ಕನ್ನಡಪ್ರಭ ವಾರ್ತೆ ಮಂಡ್ಯ

೨೦೨೫-೨೬ನೇ ಸಾಲಿನ ಸಿಇಟಿ ಪ್ರವೇಶ ಪರೀಕ್ಷೆ ಏ.೨೩ ಮತ್ತು ೨೪ ರಂದು ನಡೆಯಲಿದ್ದು, ಪರೀಕ್ಷೆ ವ್ಯವಸ್ಥಿತ ಮತ್ತು ಸುಗಮವಾಗಿ ನಡೆಯುವಂತೆ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಸಿ ಶಿವಾನಂದಮೂರ್ತಿ ಹೇಳಿದರು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪ್ರವೇಶ ಪರೀಕ್ಷೆಯ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರವೇಶ ಪರೀಕ್ಷೆಯು ಜಿಲ್ಲೆಯಲ್ಲಿ ೨ ತಾಲೂಕು ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಕೆ.ಆರ್.ಪೇಟೆ ತಾಲೂಕಿನ ೩ ಪರೀಕ್ಷಾ ಕೇಂದ್ರಗಳು ಹಾಗೂ ಮಂಡ್ಯ ತಾಲೂಕಿನಲ್ಲಿ ೯ ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು ಜಿಲ್ಲೆಯ ೧೨ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.

ಕೆ.ಆರ್.ಪೇಟೆ ತಾಲೂಕಿನ ೩ ಕೇಂದ್ರದಲ್ಲಿ ಒಟ್ಟು ೧೫೯೯ ವಿದ್ಯಾರ್ಥಿಗಳು ಹಾಗೂ ಮಂಡ್ಯದ ೯ ಕೆಂದ್ರದಲ್ಲಿ ಒಟ್ಟು ೪೬೬೦ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಜಿಲ್ಲಾದ್ಯಂತ ೧೨ ಕೇಂದ್ರಗಳಿಲ್ಲಿ ಒಟ್ಟು ೬೨೫೯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು.

ಪರೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ವೆಬ್ ಕಾಸ್ಟಿಂಗ್ ಮೇಲುಸ್ತುವಾರಿಯನ್ನು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೋಡಿಕೊಳ್ಳಬೇಕು. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ೨೦೦ ಮೀ. ಸುತ್ತಳತೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸುವಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.


ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸಂಬಂಧಪಟ್ಟ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಎ-ಬಿ ದರ್ಜೆಗಿಂತ ಕಡಿಮೆ ಇಲ್ಲದ (ತಹಸೀಲ್ದಾರರು, ಬಿಇಒ ಹಾಗೂ ಪ್ರಾಂಶುಪಾಲರುಗಳನ್ನೊಳಗೊಅಡ ತ್ರಿ-ಸದಸ್ಯ ಸಮಿತಿ) ಅಧಿಕಾರಿಗಳನ್ನೊಳಗೊಂಡಂತೆ ೪ ತಂಡಗಳ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ವಿಶೇಷ ತಂಡವನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶಿಸಿರುತ್ತಾರೆ ಎಂದರು.

ಕೆ.ಆರ್.ಪೇಟೆ ತಾಲೂಕಿನ ಬೆಳಗಿನ ಅವಧಿಯ ಪ್ರಶ್ನೆಪತ್ರಿಕೆಯೊಂದಿಗೆ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ತ್ರಿಸದಸ್ಯ ಸಮಿತಿಯವರೊಂದಿಗೆ ಕಳುಹಿಸಿ ಮಧ್ಯಾಹ್ನದ ಪ್ರಶ್ನೆ ಪತ್ರಿಕೆಗಳನ್ನು ಕೆ.ಆರ್.ಪೇಟೆ ತಾಲೂಕು ಖಜಾನೆಯಲ್ಲಿರಿಸುವಂತೆ ತಾಲೂಕು ಖಜಾನಾಧಿಕಾರಿಯವರಿಗೆ ತಿಳಿಸಬೇಕು. ಬೆಳಗ್ಗೆ ಮತ್ತು ಮಧ್ಯಾಹ್ನದ ಅವಧಿಯ ಪ್ರಶ್ನೆಪತ್ರಿಕೆ ಅವಧಿ ಮುಗಿದ ಬಳಿಕ ಆಯಾ ದಿನದಂದೇ ಎರಡು ಅವಧಿಯ ಉತ್ತರ ಪತ್ರಿಕೆಗಳನ್ನು ಮಂಡ್ಯ ಜಿಲ್ಲಾ ಖಜಾನೆಗೆ ರವಾನಿಸುವಂತೆ ತಿಳಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಹಾಗೂ ಪ್ರಶ್ನೆಪತ್ರಿಕೆಗಳನ್ನು ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಮತ್ತು ಪರೀಕ್ಷೆ ಮುಗಿದ ನಂತರ ಉತ್ತರ ಪತ್ರಿಕೆ ಬಂಡಲ್‌ಗಳನ್ನು ಖಜಾನೆ ಕೇಂದ್ರಗಳಿಗೆ ಸುರಕ್ಷಿತವಾಗಿ ತಲುಪಿಸುವವರೆಗೂ ಪ್ರಶ್ನೆಪತ್ರಿಕೆ ಮಾರ್ಗಾಧಿಕಾರಿಗಳ ತಂಡಕ್ಕೆ ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸುವಂತೆ ಸೂಚಿಸಿದರು.

ವಿದ್ಯಾರ್ಥಿಗಳನ್ನು ತಪಾಸಣೆ ಮಾಡಲು ಇಬ್ಬರು ಪಿಸಿಗಳು (ಮಹಿಳಾ ಸಿಬ್ಬಂದಿಯನ್ನೊಳಗೊಂಡಂತೆ) ಹೊಮ್ ಗಾರ್ಡ್‌ಗಳನ್ನು ನಿಯೋಜಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಲ್ಲಿ ರಿಸ್ಟ್‌ವಾಚ್, ಮೊಬೈಲ್ ಹಾಗೂ ಇತ್ಯಾದಿ ಇಲೆಕ್ಟ್ರಾನಿಕ್ ಸಾಧನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಹಾಗೂ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಗೋಡೆ ಗಡಿಯಾರವನ್ನು ಹಾಕಬೇಕು ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ ಬೋಧಿಸುವ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತಿಲ್ಲ. ಸಿ.ಇ.ಟಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪೋಷಕರು ಸಿಇಟಿ ಪರೀಕ್ಷಾ ಕರ್ತವ್ಯದಲ್ಲಿ ಪಾಲ್ಗೊಳ್ಳಬಾರದಂತೆ ಕ್ರಮ ವಹಿಸಬೇಕು. ಹೆಚ್ಚುವರಿ ಕೊಠಡಿ ಮೇಲ್ವಿಚಾರಕರನ್ನು ನೇಮಕ ಮಾಡಿಕೊಳ್ಳಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ವೈದ್ಯಾಧಿಕಾರಿಗಳನ್ನು ನೇಮಿಸುವುದು, ಪ್ರಥಮ ಚಿಕಿತ್ಸೆಗೆ ಬೇಕಾಗುವ ಔಷಧಗಳನ್ನು ಒದಗಿಸಿ ವೆಬ್‌ಕಾಸ್ಟಿಂಗ್ ಮಾಡುವ ಸಂಬಂಧ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾಡಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಅಪರ ಪೊಲೀಸ್ ವರಿಷ್ಠಾಧಿಕಾರಿ ಸಿ.ಈ.ತಿಮ್ಮಯ್ಯ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಜಿಲ್ಲಾಧಿಕಾರಿ ಕಚೇರಿಯ ತಹಸೀಲ್ದಾರ್ ರವಿಶಂಕರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಚಲುವಯ್ಯ, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಹದೇವ ಸೇರಿದಂತೆ ಇತರರಿದ್ದರು.