ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೆ 173 ಮಿ.ಮೀ. ಮಳೆಯಾಗಿದೆ. ಸಾಮಾನ್ಯ ಮಳೆ ಪ್ರಮಾಣಕ್ಕೆ ಹೋಲಿಸಿದರೆ ಶೇ.44ರಷ್ಟು ಕೊರತೆಯಾಗಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯವಾಗಿ 360 ಮಿ.ಮೀ. ಮಳೆಯಾಗಬೇಕಿದ್ದು, ಈವರೆಗೆ 173 ಮಿ.ಮೀ. ಮಳೆಯಾಗಿದೆ. ಮುಂಗಾರು ಪೂರ್ವ ಅವಧಿಯಾದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿಯೂ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಮಳೆ ಕೊರತೆ, ಕೃಷಿ ಚಟುವಟಿಕೆಗಳ ಮೇಲಿನ ಪರಿಣಾಮ, ಕುಡಿಯುವ ನೀರಿನ ಲಭ್ಯತೆ ಹಾಗೂ ಜಲಾಶಯಗಳಲ್ಲಿನ ನೀರಿನ ಸಂಗ್ರಹದ ಕುರಿತು ಕೇಂದ್ರ ಬರ ಅಧ್ಯಯನ ತಂಡವು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿತು.

ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಉಪ ಆಯುಕ್ತ ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಉಪ ಸಲಹೆಗಾರ ಆಶಿಶ್ ಪಾಂಡೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಹಾಗೂ ರಾಷ್ಟ್ರೀಯ ಬೆಳೆ ಮುನ್ಸೂಚನೆ ಕೇಂದ್ರದ (ಒಓಅಈಅ) ಉಪ ನಿರ್ದೇಶಕ ಕರಣ್ ಚೌಧರಿ ಅವರನ್ನೊಳಗೊಂಡ ಕೇಂದ್ರ ತಂಡವು ಕೆ.ಆರ್.ಎಸ್‌ನ ಕಾವೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿತು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಈವರೆಗೆ 173 ಮಿ.ಮೀ. ಮಳೆಯಾಗಿದೆ. ಸಾಮಾನ್ಯ ಮಳೆ ಪ್ರಮಾಣಕ್ಕೆ ಹೋಲಿಸಿದರೆ ಶೇ.44ರಷ್ಟು ಕೊರತೆಯಾಗಿದೆ. ನೈಋತ್ಯ ಮುಂಗಾರು ಅವಧಿಯಲ್ಲಿ ಸಾಮಾನ್ಯವಾಗಿ 360 ಮಿ.ಮೀ. ಮಳೆಯಾಗಬೇಕಿದ್ದು, ಈವರೆಗೆ 173 ಮಿ.ಮೀ. ಮಳೆಯಾಗಿದೆ. ಮುಂಗಾರು ಪೂರ್ವ ಅವಧಿಯಾದ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿಯೂ ಸಾಮಾನ್ಯ ಪ್ರಮಾಣಕ್ಕಿಂತ ಕಡಿಮೆ ಮಳೆಯಾಗಿದೆ ಎಂದರು.

ಕಳೆದ 20 ವರ್ಷಗಳ ಮಳೆ ದಾಖಲೆಗಳನ್ನು ಗಮನಿಸಿದಾಗ ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಮಳೆಯಾದ ವರ್ಷಗಳಲ್ಲಿ ಒಂದಾಗಿದೆ. ಮಳೆ ಕೊರತೆಯಿಂದ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗಳು ಹಾಗೂ ಬೆಳೆಗಳ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದರು.

ಕಾವೇರಿ ನೀರಾವರಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ಮಾತನಾಡಿ, ಕಾವೇರಿ ಜಲಾನಯನ ಪ್ರದೇಶದಲ್ಲಿ ಸುಮಾರು 18.85 ಲಕ್ಷ ಎಕರೆ ಪ್ರದೇಶವಿದ್ದು, ಕೃಷಿ ಚಟುವಟಿಕೆಗಳಿಗೆ ಕಾವೇರಿ ನೀರು ಪ್ರಮುಖ ಆಧಾರವಾಗಿದೆ. ಬೆಂಗಳೂರು, ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಯೋಜನೆಗಳಿಗೂ ಕಾವೇರಿ ಜಲಮೂಲ ಪ್ರಮುಖವಾಗಿದೆ ಎಂದರು.

