ರಾಜ್ಯಕ್ಕೆ ಕೇಂದ್ರ ಚಂಬು ನೀಡಿದೆ: ಪಿ.ಮರಿಸ್ವಾಮಿ

| Published : Jul 27 2024, 12:53 AM IST

ಸಾರಾಂಶ

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಬಿಹಾರ ಹಾಗೂ ಆಂಧ್ರಪ್ರದೇಶದ ಬಜೆಟ್ ಆಗಿದೆ. ರಾಜ್ಯದಿಂದ ೧೯ ಮಂದಿ ಸಂಸದರಿದ್ದರೂ ರಾಜ್ಯಕ್ಕೆ ಕೇಂದ್ರ ಚಂಬು ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಜಿಲ್ಲಾ ಕಾಂಗ್ರೆಸ್ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕೇಂದ್ರ ಸಂಪುಟದಲ್ಲಿ ರಾಜ್ಯದ ಐದು ಮಂತ್ರಿಗಳಿದ್ದರೂ ರಾಜ್ಯಕ್ಕೆ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ಬಿಹಾರ ಹಾಗೂ ಆಂಧ್ರಪ್ರದೇಶದ ಬಜೆಟ್ ಆಗಿದೆ. ರಾಜ್ಯದಿಂದ ೧೯ ಮಂದಿ ಸಂಸದರಿದ್ದರೂ ರಾಜ್ಯಕ್ಕೆ ಕೇಂದ್ರ ಚಂಬು ನೀಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು.

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ನೀಡದಿರುವುದನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದಲ್ಲಿ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಪ್ರತಿಭಟನಾ ಮೆರವಣಿಗೆಯಲ್ಲಿ ಪಚ್ಚಪ್ಪ ವೃತ್ತಕ್ಕೆ ತೆರಳಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮೆರವಣಿಗೆಯುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು. ಸರ್ಕಾರ ಉಳಿಸಿಕೊಳ್ಳುವುದಕ್ಕಾಗಿ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಿ ಇತರ ರಾಜ್ಯಗಳಿಗೆ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್. ಮಹದೇವ್, ಚಿಕ್ಕ ಮಹದೇವ್, ಮಹಿಳಾ ಜಿಲ್ಲಾಧ್ಯಕ್ಷೆ ಲತಾ ಜತ್ತಿ ರಾಜಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಮುಖಂಡರಾದ ಎಚ್.ವಿ.ಚಂದ್ರು, ಲೋಕೇಶ್ ನಂಜುಂಡಸ್ವಾಮಿ, ಶಿವಕುಮಾರ್, ಕಾವೇರಿ, ಸದಾಶಿವಮೂರ್ತಿ, ಸಿ.ಎ. ಮಹದೇವಶೆಟ್ಟಿ, ಮಹದೇವನಾಯ್ಕ, ಕುಮಾರ್, ಸ್ವಾಮಿ, ಸೋಮೇಶ್, ಗೌಡಳ್ಳಿ ರಾಜೇಶ್ ಇತರರು ಭಾಗವಹಿಸಿದ್ದರು.