ಬೆಂಗಳೂರಿನಲ್ಲಿ ಪ್ರವಾಹವನ್ನು ಪತ್ತೆ ಮಾಡಲು ರಾಜಕಾಲುವೆಗೆ ಸೆನ್ಸಾರ್ ಅಳವಡಿಸಲು ಬಿಬಿಎಂಪಿ ನಿರ್ಧರಿಸಿದೆ.
ಬೆಂಗಳೂರು : ಮಳೆ ಬಂದಾಗ ನಗರದಲ್ಲಿ ಪ್ರವಾಹ ಉಂಟಾಗುವುದನ್ನು ಮೊದಲೇ ತಿಳಿಯಲು ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ಸಹಯೋಗದಲ್ಲಿ ರಾಜಕಾಲುವೆಗಳ 124 ಕಡೆಗಳಲ್ಲಿ ನೀರಿನ ಮಟ್ಟ ಅಳೆಯುವ ಸಂವೇದಕ ಅಳವಡಿಸಲಾಗಿದೆ. ಈ ಬಾರಿ ಮಳೆಗಾಲದಲ್ಲಿ ಪ್ರವಾಹ ಉಂಟಾಗಿ ಅವಘಡ ತಪ್ಪಿಸಲು ತಡೆಯಲು ತಂತ್ರಜ್ಞಾನ ಬಳಸಲಾಗುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.
ಮುಂಗಾರು ಮಳೆ ಆರಂಭಕ್ಕೂ ಮುನ್ನ ಪ್ರವಾಹ ಪರಿಸ್ಥಿತಿ ಎದುರಾಗುವುದನ್ನು ತಡೆಯಲು ಪಾಲಿಕೆ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುತ್ತಿದೆ. ಪ್ರಮುಖವಾಗಿ ಸೆನ್ಸಾರ್‌ಗಳ ಅಳವಡಿಕೆಯಿಂದ ರಾಜಕಾಲುವೆಗಳ ನೀರಿನ ಮಟ್ಟವನ್ನು ಅಂತರ್ಜಾಲದ ಮೂಲಕ ಕೆಎಸ್‌ಎನ್‌ಡಿಎಂಸಿ ನಿಯಂತ್ರಣ ಕೊಠಡಿಗೆ ರವಾನಿಸಲಾಗುತ್ತದೆ. ನಿಯಂತ್ರಣ ಕೊಠಡಿಯಲ್ಲಿ ರಾಜಕಾಲುವೆಯಲ್ಲಿ ಹರಿಯುವ ನೀರಿನ ಮಟ್ಟವನ್ನು ಬಣ್ಣದ ಆಧಾರದಲ್ಲಿ ತಿಳಿಯುವಂತಹ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ.
ರಾಜಕಾಲುವೆ ನೀರಿನ ಮಟ್ಟದ ಪ್ರಮಾಣ ಹಸಿರು ಮತ್ತು ನೀಲಿ ಬಣ್ಣದಲ್ಲಿದ್ದರೆ ಅಪಾಯವಿಲ್ಲ. ನೀರಿನ ಮಟ್ಟ ಕೆಂಪು ಬಣ್ಣವಿದ್ದರೆ ಅಪಾಯ ಮತ್ತು ಕಪ್ಪು ಬಣ್ಣಕ್ಕೆ ತಿರುಗಿದರೆ ಪ್ರವಾಹ ಉಂಟಾಗಲಿದೆ ಎಂಬ ಮಾಹಿತಿ ತಿಳಿಯಲಿದೆ. ಅದರ ಆಧಾರದಲ್ಲಿ ಕೆಎಸ್‌ಎನ್‌ಡಿಎಂಸಿ ಅಧಿಕಾರಿಗಳು ಬಿಬಿಎಂಪಿಗೆ ಮಾಹಿತಿ ನೀಡಲಿದ್ದಾರೆ. ಈ ಮಾಹಿತಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳು ಪ್ರವಾಹ ಉಂಟಾಗುವ ಸ್ಥಳಗಳಲ್ಲಿನ ನಿವಾಸಿಗಳನ್ನು ಬೇರೆಡೆ ತೆರಳಲು ಅಥವಾ ಸುರಕ್ಷತಾ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.