ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್, ಎನ್ ಎಸ್ ಯುಐ ನೇತೃತ್ವದ ಛಾತ್ರೊಂಕಿ ಗೂಂಜ್ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಕೇಂದ್ರ ಸರ್ಕಾರ ಪಾಕಿಸ್ತಾನಿ, ಬಾಂಗ್ಲದೇಶಿ, ಹಿಂದೂ, ಮುಸ್ಲಿಂ ಎಂದು ಜನರನ್ನು ವಿಭಜಿಸಿ, ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು.
ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾ ಕಾಂಗ್ರೆಸ್, ಯುವ ಕಾಂಗ್ರೆಸ್ ಹಾಗೂ ಎನ್ ಎಸ್ ಯುಐ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಛಾತ್ರೊಂಕಿ ಗೂಂಜ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮಣಿಪುರದಲ್ಲಿ ಸುಮಾರು ಒಂದು ತಿಂಗಳ ಕಾಲ ಹಿಂಸಾತ್ಮಕ ಚಟುವಟಿಕೆ ನಡೆದರೂ ಕೇಂದ್ರ ಸರ್ಕಾರ ಗಮನಿಸಲಿಲ್ಲ. ಇನ್ನು ಸತತವಾಗಿ ಒಂದು ವರ್ಷ ಕಾಲ ರೈತರು ದೆಹಲಿ ಬಳಿ ಹೋರಾಟ ನಡೆಸಿದರು. ಅವರಿಗೆ ದೇಶದ್ರೋಹಿ ಪಟ್ಟಕಟ್ಟುವ ಕೆಲಸ ಮಾಡ ಲಾಗಿತ್ತು. ಈಗಲೂ ಸಹ ಅದೇ ಕೆಲಸ ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.ಸರ್ಕಾರ ಈ ರೀತಿಯಾದರೆ, ಜನ ಸಾಮಾನ್ಯರು ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಬೇಕು. ಕನಿಷ್ಠ ಪಕ್ಷ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುವ ಸೌಜನ್ಯವೂ ಕೇಂದ್ರ ಸರ್ಕಾರಕ್ಕೆ ಇಲ್ಲ. ನೀಟ್ ಪರೀಕ್ಷೆ ಅಕ್ರಮದಿಂದ 21 ವಿದ್ಯಾರ್ಥಿ ಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಯಾವ ಜಾತಿ, ಧರ್ಮ ಸೇರಿದವರು ಎಂಬುದು ಮುಖ್ಯವಲ್ಲ. ನಿರುದ್ಯೋಗ, ಬೆಲೆ ಏರಿಕೆ ಸಮಸ್ಯೆ ಚರ್ಚೆ ಮಾಡಿ ಪರಿಹಾರ ಮಾಡಬೇಕಿದೆ. ಆದರೆ, ಕೇಂದ್ರ ಸರ್ಕಾರ ಭಾವನಾತ್ಮಕ ವಿಚಾರ ಇಟ್ಟುಕೊಂಡು ರಾಜಕೀಯ ಮಾಡುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ವಿದ್ಯಾರ್ಥಿಗಳನ್ನು ಸಂಪೂರ್ಣವಾಗಿ ಕಡೆಗಣಿಸಿ ಮೋಸ ಮಾಡುತ್ತಿದೆ. ನೀಟ್ ಅಕ್ರಮ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ವಿದ್ಯಾರ್ಥಿಗಳು ಕಳೆದ 20 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರು ಅವರ ಅಹವಾಲನ್ನು ಕೇಳಲು ಯಾವೊಬ್ಬ ಬಿಜೆಪಿ ನಾಯಕರು ತೆರಳಿಲ್ಲ. ಬದಲಿಗೆ ಸಂವಿಧಾನಾತ್ಮಕವಾಗಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ನಡೆಸಲಾಗಿದೆ ಎಂದು ದೂರಿದರು.
ಪ್ರಶ್ನೆ ಪತ್ರಿಕೆಗಳ ಸೋರಿಕೆಯಿಂದ ಎಷ್ಟೇ ಚೆನ್ನಾಗಿ ಓದಿದರು ಉತ್ತಮ ಉದ್ಯೋಗ ಸಿಗುವುದೇ ಎಂಬ ಅನುಮಾನ ಯುವ ಜನತೆಯಲ್ಲಿ ಮೂಡಲಾರಂಭಿಸಿದೆ. ಸಿಬಿಎಸ್ಇ ಪ್ರಶ್ನೆ ಪತ್ರಿಕೆ ಸೋರಿಕೆ ಪತ್ತೆ ಹಚ್ಚಿದ್ದು 19 ವರ್ಷದ ಯುವಕ. ಇನ್ನು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕಳೆದ 20 ದಿನದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಅವರನ್ನು ಮಾತನಾಡಿ ಸುವ ಕೆಲಸ ಮಾಡಿಲ್ಲ. ಮಣಿಪುರದಲ್ಲಿ ತಿಂಗಳುಗಟ್ಟಲೆ ಹಿಂಸಾಚಾರ ನಡೆದರೂ ಅದರ ಬಗ್ಗೆ ಬಿಜೆಪಿ ನಾಯಕರು ತುಟಿ ಬಿಚ್ಚಲಿಲ್ಲ. ದೆಹಲಿಯಲ್ಲಿ ರೈತರು ಹೋರಾಟ ಮಾಡಿದರೆ ಅವರನ್ನು ದೇಶದ್ರೋಹಿಗಳು ಎಂದು ಕರೆದರು ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು.
ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಮಾತನಾಡಿ ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ದೇಶದ 150 ಸ್ಥಳಗಳಲ್ಲಿ ಇಂದು ಛಾತ್ರೊಂಕಿ ಗೂಂಜ್ ಕಾರ್ಯಕ್ರಮ ಆಯೋಜಿಸಲಾಗಿದೆ. ನೀಟ್ ಪರೀಕ್ಷೆ ಪತ್ರಿಕೆ ಸೋರಿಕೆಯಾದಾಗ ಪ್ರಧಾನಿ ನರೇಂದ್ರ ಮೋದಿ ಅವರೇ ಜವಾಬ್ದಾರಿ ತೆಗೆದುಕೊಂಡು ಕೂಡಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ ಪಡೆಯಬೇಕಿತ್ತು. ಆದರೆ ದೆಹಲಿ ಜಂತರ್ ಮಂತರ್ ನಲ್ಲಿ ಹೋರಾಟ ಮಾಡುತ್ತಿದ್ದವರ ಮೇಲೆಯೇ ಹಲ್ಲೆ ನಡೆಸಿರುವುದು ಅಕ್ಷಮ್ಯ. ಕೇಂದ್ರ ಸರ್ಕಾರ ಹಿಟ್ಲರ್ ರೀತಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಮುಖಂಡೆ ಪುಷ್ಪಲತಾ ಮಾತನಾಡಿ, ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಕೇವಲ 5-6 ಕ್ಷೇತ್ರಕ್ಕೆ ಮಾತ್ರ ಆದ್ಯತೆ ನೀಡಲಾಗುತ್ತಿದೆ. ಇದೇ ಕಾರಣದಿಂದ ಶಿಕ್ಷಣ ವ್ಯವಸ್ಥೆ ಬದಲಾಗಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೋರಾಟ ಆರಂಭಿಸಿದ್ದಾರೆ. ವಿವಿಧ ಕ್ಷೇತ್ರಗಳಲ್ಲೂ ವಿಪುಲ ಉದ್ಯೋಗಾವಕಾಶಗಳಿವೆ. ಇದನ್ನು ಯುವಜನತೆಗೆ ತಿಳಿಸುವ ಕೆಲಸ ಮಾಡಬೇಕಿದೆ. ಇದಕ್ಕೆ ರಾಹುಲ್ ಗಾಂಧಿ ಅವರಂತ ನೇತಾರರು ಅಧಿಕಾರಕ್ಕೆ ಬರಬೇಕು ಎಂದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಮಾತನಾಡಿ, ನೀಟ್ ಪರೀಕ್ಷೆ ಅಕ್ರಮದಿಂದ 24 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಾಶವಾದಂತಾಗಿದೆ. ಇದನ್ನೇ ನಾವು ಕೇಂದ್ರ ಸರ್ಕಾರಕ್ಕೆ ಪ್ರಶ್ನೆ ಕೇಳುತ್ತಿದ್ದೇವೆ. ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ.ತಮ್ಮಯ್ಯ, ಸಿಡಿಎ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಮಾಜಿ ಅಧ್ಯಕ್ಷ ನಯಾಜ್ ಅಹಮದ್, ಯುವ ಕಾಂಗ್ರೆಸ್ ಮುಖಂಡ ಲಾಕೇಶ್ ಮತ್ತಿತರರಿದ್ದರು.
-- ಬಾಕ್ಸ್ ---ಧರ್ಮೇಂದ್ರ ಪ್ರಧಾನ್ ರಾಜಿನಾಮೆಗೆ ಆಗ್ರಹ
ನೀಟ್ ಪರೀಕ್ಷೆ ಅಕ್ರಮದಿಂದ 21 ಮಂದಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡರು. ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಚರ್ಚೆಗೆ ಸ್ಪೀಕರ್ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕು ಎಂದು ಮಾಜಿ ಸಚಿವ ದಿನೇಶ್ ಗುಂಡೂರಾವ್ ಆಗ್ರಹಿಸಿದರು.