ಗಣರಾಜ್ಯೋತ್ಸವ ಅರ್ಥಪೂರ್ಣವಾಗಿ ಆಚರಿಸಿ

| Published : Jan 10 2025, 12:48 AM IST

ಸಾರಾಂಶ

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಭಾರತ ಗಣರಾಜ್ಯೋತ್ಸವ-2025ರ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ:

ಜ. 26 ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಮಟ್ಟದಲ್ಲಿ ಆಚರಿಸಲಾಗುವ ಭಾರತ ಗಣರಾಜ್ಯೋತ್ಸವ-2025ರ ಕಾರ್ಯಕ್ರಮ ಆಯೋಜನೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಭಾರತ ಗಣರಾಜ್ಯೋತ್ಸವ ದಿನಾಚರಣೆಯು ದೇಶಪ್ರೇಮ, ದೇಶಭಕ್ತಿ ಹಾಗೂ ಭಾರತ ಸಂವಿಧಾನ ಆಚರಣೆಯ ಪ್ರತೀಕವಾಗಿದ್ದು, ಈ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳು ಸಮನ್ವಯತೆಯಿಂದ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿ ಯಶಸ್ವಿಗೊಳಿಸಬೇಕು. ಇಲಾಖೆಯ ಅಧಿಕಾರಿಗಳಿಗೆ ನೀಡಿರುವ ಜವಾಬ್ದಾರಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಮಾತನಾಡಿ, ಗಣರಾಜ್ಯೋತ್ಸವ ಆಚರಣೆಗೆ ಸಂಬಂಧಪಟ್ಟಂತೆ ಸ್ವಾಗತ, ಶಿಷ್ಟಾಚಾರ, ಆಹ್ವಾನ ಪತ್ರಿಕೆ ಹಾಗೂ ವೇದಿಕೆ ಸಮಿತಿ, ಪೆರೇಡ್ ಸಮಿತಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಿತಿ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಆಯಾ ಸಮಿತಿಯಲ್ಲಿರುವ ಅಧಿಕಾರಿಗಳು ತಮಗೆ ವಹಿಸಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ನಗರದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದ ಆವರಣ ಸ್ವಚ್ಛಗೊಳಿಸಿ ಮೈದಾನದಲ್ಲಿ ಸ್ವಾಗತ ಕಮಾನು ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ದೀಪಾಲಂಕಾರ, ಉತ್ತಮ ಧ್ವನಿವರ್ಧಕ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಗಣ್ಯರು ಕುಳಿತುಕೊಳ್ಳುವುದಕ್ಕೆ ಉತ್ತಮವಾದ ಆಸನ ವ್ಯವಸ್ಥೆ, ಆಸನಗಳ ಹತ್ತಿರ ನಾಮಫಲಕ, ತೋಟಗಾರಿಕೆ ಇಲಾಖೆಯಿಂದ ಹೆಚ್ಚಿನ ಆಕರ್ಷಣೆ ಉಳ್ಳ ಹೂವಿನ ಕುಂಡಗಳ ಪಡೆದು ಸಿಂಗರಿಸಬೇಕು. ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ಅಧಿಕಾರಿಗಳು, ಮಾಧ್ಯಮದವರು ಆಸೀನರಾಗಲು ಪ್ರತ್ಯೇಕವಾಗಿ ಆಸನದ ವ್ಯವಸ್ಥೆ ಮಾಡಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ತಿಳಿಸಿದರು.

ಭಾರತ ಗಣರಾಜ್ಯೋತ್ಸವದ ಪೆರೇಡ್ ವ್ಯವಸ್ಥೆಯನ್ನು ಏರ್ಪಡಿಸಲು ಕ್ರಮ ತೆಗೆದುಕೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಅವರು, ಅತ್ಯುತ್ತಮ ಪ್ರದರ್ಶನ ನೀಡಿದ ಮೂರು ಪೆರೇಡ್ ತಂಡಗಳನ್ನು ಆಯ್ಕೆ ಮಾಡಲು ಸಮಿತಿ ರಚಿಸಬೇಕು. ಆಯ್ಕೆಯಾದ ಮೂರು ಪರೇಡ್ ತಂಡಗಳಿಗೆ ಗಣರಾಜ್ಯೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ, ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದರು.

ರಾಷ್ಟ್ರ ಧ್ವಜಾರೋಹಣದ ನಂತರ ಶಾಲಾ ಮಕ್ಕಳಿಂದ ಎರಡು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಂದ ಒಂದು ಸಾಂಸ್ಕೃತಿಕ ಕಾರ್ಯಕ್ರಮ ಸೇರಿದಂತೆ ಬೆಳಗಿನ ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮತ್ತು ಸಂಜೆ ನಗರದ ತರಾಸು ರಂಗಮಂದಿರದ ಕಾರ್ಯಕ್ರಮಗಳನ್ನು ಜನಾಕರ್ಷಣೀಯವಾಗಿಸುವ ಜೊತೆಗೆ ದೇಶಭಕ್ತಿ ಬಿಂಬಿಸುವ ಕನ್ನಡ ಹಾಡುಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾರ್ಯಕ್ರಮಗಳನ್ನು ವ್ಯವಸ್ಥೆಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಅವರಿಗೆ ಸೂಚಿಸಿದರು.

ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ, ಸನ್ಮಾನಕ್ಕೆ ಆಯ್ಕೆ ಮಾಡಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿಗಳು ಕಡ್ಡಾಯವಾಗಿ ಮತ್ತು ಸ್ವಯಂಪ್ರೇರಿತವಾಗಿ ಭಾಗವಹಿಸಲು ತಿಳಿಸಿದರು.

ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.