ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಮಂಟಪಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಡಿಜೆ ಸೌಂಡ್‌ಅನ್ನು ಸಂಪೂರ್ಣ ನಿಷೇಧಿಸಲಾಗಿದೆ. ಬಳಕೆ ಕಂಡು ಬಂದರೇ ಡಿಜೆ ಸೌಂಡ್‌ಅನ್ನು ಸೀಜ್ ಮಾಡಲಾಗುವುದು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ನಾಗರಿಕರು ಗೌರಿ ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದತೆಯಿಂದ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಕೊಡದಂತೆ ಎಚ್ಚರಿಕೆ ವಹಿಸಬೇಕು ಎಂದು ಇನ್ಸ್‌ಪೆಕ್ಟರ್ ಬಸವರಾಜು ತಿಳಿಸಿದರು.

ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ಸಭಾಂಗಣದಲ್ಲಿ ಗೌರಿ ಗಣೇಶ ಹಬ್ಬದ ಅಂಗವಾಗಿ ನಡೆದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪೊಲೀಸ್ ಠಾಣೆ, ಸ್ಥಳೀಯ ಸಂಸ್ಥೆ, ವಿದ್ಯುತ್ ಸರಬರಾಜು ಕಂಪನಿ ಹಾಗೂ ಅಗ್ನಿಶಾಮಕ ಠಾಣೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದರು.

ಸಾರ್ವಜನಿಕರ ಸಂಚಾರಕ್ಕೆ ಅಡಚಣೆಯಾಗದಂತೆ ಮಂಟಪಗಳನ್ನು ನಿರ್ಮಿಸಿ ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಬೇಕು. ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮಾತ್ರ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ. ಡಿಜೆ ಸೌಂಡ್‌ಅನ್ನು ಸಂಪೂರ್ಣ ನಿಷೇಧಿಸಲಾಗಿದೆ. ಬಳಕೆ ಕಂಡು ಬಂದರೇ ಡಿಜೆ ಸೌಂಡ್‌ಅನ್ನು ಸೀಜ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಯಾವುದೇ ಧರ್ಮ, ಜಾತಿ ಅಥವಾ ಪಂಥಕ್ಕೆ ಪ್ರಚೋದನೆ ನೀಡುವಂತಹ ಹಾಡುಗಳನ್ನು ಹಾಕುವುದು ಅಥವಾ ಘೋಷಣೆ ಕೂಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಾರ್ವಜನಿಕ ಮಂಟಪಗಳಲ್ಲಿ ಭದ್ರತೆ ದೃಷ್ಟಿಯಿಂದ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು. ಮಂಟಪಕ್ಕೆ ಸಂಬಂಧಿಸಿದ ವ್ಯಕ್ತಿಗಳ ಹೆಸರು ಮತ್ತು ಫೋನ್ ಸಂಖ್ಯೆಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ನೀಡಬೇಕು ಎಂದು ಹೇಳಿದರು.

ಪೊಲೀಸ್ ಇಲಾಖೆ ನಿಗದಿಪಡಿಸಿದ ಮಾರ್ಗ ಮತ್ತು ನಿಗದಿತ ಸಮಯದಲ್ಲಿಯೇ ಮೆರವಣಿಗೆ ಮುಗಿಸಿ ಮೂರ್ತಿ ವಿಸರ್ಜನೆ ಮಾಡಬೇಕು. ಯಾವುದೇ ಸಂಶಯಾಸ್ಪದ ವ್ಯಕ್ತಿ, ವಸ್ತು ಅಥವಾ ತುರ್ತು ಪರಿಸ್ಥಿತಿ ಕಂಡುಬಂದಲ್ಲಿ ತಕ್ಷಣ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಹೇಳಿದರು.

ಮುಖಂಡ ನಾಗರಾಜು ಮಾತನಾಡಿ, ಗಣೇಶ ಮೂರ್ತಿ ವಿಸರ್ಜಿಸುವ ಸ್ಥಳದಲ್ಲಿ ಸ್ಥಳೀಯ ಗ್ರಾಮಪಂಚಾಯಿತಿಯಿಂದ ಸಿಸಿ ಕ್ಯಾಮೆರಾ ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು.

ಮುಖಂಡ ಓಂಪ್ರಕಾಶ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಣ್ಣ ಪುಟ್ಟ ವಿಷಯಕ್ಕೆ ಅಪರಾಧ ಕೃತ್ಯಗಳು ನಡೆಯುತ್ತಿರುವುದರಿಂದ ಯುವಕರು ಅಹಿತರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ಸಮಸ್ಯೆ ಕಂಡು ಬಂದರೂ ಗ್ರಾಮದ ಮುಖಂಡರು ಹಾಗೂ ಪೊಲೀಸರಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕೆ ಹೊರತು ಕಾನೂನು ಸುವ್ಯವಸ್ಥೆಗೆ ಭಂಗ ತರಬಾರದೆಂದು ತಿಳಿವಳಿಕೆ ನೀಡಿದರು.

ಸಭೆಯಲ್ಲಿ ತಾಲೂಕಿನ ವಿವಿಧ ಗ್ರಾಮಗಳಿಂದ ಮುಖಂಡರು ಹಾಗೂ ಯುವಕರು ಪಾಲ್ಗೊಂಡಿದ್ದರು.