ಸಾರಾಂಶ
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ
- ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ- ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಕೇಂದ್ರದ ವನ್ಯಜೀವಿ ಮಂಡಳಿ ಅನುಮತಿ ನೀಡಿದೆ. ಹೀಗಾಗಿ ಸ್ಥಳೀಯರ ಮನವೊಲಿಸಿ, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ರಾಜ್ಯ ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಯಿಂದ ದೊಡ್ಡಮಟ್ಟದಲ್ಲಿ ಪರಿಸರಕ್ಕೆ ಹಾನಿಯಾಗುವುದಿಲ್ಲ. ಗೇರುಸೊಪ್ಪದಿಂದ ಪೈಪ್ ಲೈನ್ ಮೂಲಕ ನೀರನ್ನು ಮೇಲಕ್ಕೆ ಎತ್ತಲಾಗುತ್ತದೆ. ಈ ಪೈಲ್ ಲೈನ್ ಗಳು ನೆಲದ ಒಳಗೆ ಇರುವುದರಿಂದ ನೆಲದ ಮೇಲೆ ಹಸಿರು ಬೆಳೆಯಲಿದೆ. ಈ ಯೋಜನೆ ಅನುಷ್ಠಾನವಾದಲ್ಲಿ ಕಡಿಮೆ ಖರ್ಚಿನಲ್ಲಿ ಹೆಚ್ಚುವರಿಯಾಗಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಬಹುದು ಎಂದು ತಿಳಿಸಿದರು.ಈ ಯೋಜನೆ ಅನುಷ್ಠಾನಕ್ಕೆ ಕೇವಲ 120 ಎಕರೆ ಜಮೀನು ಸಾಕು. ಯೋಜನೆ ಅನುಷ್ಠಾನ ಮಾಡಲು ಖಾಸಗಿಯವರ 50 ಎಕರೆ ಜಮೀನು, ಉಳಿದ ಕಂದಾಯ ಹಾಗೂ ಅರಣ್ಯ ಭೂಮಿ ಬಳಕೆ ಮಾಡಿಕೊಳ್ಳಲಾಗುತ್ತದೆ. ಖಾಸಗಿಯವರ ಭೂಮಿಗೆ ಸೂಕ್ತ ಪರಿಹಾರ ನೀಡಲಾಗುವುದು. ಅರಣ್ಯ ಪ್ರದೇಶಕ್ಕೆ ಪರ್ಯಾಯವಾಗಿ ಬೇರೆಡೆ ಜಮೀನು ನೀಡಲಾಗುವುದು ಎಂದು ಮಾಹಿತಿ ನೀಡಿದರು.
ರೈತರ ನೀರಾವರಿಗೆ ಅನುಕೂಲವಾಗಲಿ ಎಂಬ ಕಾರಣದಿಂದ ಕುಸುಮ್ ಬಿ ಯೋಜನೆ ಅನುಷ್ಠಾನ ಮಾಡಲಾಗಿದೆ. ವಿದ್ಯುತ್ ಲೈನ್ ನಿಂದ 500 ಮೀಟರ್ ಗಿಂತ ದೂರ ಇರುವ ಕೊಳವೆ ಬಾವಿಗಳಿಗೆ ಕುಸುಮ್ ಬಿ ಯೋಜನೆಯಡಿ ಸೌರವಿದ್ಯುತ್ ಕಲ್ಪಿಸ ಲಾಗುವುದು. ಈ ಯೋಜನೆಯಡಿ ರೈತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಶೇ. 80ರಷ್ಟು ಸಬ್ಸಿಡಿ ನೀಡಲಾಗುವುದು. ಇನ್ನುಳಿದ ಶೇ. 20 ರಷ್ಟು ಹಣ ಮಾತ್ರ ಫಲಾನುಭವಿ ಭರಿಸಬೇಕು ಎಂದು ಹೇಳಿದರು.ಕುಸುಮ್ ಸಿ ಯೋಜನೆಯಡಿ ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ತಯಾರಿಸಲು ಕ್ರಮಕೈಗೊಳ್ಳಲಾಗಿದೆ. ಇದಕ್ಕಾಗಿ 10 ಸಾವಿರ ಕೋಟಿ ಯೋಜನೆ ರೂಪಿಸಲಾಗಿದೆ. ಈ ಯೋಜನೆ ಅನುಷ್ಠಾನವಾದಲ್ಲಿ 2500 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಯಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ವಿದ್ಯುತ್ ಅಭಾವವಿಲ್ಲ. ಬೇಡಿಕೆಗೆ ತಕ್ಕಂತೆ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಸಬ್ ಸ್ಟೇಷನ್ ಅಥವಾ ಲೈನ್ ಗಳಲ್ಲಿ ಸಮಸ್ಯೆ ಇರುವೆಡೆ ಮಾತ್ರ ವಿದ್ಯುತ್ ವ್ಯತ್ಯಯವಾಗುತ್ತಿರಬಹುದು. ಹೀಗಾಗಿಯೇ ಪ್ರತಿ ವರ್ಷ ರಾಜ್ಯದಲ್ಲಿ 100 ಹೊಸ ಸಬ್ ಸ್ಟೇಷನ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಎಚ್.ಡಿ.ತಮ್ಮಯ್ಯ, ಟಿ.ಡಿ.ರಾಜೇಗೌಡ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ, ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ ಇದ್ದರು.