ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.11ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದ ಶತಮಾನೋತ್ಸವ ಸಮಾರಂಭ ಜ.11ರಂದು ಮಡಿಕೇರಿಯ ಗೌಡ ಸಮಾಜದಲ್ಲಿ ನಡೆಯಲಿದೆ. ಅಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣ ಕಾರ್ಯಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಹೆಚ್.ಎಸ್.ಚೇತನ್ ತಿಳಿಸಿದ್ದಾರೆ.ನಗರದ ಸುದ್ದಿಗೋಷ್ಠಿಯಲ್ಲಿ ಅವರು ತಮ್ಮ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 10.30 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ 9.30 ಗಂಟೆಗೆ ಗುರು ಸದನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶತಸಂಭ್ರಮ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಉದ್ದೇಶಿತ ಶತಸಂಭ್ರಮ ಕಟ್ಟಡದ ನಕಾಶೆಯನ್ನು ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅನಾವರಣಗೊಳಿಸಲಿದ್ದಾರೆ ಎಂದರು.ಸ್ಮರಣ ಸಂಚಿಕೆ ಬಿಡುಗಡೆ:
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಜಿ.ನಂಜನಗೌಡ ಅವರು ಬೆಳಗ್ಗೆ ಸೌಹಾರ್ದ ಸೌರಭ ಕಟ್ಟಡದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. ಗೌಡ ಸಮಾಜದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ಸ್ಮರಣ ಸಂಚಿಕೆ ಬಿಡುಗಡೆ, ಕ್ಯಾಲೆಂಡರ್ ಮತ್ತು ಉಡುಗೊರೆ ಅನಾವರಣ ಮಾಡಲಿದ್ದಾರೆ ಎಂದು ತಿಳಿಸಿದರು.ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯರಾದ ಎಂ. ಪಿ. ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಧನಂಜಯ ಸರ್ಜಿ, ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಕೊಡಂದೇರ ಬಾಂಡ್ ಗಣಪತಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಲಿ, ಗೌರವಾಧ್ಯಕ್ಷ ನಾಗೇಶ್ ಕೆ., ಕೊಡಗು ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಹೆಚ್.ಡಿ.ರವಿಕುಮಾರ್, ನಿವೃತ್ತ ಪ್ರಾಂಶುಪಾಲ ಪಟ್ಟಡ ಎ.ಪೂವಣ್ಣ ಹಾಗೂ ಮಂಗಳೂರಿನ ಕೆಐಒಸಿಎಲ್ ಲಿಮಿಟೆಡ್ ನ ಡೆಪ್ಯೂಟಿ ಜನರಲ್ ಮ್ಯಾನೇಜರ್ ತೇಲಪಂಡ ಎಂ. ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ.ವಿಶೇಷ ಆಹ್ವಾನಿತರಾಗಿ ನಗರಸಭಾ ಅಧ್ಯಕ್ಷೆ ಪಿ.ಕಲಾವತಿ, ರಾಜ್ಯ ನೌಕರರ ಸಂಘದ ಹಾಸನ ಜಿಲ್ಲಾಧ್ಯಕ್ಷ ಬಿ.ಪಿ.