ಸಾರಾಂಶ
ಜಿಲ್ಲಾದ್ಯಂತ ಜಲ್ ಜೀವನ್ ಮಿಷನ್ ಯೋಜನೆ ಅಡಿ ಕಾಮಗಾರಿಗಳು ಪೂರ್ಣಗೊಂಡಿರುವ ಹಳ್ಳಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಿಸಬೇಕೆಂದು ಸೂಚಿಸಿದರು.
ಕನ್ನಡಪ್ರಭ ವಾರ್ತೆ ತುಮಕೂರು
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಯಡಿ 30 ಹೊಸ ಕೊಳವೆಬಾವಿ ಕೊರೆಸಲು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅವರು ಅನುಮೋದನೆ ನೀಡಿದರಲ್ಲದೆ, ಕೊಳವೆಬಾವಿಗಳನ್ನು ಕೊರೆದ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಎಲ್ಲಾ ತಾಲೂಕುಗಳ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಿದರು.ಗುರುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯನ್ನು ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ನೀರು ಸರಬರಾಜು ಮಾಡುತ್ತಿರುವ ಕೊಳವೆ ಬಾವಿಗಳ ನೀರಿನ ಗುಣಮಟ್ಟವನ್ನು ಕಾಪಾಡಲು ಜೈವಿಕ ಹಾಗೂ ರಾಸಾಯನಿಕ ಪರೀಕ್ಷೆ ಮಾಡಿದ ನಂತರ ಕುಡಿಯುವ ನೀರು ಸುರಕ್ಷಿತವಾಗಿದೆ ಎಂಬುದನ್ನು ಖಚಿತಪಡಿಸಿಕೊಂಡು ವರದಿ ನೀಡುವಂತೆ ಸೂಚನೆ ನೀಡಿದರಲ್ಲದೆ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲಾಗುತ್ತಿರುವ ಕೊಳವೆ ಬಾವಿಗಳಿಗೆ ಕ್ಲೋರಿನೇಷನ್ ಕಡ್ಡಾಯವಾಗಿ ಮಾಡಬೇಕು. ಜನರ ಆರೋಗ್ಯ ಕಾಪಾಡುವುದು ನಮ್ಮೆಲ್ಲರ ಪ್ರಮುಖ ಹೊಣೆಗಾರಿಕೆ ಎಂದು ಹೇಳಿದರು.
ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವುದು ನಮ್ಮೆಲ್ಲರ ಪ್ರಥಮ ಕರ್ತವ್ಯ. ಜಲ್ ಜೀವನ್ ಮಿಷನ್ ಯೋಜನೆಯಡಿ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿ 6 ತಿಂಗಳಾದರೂ ಕಾಮಗಾರಿ ಪ್ರಾರಂಭವಾಗದಿರುವುದನ್ನು ಗಮನಿಸಿದ ಅವರು, ತಕ್ಷಣವೇ ಸಮಸ್ಯೆಗಳನ್ನು ಬಗೆಹರಿಸಿ ಕಾಮಗಾರಿ ಪ್ರಾರಂಭಿಸಬೇಕೆಂದು ಸೂಚನೆ ನೀಡಿದರಲ್ಲದೆ, ಕಾಮಗಾರಿ ಪ್ರಾರಂಭವಾಗಿ ತಿಂಗಳುಗಳು ಕಳೆದರೂ ಪೂರ್ಣಗೊಳ್ಳದೆ ಇರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ಹೇಳಿದರು.ಜಿಲ್ಲಾದ್ಯಂತ ಜಲ್ ಜೀವನ್ ಮಿಷನ್ ಯೋಜನೆ ಅಡಿ ಕಾಮಗಾರಿಗಳು ಪೂರ್ಣಗೊಂಡಿರುವ ಹಳ್ಳಿಗಳಿಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಗ್ರಾಮಗಳನ್ನು ಹರ್ ಘರ್ ಜಲ್ ಗ್ರಾಮಗಳೆಂದು ಘೋಷಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಂಜೀವಪ್ಪ, ಮುಖ್ಯ ಲೆಕ್ಕಾಧಿಕಾರಿ ನರಸಿಂಹಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ, ಚಂದ್ರಶೇಖರ್ ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.;Resize=(128,128))
;Resize=(128,128))
;Resize=(128,128))
;Resize=(128,128))