ನಮ್ಮ ಸರ್ಕಾರ ಸದಾ ರೈತರ ಪರವಾಗಿದೆ. ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು, ಈಗಾಗಲೇ ಕೇಂದ್ರ ಸರ್ಕಾರಕ್ಕೂ ಬರ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ
ಕಾರಟಗಿ: ರಾಜ್ಯ ಸರ್ಕಾರ ಪ್ರತಿ ರೈತನಿಗೆ ಒಟ್ಟು ₹ 5 ಸಾವಿರ ಬರ ಪರಿಹಾರ ನೀಡಲು ನಿರ್ಧರಿಸಿದೆ. ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರವೂ ರೈತರಿಗೆ ಎಷ್ಟು ಪರಿಹಾರ ನೀಡಲಿದೆ ಎಂಬುದನ್ನು ಘೋಷಿಸಲಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಪ್ರತಿ ರೈತನಿಗೆ ₹2,500 ಬರ ಪರಿಹಾರ ನೀಡಲು ನಿರ್ಧರಿಸಲಾಗಿತ್ತು. ಇದೀಗ ಹೆಚ್ಚುವರಿಯಾಗಿ ₹2,500 ಸೇರಿಸಿ ಒಟ್ಟು ₹ 5 ಸಾವಿರ ಪರಿಹಾರ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ಮೊದಲ ಕಂತಿನ ₹2,500 ಅನ್ನು ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗಳಿಗೆ ಜಮೆ ಮಾಡಲಾಗಿದೆ. ಒಂದು ವೇಳೆ ಯಾವುದೇ ರೈತರಿಗೆ ಹಣ ತಲುಪದಿದ್ದರೆ, ಅವರು ಮನವಿ ಸಲ್ಲಿಸಿದಲ್ಲಿ ಪರಿಶೀಲಿಸಿ ಸಮಸ್ಯೆ ಸರಿಪಡಿಸುವ ಕೆಲಸ ಮಾಡಲಾಗುವುದು ಎಂದರು.ರೈತರ ಪರವಾಗಿ ಸರ್ಕಾರ: ನಮ್ಮ ಸರ್ಕಾರ ಸದಾ ರೈತರ ಪರವಾಗಿದೆ. ರೈತರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು, ಈಗಾಗಲೇ ಕೇಂದ್ರ ಸರ್ಕಾರಕ್ಕೂ ಬರ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ರೈತರಿಗೆ ಎಷ್ಟು ಪರಿಹಾರ ನೀಡಲಿದೆ ಎಂಬುದನ್ನು ಸ್ಪಷ್ಟವಾಗಿ ಘೋಷಿಸಲಿ ಎಂದು ಹೇಳಿದರು.
ಕೇಂದ್ರ ಸರ್ಕಾರ ಜಿಎಸ್ಟಿ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದರಿಂದ ಸಹಜವಾಗಿಯೇ ದಿನಬಳಕೆಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸೌಲಭ್ಯ ಕಲ್ಪಿಸಿರುವುದು ಸರ್ಕಾರದ ವೈಫಲ್ಯವೇ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಬಿಜೆಪಿಯಷ್ಟು ವಿಫಲವಾದ ವಿರೋಧ ಪಕ್ಷ ಮತ್ತೊಂದಿಲ್ಲ. ಆಡಳಿತ ನಡೆಸುವಾಗ ಸಣ್ಣ-ಪುಟ್ಟ ಸಮಸ್ಯೆಗಳು ಎದುರಾಗುವುದು ಸಹಜ. ಅಂತಹ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು.ಇಂಧನ ಏರಿಕೆಗೆ ಕೇಂದ್ರವೇ ಹೊಣೆ: ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡುತ್ತಿದ್ದಾಗ ರಾಜ್ಯ ಬಿಜೆಪಿ ನಾಯಕರು ಕಣ್ಣು ಮುಚ್ಚಿ ಕುಳಿತಿದ್ದರೇ? ಯುಪಿಎ ಸರ್ಕಾರದ ಅವಧಿಯಲ್ಲಿ ಅಡುಗೆ ಅನಿಲ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಎಷ್ಟಿದ್ದವು? ಈಗ ಎಷ್ಟಾಗಿವೆ? ಬೆಲೆಗಳಲ್ಲಿ ಗಣನೀಯ ಏರಿಕೆಯಾಗಿದೆ. ಆದರೆ, ರಾಜ್ಯ ಸರ್ಕಾರ ಎಷ್ಟು ಬೆಲೆ ಏರಿಕೆ ಮಾಡಿದೆ? ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಸರ್ಕಾರದ ಜಿಎಸ್ಟಿ ನೀತಿ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳವೇ ಪ್ರಮುಖ ಕಾರಣವಾಗಿದೆ. ಹೀಗಿರುವಾಗ ರಾಜ್ಯ ಸರ್ಕಾರವನ್ನು ಪ್ರಶ್ನಿಸಲು ಬಿಜೆಪಿ ನಾಯಕರಿಗೆ ಯಾವ ನೈತಿಕ ಹಕ್ಕಿದೆ ಎಂದು ಸಚಿವರು ಪ್ರಶ್ನಿಸಿದರು.
ಕಚ್ಚಾ ತೈಲದ ಬೆಲೆ ಕಡಿಮೆಯಿದ್ದ ಸಂದರ್ಭದಲ್ಲಿಯೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿತ್ತು. ಇದಕ್ಕೆ ಹೊಣೆ ಯಾರು? ಬೆಲೆ ಏರಿಕೆಗೆ ಕೇಂದ್ರ ಸರ್ಕಾರವೇ ಕಾರಣ. ಬಿಜೆಪಿ ನಾಯಕರಿಗೆ ಸಾಮಾನ್ಯ ಜ್ಞಾನವಿಲ್ಲವೇ? ಅವರಿಗೆ ಮಾನ-ಮರ್ಯಾದೆ ಇದ್ದರೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಜಿಎಸ್ಟಿ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿಸಲಿ. ಆಗ ಸಹಜವಾಗಿಯೇ ಅಗತ್ಯ ವಸ್ತುಗಳ ಬೆಲೆಯೂ ಇಳಿಕೆಯಾಗಲಿದೆ ಎಂದು ತಿಳಿಸಿದರು.