ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್‌ ಆಚರಣೆ

| Published : Apr 11 2024, 12:50 AM IST

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.

ಕನ್ನಡಪ್ರಭ ವಾರ್ತೆ ಮಂಗಳೂರು

ಪವಿತ್ರ ರಮಝಾನ್‌ ವ್ರತಾಚರಣೆ ಮಾಡಿದ ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು.

ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.

ಈದ್ ನಮಾಝ್- ಖುತ್ಬಾ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್‌ಗಾಗಿ ಪ್ರಾರ್ಥಿಸಿದರು. ಅದೇ ರೀತಿ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.

ಸಮಾಜ ಬಾಂಧವರೆಲ್ಲರೂ ಹೊಸ ಬಟ್ಟೆ ಧರಿಸಿ, ಅತ್ತರ್ ಹಚ್ಚಿ, ವಿಶಿಷ್ಟ ಬಗೆಯ ತಿಂಡಿ- ತಿನಿಸು ತಿಂದು ಹಬ್ಬವನ್ನು ಶ್ರದ್ಧೆಯಿಂದ ಆಚರಿಸಿದರು.

ನಗರದ ಬಾವುಟಗುಡ್ಡೆಯ ಈದ್ಗಾ ಜುಮಾ ಮಸ್ಜಿದ್‌ನಲ್ಲಿ ದ.ಕ. ಜಿಲ್ಲಾ ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ಖುತ್ಬಾ ಪಾರಾಯಣಗೈದರು. ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ಈದ್ ನಮಾಝ್ ಗೆ ನೇತೃತ್ವ ನೀಡಿದರು.

ಬಂದರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಜುಮಾ ಮಸೀದಿ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ, ಉಪಾಧ್ಯಕ್ಷ ಕೆ. ಅಶ್ರಫ್, ಕೋಶಾಧಿಕಾರಿ ಎಸ್.ಎಂ.ರಶೀದ್ ಹಾಜಿ ಮತ್ತಿತರರು ಪಾಲ್ಗೊಂಡಿದ್ದರು.

ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್‌ನಲ್ಲಿ ಖತೀಬ್ ಇಬ್ರಾಹೀಂ ಸಅದಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ರಾಜ್ಯ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪಾಲ್ಗೊಂಡಿದ್ದರು.