರ ವಿಠ್ಠಲ್ ಚೌಗಲಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ನಗರಸಭೆ ಪೌರಾಯುಕ್ತ ಗಣಪತಿ ಪಾಟೀಲ್ ಸೇರಿದಂತೆ ಇತರೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.