ಕೃಷ್ಣೇಗೌಡ, ಕೊಡಗು ಡಿಸಿಸಿ ಬ್ಯಾಂಕ್ ನ ನಿರ್ದೇಶಕ ಟಿ. ಆರ್. ಶರವಣಕುಮಾರ್, ಉದ್ಯಮಿ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಉಪನಿರ್ದೇಶಕ ಬಸವರಾಜು, ಕೂಡಿಗೆ ಡಯಟ್ ನ ಉಪ ನಿರ್ದೇಶಕ ರಾಮಚಂದ್ರ ರಾಜೇ ಅರಸ್, ಮಡಿಕೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಆರ್.ಪಿ., ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ., ವಿರಾಜಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಆನಂದ ಟಿ.ಜಿ., ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಕೆ.ಎಸ್., ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕುಮಾರ್ ಹೆಚ್.ಜಿ., ಹಿರಿಯ ಸಹಕಾರಿ ಹಾಗೂ ವಕೀಲ ಬಸವರಾಜ್ ಸಂಗಪ್ಪನವರ್ ಹಾಗೂ ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುತ್ತಮ್ಮ ಪಿ.ಎಸ್ ಉಪಸ್ಥಿತರಿರುವರು. 100 ಹಿರಿಯ ಸಹಕಾರಿಗಳಿಗೆ ಸನ್ಮಾನ ಗೌರವ:ಕಾರ್ಯಕ್ರಮದಲ್ಲಿ 100 ಹಿರಿಯ ಸಹಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಗುವುದು. ಶತಸಂಭ್ರಮ ಕಾರ್ಯಕ್ರಮದಲ್ಲಿ ಭಾಗವಹಿಸುವ ಎಲ್ಲ ಸದಸ್ಯರಿಗೆ ಉಡುಗೊರೆ ನೀಡಲಾಗುವುದು. ಶತಸಂಭ್ರಮ ಕಾರ್ಯಕ್ರಮದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಸಂಘದ ಸ್ಥಾಪಕ ಕಾರ್ಯದರ್ಶಿ ತೇಲಂಪಡ ಎಂ.ಕಾರ್ಯಪ್ಪ ಅವರ ಕುಟುಂಬ ಹಾಗೂ ಸ್ಥಾಪಕ ಅಧ್ಯಕ್ಷ ಪಟ್ಟಡ ಎಂ.ಉತ್ತಪ್ಪ ಅವರ ಕುಟುಂಬದ ಸದಸ್ಯರನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಶತಸಂಭ್ರಮದ ಪ್ರಯುಕ್ತ ವೈವಿಧ್ಯಮಯ ಮನೋರಂಜನಾ ಕಾರ್ಯಕ್ರಮಗಳನ್ನು ಕೂಡ ಆಯೋಜಿಸಲಾಗಿದೆ. ಸರ್ವರಿಗೂ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಹೆಚ್.ಎಸ್.ಚೇತನ್ ಮಾಹಿತಿ ನೀಡಿದರು.
ಸಂಘದ ನಿರ್ದೇಶಕ ಮಂಜುನಾಥ್ ಹೆಚ್.ಎನ್. ಮಾತನಾಡಿ, ಕೊಡಗು ವಿದ್ಯಾ ಇಲಾಖಾ ನೌಕರರ ಪತ್ತಿನ ಸೌಹಾರ್ದ ಸಹಕಾರಿ ಸಂಘ 100 ವರ್ಷಗಳನ್ನು ಪೂರೈಸಿದ ಹೆಮ್ಮೆಯ ಸಂಸ್ಥೆಯಾಗಿದೆ. ಅದ್ದೂರಿಯ ಶತಮಾನೋತ್ಸವ ಸಮಾರಂಭವನ್ನು ಆಯೋಜಿಸಲು ಕಳೆದ ಒಂದು ತಿಂಗಳಿನಿಂದ ಅಧ್ಯಕ್ಷ ಹೆಚ್.ಎಸ್.ಚೇತನ್ ಅವರ ನೇತೃತ್ವದಲ್ಲಿ ಶ್ರಮಿಸಲಾಗುತ್ತಿದೆ. ಸರ್ವರೂ ಕಾರ್ಯಕ್ರಮಕ್ಕೆ ಆಗಮಿಸಿ ಯಶಸ್ವಿಗೊಳಿಸಿ ಎಂದರು.ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೆಚ್.ಆರ್.ಮುತ್ತಪ್ಪ, ನಿರ್ದೇಶಕರಾದ ಪುದಿಯನೆರವನ ರೇವತಿ ರಮೇಶ್, ದೇವಾನಂದ ಎನ್.ಸಿ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಸಿ.ನಟೇಶ ಇದ್ದರು.