ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ ನೀಟ್ ಪರೀಕ್ಷೆ ಸಂಬಂಧಿತ ವಿಚಾರಗಳನ್ನು ಖಂಡಿಸಿ ದೊಡ್ಡಬಳ್ಳಾಪುರ ನಗರದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಹಳೆಯ ಬಸ್ ನಿಲ್ದಾಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಶಾಸಕ ಟಿ. ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಮತ್ತಿತರರು ಎತ್ತಿನ ಗಾಡಿ ಏರಿ ಮೆರವಣಿಗೆಯಲ್ಲಿ ಭಾಗಿಯಾದರು.ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮಹಿಳೆಯರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು, ನೀಟ್ ಪರೀಕ್ಷೆ ರದ್ದುಪಡಿಸುವ ಮೂಲಕ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಆರೋಪಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.ಹಳೆಯ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಮಹಿಳೆಯರು ತಲೆಯ ಮೇಲೆ ಕಟ್ಟಿಗೆ ಹೊತ್ತು ಗಮನ ಸೆಳೆದರು. ಅಲ್ಲದೆ ಕಾಂಗ್ರೆಸ್ ಮುಖಂಡರು ಎತ್ತಿನಗಾಡಿಯಲ್ಲಿ ಮೆರವಣಿಗೆ ನಡೆಸುವ ಮೂಲಕ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿದರು.
ತಾಲೂಕು ಕಚೇರಿ ವೃತ್ತದಲ್ಲಿ ಸೌದೆ ಒಲೆ ಇಟ್ಟು ಧರಣಿ:
ತಾಲೂಕು ಕಚೇರಿ ವೃತ್ತದಲ್ಲಿ ಸೌದೆ ಒಲೆ ಇಟ್ಟು ಅದರಲ್ಲಿ ಹಾಲು ಕಾಯಿಸುವ ಮೂಲಕ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿಗಳು ಜನವಿರೋಧಿಯಾಗಿವೆ. ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಅಕ್ಷಮ್ಯ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚಲ್ಲಾಟವಾಡುವುದು ಖಂಡನೀಯ. ಪದೇ ಪದೇ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದು ಆಕ್ಷೇಪಾರ್ಹ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಅಡುಗೆ ಅನಿಲ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಧೋರಣೆ ವಿರುದ್ದ ಜನತೆ ರೊಚ್ಚಿಗೆದ್ದಿದ್ದಾರೆ. ಏಕಾಏಕಿ 1 ಸಾವಿರ ರುಪಾಯಿಗಳಷ್ಟು ಬೆಲೆ ಏರಿಕೆ ಇತಿಹಾಸದಲ್ಲಿ ಯಾವತ್ತೂ ಆಗಿಲ್ಲ. ಜನರ ಮುಂದೆ ದೊಡ್ಡ ಜನಪರ ಸರ್ಕಾರ ಎಂದು ಬಿಂಬಿಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಗ್ಯಾಸ್ ಬೆಲೆ ಏರಿಕೆ ಮೂಲಕ ಜನರ ಬದುಕನ್ನು ಮೂರಾಬಟ್ಟೆ ಮಾಡಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರಾದ ಟಿ.ವೆಂಕಟರಮಣಯ್ಯ, ಜಿ.ಲಕ್ಷ್ಮೀಪತಿ, ಚುಂಚೇಗೌಡ, ಅಪ್ಪಿ ವೆಂಕಟೇಶ್, ಕೆ.ಪಿ.ಜಗನ್ನಾಥ್, ಬಿ.ಜಿ.ಹೇಮಂತರಾಜು, ರೇವತಿ, ಆಂಜನಮೂರ್ತಿ, ಆದಿತ್ಯ ನಾಗೇಶ್, ನಾರನಹಳ್ಳಿ ಗೋವಿಂದರಾಜು, ಮುನಿರಾಜು ಮತ್ತಿತರರು, ಮಹಿಳಾ ಕಾರ್ಯಕರ್ತರು ಸೇರಿದಂತೆ ನೂರಾರು ಮಂದಿ ಭಾಗವಹಿಸಿದ್ದರು.18ಕೆಡಿಬಿಪಿ3-
ದೊಡ್ಡಬಳ್ಳಾಪುರದಲ್ಲಿ ಕೇಂದ್ರದ ಬೆಲೆ ಏರಿಕೆ ನೀತಿ ವಿರೋಧಿಸಿ ತಾಲೂಕು ಕಚೇರಿ ವೃತ್ತದಲ್ಲಿ ಸೌದೆಒಲೆ ಹಚ್ಚಿ ಪ್ರತಿಭಟಿಸಿದ ಕಾಂಗ್ರೆಸ್ ಮುಖಂಡರು.18ಕೆಡಿಬಿಪಿ4-
ಕೇಂದ್ರದ ಬೆಲೆ ಏರಿಕೆ ನೀತಿ ವಿರೋಧಿಸಿ ದೊಡ್ಡಬಳ್ಳಾಪುರದಲ್ಲಿ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಎತ್ತಿನಗಾಡಿ ಏರಿ ಪ್ರತಿಭಟನೆ ನಡೆಸಿದರು.