ಸಾರಾಂಶ
ಬಜೆಟ್‌ನಲ್ಲಿ ಕರ್ನಾಟಕ ಕಡೆಗಣನೆ । ಹನುಮಂತಪ್ಪ ವೃತ್ತದಲ್ಲಿ ಕೈ ಕಾರ್ಯಕರ್ತರಿಂದ ಮಾನವ ಸರಪಳಿ ನಿರ್ಮಾಣ ।
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಇತ್ತೀಚೆಗೆ ಮಂಡನೆ ಮಾಡಿರುವ ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಲಾಗಿದೆ. ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ತಾಲೂಕು ಕಚೇರಿಯಿಂದ ಕೈಯಲ್ಲಿ ಚೊಂಬು ಹಿಡಿದು ಮೆರವಣಿಗೆಯಲ್ಲಿ ಹೊರಟ ಕಾರ್ಯಕರ್ತರು ಹನುಮಂತಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಘೋಷಣೆ ಹಾಕಿದರು. ಈ ಬಾರಿ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟಿದ್ದಾರೆಂದು ಚೊಂಬು ಹಿಡಿದು ಕೆಲವು ಕಾರ್ಯಕರ್ತರು ಅಣಕು ಪ್ರದರ್ಶನ ಮಾಡಿದರು.ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಲುವಾಗಿ ಆಂಧ್ರಪ್ರದೇಶ ಹಾಗೂ ಬಿಹಾರ ರಾಜ್ಯಗಳಿಗೆ ಬಜೆಟ್‌ನಲ್ಲಿ ಸಿಂಹಪಾಲು ನೀಡಲಾಗಿದೆ. ಕರ್ನಾಟಕವನ್ನು ಕಡೆಗಣಿಸುವ ಮೂಲಕ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಘೋಷಣೆ ಹಾಕಿದರು.
ವಿಧಾನಪರಿಷತ್ ಮಾಜಿ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಮಾತನಾಡಿ, ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ರಾಜ್ಯವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದರೂ ಸಹ ಇಲ್ಲಿಂದ ಆಯ್ಕೆಯಾಗಿ ಹೋದ ಬಿಜೆಪಿ ಸಂಸದರು ಯಾವುದೇ ಚಕಾರ ಎತ್ತಿಲ್ಲ ಎಂದು ದೂರಿದರು.ನರೇಂದ್ರ ಮೋದಿಯವರ ಎದುರು ಬಾಯಿ ಬಿಡಲು ಸಂಸದರು ತಯಾರಿಲ್ಲ. ಬಿಜೆಪಿಯಿಂದ 17 ಮಂದಿ ಲೋಕಸಭಾ ಸದಸ್ಯರು ಆಯ್ಕೆಯಾಗಿದ್ದರೂ ಕರ್ನಾಟಕದ ಪರ ಮಾತನಾಡುವ ಕಾಳಜಿ ತೋರಿಸಿಲ್ಲ ಎಂದು ಆರೋಪಿಸಿದರು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದಿಂದಲೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿ ಹೋಗಿದ್ದರೂ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡುವ ಪ್ರಯತ್ನ ಮಾಡಿಲ್ಲ. ಅವರು ಇಲ್ಲಿ ರಾಜೀನಾಮೆ ನೀಡಿ ಬೇರೆ ರಾಜ್ಯದಿಂದ ಆಯ್ಕೆಯಾಗುವುದು ಒಳಿತು ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಬೇಡಿಕೆಗಳ ಬಗ್ಗೆ ಬಜೆಟ್‌ಗೆ ಮುನ್ನವೇ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದರು. ಆದರೂ ಅದಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ 5000 ಕೋಟಿ ರು. ಅನುದಾನ ಕೊಡುವುದಾಗಿ ಹೇಳಿ ಅದನ್ನು ಬಿಡುಗಡೆ ಮಾಡದೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿದರು.
ಕೇಂದ್ರಕ್ಕೆ ಕರ್ನಾಟಕ ರಾಜ್ಯದ ರೈತರ ಬಗ್ಗೆ ಕಾಳಜಿ ಇಲ್ಲ. ಮೇಕೆದಾಟು ಯೋಜನೆಗೆ ಅನುಮೋದನೆ ಕೊಟ್ಟಿಲ್ಲ. ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಮತ್ತು ಎಸ್.ಎಲ್. ಬೋಜೇಗೌಡ ಸದನದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಯಾವುದೇ ಚರ್ಚೆ ನಡೆಸಲಿಲ್ಲ. ಅತೀವೃಷ್ಟಿಯಿಂದ ನಮ್ಮ ಜಿಲ್ಲೆಯಲ್ಲಿ ಸಾಕಷ್ಟು ಸೇತುವೆಗಳು ಉರುಳಿ ಬಿದ್ದಿವೆ. ರಸ್ತೆಗಳು ಹಾಳಾಗಿವೆ ಹೀಗಿದ್ದರೂ ವಿಧಾನಸೌಧದ ಬಳಿ ತಾಳ ಹಾಕಿ ನೃತ್ಯ ಮಾಡುತ್ತಾರೆ. ಸದನವನ್ನು ಹಾಳು ಮಾಡಿದ್ದಷ್ಟೇ ಅವರ ಸಾಧನೆ ಎಂದು ಕಿಡಿಕಾರಿದರು.ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ, ಡಾ. ಡಿ.ಎಲ್. ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇ ಗೌಡ, ಪ್ರಸಾದ್ ಅಮೀನ್, ಹಿರೇಮಗಳೂರು ರಾಮಚಂದ್ರ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.26 ಕೆಸಿಕೆಎಂ 1ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯವನ್ನು ಕಡೆಗಣಿಸಿರುವುದನ್ನು ಖಂಡಿಸಿ ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಗಾಯತ್ರಿ ಶಾಂತೇಗೌಡ, ರೇಖಾ ಹುಲಿಯಪ್ಪಗೌಡ, ಡಾ. ಅಂಶುಮಂತ್, ಎಚ್.ಎಚ್. ದೇವರಾಜ್ ಇದ್ದರು.