ಪ್ರಸ್ತುತ ಜಲಾಶಯಗಳಲ್ಲಿರುವ ನೀರಿನ ಸಂಗ್ರಹ ಹಾಗೂ ಮುಂದಿನ ದಿನಗಳ ಅಗತ್ಯವನ್ನು ಗಮನಿಸಿದರೆ, ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸುವುದು ಸವಾಲಾಗಿದೆ. ನೀರಿನ ಲಭ್ಯತೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಮುಂದಿನ ಎಂಟು ತಿಂಗಳ ಅವಧಿಗೆ ಲಭ್ಯವಿರುವ ನೀರನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ. ಮಳೆ ಕೊರತೆಯಿಂದ ಈಗಾಗಲೇ ಬೆಳೆಗಳಿಗೆ ಹಾನಿಯಾಗಿದ್ದು, ಉಳಿದಿರುವ ಬೆಳೆಗಳ ಮೇಲೂ ನೀರಿನ ಕೊರತೆಯ ಪರಿಣಾಮ ಬೀರುವ ಸಾಧ್ಯತೆ ಇದೆ. ಜಲಾಶಯಗಳಲ್ಲಿ ಸಮರ್ಪಕ ನೀರಿನ ಸಂಗ್ರಹವಿಲ್ಲದಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವುದು ಸವಾಲಾಗಿದೆ ಎಂದರು.

ಪ್ರಸಕ್ತ ಬರ ಪರಿಸ್ಥಿತಿಯಲ್ಲಿ ಲಭ್ಯವಿರುವ ಜಲ ಸಂಪನ್ಮೂಲಗಳನ್ನು ವೈಜ್ಞಾನಿಕವಾಗಿ ಹಾಗೂ ಮಿತವ್ಯಯದಿಂದ ಬಳಸುವುದು ಅಗತ್ಯವಾಗಿದೆ. ಕುಡಿಯುವ ನೀರಿನ ಪೂರೈಕೆಗೆ ಆದ್ಯತೆ ನೀಡುವುದರೊಂದಿಗೆ, ಲಭ್ಯವಿರುವ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ಕೃಷಿ ಚಟುವಟಿಕೆಗಳಿಗೆ ನೀರು ಒದಗಿಸುವ ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

289 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ: ಕೆ.ಆರ್. ನಂದಿನಿ

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಆರ್.ನಂದಿನಿ ಮಾತನಾಡಿ, ಮಳೆ ಕೊರತೆ ಹಾಗೂ ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿರುವ ಪರಿಣಾಮ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುವ ಸಾಧ್ಯತೆಯಿರುವ 289 ಗ್ರಾಮಗಳನ್ನು ಗುರುತಿಸಲಾಗಿದೆ ಎಂದರು.

ಮಳೆಯ ಪ್ರಮಾಣಕ್ಕೆ ಅನುಗುಣವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳ ಸಂಖ್ಯೆ ಏರಿಳಿತವಾಗುತ್ತಿದ್ದು, ಸದ್ಯ ಸುಮಾರು 29ರಿಂದ 30 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಸತತವಾಗಿ ಉತ್ತಮ ಮಳೆಯಾದಲ್ಲಿ ಅಂತರ್ಜಲ ಮರುಪೂರಣಗೊಂಡು ಪರಿಸ್ಥಿತಿ ಸುಧಾರಿಸಲಿದೆ. ಆದರೆ, ಮಳೆ ಕೊರತೆಯಿಂದಾಗಿ ಕೊಳವೆಬಾವಿಗಳ ನೀರಿನ ಇಳುವರಿ ಗಣನೀಯವಾಗಿ ಕುಸಿದಿದೆ ಎಂದರು.

ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳಲ್ಲಿ ತುರ್ತು ಕ್ರಮವಾಗಿ ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಕೊಳವೆಬಾವಿಗಳನ್ನು ಆಳಗೊಳಿಸುವುದು, ಮರುಕೊರೆತ ಹಾಗೂ ಫ್ಲಶಿಂಗ್ ಸೇರಿದಂತೆ ವಿವಿಧ ಕ್ರಮ ಕೈಗೊಳ್ಳಲಾಗುತ್ತಿದೆ. ಈವರೆಗೆ 56ಕ್ಕೂ ಹೆಚ್ಚು ಕಡೆಗಳಲ್ಲಿ ಇಂತಹ ತುರ್ತು ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.

ಸಭೆಯಲ್ಲಿ ಜಿಲ್ಲೆಯ ಮಳೆ ಪರಿಸ್ಥಿತಿ, ಕೃಷಿ ಹಾಗೂ ಬೆಳೆಗಳ ಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಲಾಶಯಗಳ ನೀರಿನ ಸಂಗ್ರಹ ಸೇರಿದಂತೆ ಬರ ಪರಿಸ್ಥಿತಿಗೆ ಸಂಬಂಧಿಸಿದ ವಿವಿಧ ಅಂಶಗಳ ಕುರಿತು ಕೇಂದ್ರ ತಂಡವು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿತು.