ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಜಂಟಿ ಆಶ್ರಯದಲ್ಲಿ ‘ಚೈನ್’ಮಕ್ಕಳ ಸುಧಾರಿತ ಪೌಷ್ಟಿಕತೆಗಾಗಿ ಆರೋಗ್ಯ ಪ್ರಕ್ರಿಯೆ ಕುರಿತು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ನಗರದ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಶ್ರೀ ಕೃಷ್ಣ ಸಭಾಂಗಣದಲ್ಲಿ ಶನಿವಾರ ಕಾರ್ಯಾಗಾರ ನಡೆಯಿತು.
ಕಾರ್ಯಾಗಾರವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಐ. ಪಿ. ಗಡಾದ್ ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ಮತ್ತು ರಕ್ತಹೀನತೆಯನ್ನು ಗುರುತಿಸಿ ಅವುಗಳನ್ನು ಸಮುದಾಯದಲ್ಲಿ ನಿಯಂತ್ರಿಸುವಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಮುಖ್ಯ. ತರಬೇತಿ ಪಡೆದ ಅಧಿಕಾರಿಗಳು ಸಮಾಜದಲ್ಲಿ ಮುಂಚೂಣಿ ಆರೋಗ್ಯ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ಪಿ.ಎಚ್.ಸಿ.ಓ, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಈ ಬಗ್ಗೆ ಮಾಹಿತಿಯನ್ನು ನೀಡಬೇಕು ಎಂದರು.ಮುಂದಿನ ದಿನಗಳಲ್ಲಿ ಜಿಲ್ಲೆಯನ್ನು ಅಪೌಷ್ಟಿಕತೆ ಮುಕ್ತ ಜಿಲ್ಲೆಯನ್ನಾಗಿಸುವಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳು ಪಾತ್ರ ವಹಿಸಬೇಕು ಎಂದ ಅವರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಸಮುದಾಯ ಆರೋಗ್ಯ ಅಧಿಕಾರಿಗಳು ಆ ವ್ಯಾಪ್ತಿಯಲ್ಲಿನ ಮಕ್ಕಳಲ್ಲಿ ಸಾಧಾರಣ ಹಾಗೂ ತೀವ್ರ ಅಪೌಷ್ಟಿಕತೆಯನ್ನು ತ್ವರಿತವಾಗಿ ಗುರುತಿಸಿ, ಅಪೌಷ್ಟಿಕತೆಯನ್ನು ನಿವಾರಿಸುವಲ್ಲಿ ಸಹಕರಿಸಬೇಕು ಎಂದರು.
ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಮ್ ರಾವ್ ಕೆ. ಮಾತನಾಡಿ, ಅಪೌಷ್ಟಿಕತೆ ನಿವಾರಣೆಗಾಗಿ ಸಮತೋಲಿತ ಆಹಾರದ ಅಗತ್ಯವಿದೆ. ಪೌಷ್ಟಿಕತೆಯ ಅಂಶಗಳು ಸಮತೋಲಿತವಾಗಿ ದೇಹಕ್ಕೆ ಸೇರಿದರೆ ಉತ್ತಮ ಆರೋಗ್ಯ ಹೊಂದಬಹುದು ಎಂದರು.ಕಾರ್ಯಾಗಾರದಲ್ಲಿ ಪ್ರಭಾರ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧರ್ ಎಚ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳಾದ ವಿಜಯಬಾಯಿ, ಭಾಗ್ಯಲಕ್ಷ್ಮೀ ಕೆ. ಹಾಗೂ ಚಂದ್ರಕಲಾ ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರೀತಮ್ ಬಿ.ಎಸ್, ಜಿಲ್ಲಾ ಲೆಕ್ಕಪತ್ರ ವ್ಯವಸ್ಥಾಪಕ ಗಿರೀಶ್ ಕಡ್ಡಿಪುಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.