ಸಾರಾಂಶ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ವಾಸ್ತವಿಕ ಹಾಗೂ ವಸ್ತುನಿಷ್ಠ ದತ್ತಾಂಶವಿಲ್ಲದೆ ಸರ್ಕಾರ ತರಾತುರಿಯಲ್ಲಿ ಒಳಮೀಸಲಾತಿ ಜಾರಿಗೊಳಿಸಬಾರದೆಂದು ಆಗ್ರಹಿಸಿ ಡಿ.17 ರಂದು ಬೆಳಗಾವಿ ಸುವರ್ಣಸೌಧ ಚಲೋ ಪ್ರತಿಭಟನೆ ನಡೆಸಲಾಗುವುದು ಎಂದು ಬಂಜಾರ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಿ.ಆರ್.ಗಿರೀಶ್ ಹೇಳಿದರು.ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ನಿಖರವಾದ ದತ್ತಾಂಶ ಪಡೆಯದೇ ತರಾತುರಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಹೊರಟಿದೆ. ದತ್ತಾಂಶವನ್ನು ಅಧಿಕೃತವಾಗಿ ಘೋಷಿಸಬೇಕು. ಡಿ.17ರಂದು ಬೆಳಗಾವಿ ಚಲೋಗೆ ಶಿವಮೊಗ್ಗ ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು ಒಟ್ಟಿಗೆ ಸೇರಿ ಸುಮಾರು 10 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದೇವೆ ಎಂದು ತಿಳಿಸಿದರು.
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಎಚ್.ಕಾಂತರಾಜ್ ಅವರ ಅವಧಿಯಲ್ಲಿ 2015ರಲ್ಲಿ ಕರ್ನಾಟಕ ರಾಜ್ಯದಲ್ಲಿ ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮಿಕ್ಷೆ ವರದಿಯಲ್ಲಿ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳ ದತ್ತಾಂಶವಿದೆ. ಆದರೆ, ಸರ್ಕಾರ ಈ ವರದಿಯನ್ನು ಒಪ್ಪಿಕೊಂಡಿಲ್ಲ. ಕಳೆದ ಬಾರಿಯ ಬಸವಾರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾನೂನು ಸಚಿವರಾಗಿದ್ದ ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ರಚಿಸಿ ಸದಾಶಿವ ಆಯೋಗದ ವರದಿಯನ್ನು ಅಪ್ರಸ್ತುತವೆಂದು ತಿರಸ್ಕರಿಸಲಾಗಿದೆ ಎಂದು ತಿಳಿಸಿದರು.ಸರ್ಕಾರ ಯಾವುದೇ ಒತ್ತಡಕ್ಕೆ ಒಳಗಾಗದೆ ತರಾತುರಿಯಲ್ಲಿ ಒಳಮೀಸಲಾತಿಯನ್ನು ಜಾರಿ ಮಾಡಬಾರದು, ಪರಿಶಿಷ್ಟರ ನಿಖರ ದತ್ತಾಂಶವನ್ನು ಬಹಿರಂಗ ಪಡಿಸಬೇಕೆಂದು ಆಗ್ರಹಿಸಿ ಬೆಳಗಾವಿ ಸುವರ್ಣ ಸೌಧ ಚಲೋ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಬಂಜಾರ, ಭೋವಿ, ಕೊರಚ, ಕೊರಮ, ಅಲೆಮಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶವನ್ನು ನೀಡಬೇಕು ಎಂದು ಕೋರಿದರು.
ಕರ್ನಾಟಕ ಸರ್ಕಾರ ನಿವೃತ್ತ ನ್ಯಾಯಮೂರ್ತಿ ಎಚ್.ಎಸ್.ನಾಗಮೋಹನ್‍ದಾಸ್ ಅಧ್ಯಕ್ಷತೆಯಲ್ಲಿ ಏಕಸದಸ್ಯ ಆಯೋಗವನ್ನು ರಚಿಸಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯ ಕುರಿತು ದತ್ತಾಂಶ ಪಡೆದು ಒಳಮೀಸಲಾತಿ ಬಗ್ಗೆ 2 ತಿಂಗಳ ಒಳಗೆ ವರದಿ ಸಲ್ಲಿಸಲು ಸೂಚಿಸಿದೆ. ಪ್ರಸ್ತುತ ಸರ್ಕಾರದ ಬಳಿ 2011ರ ಜನಗಣತಿಯ ಅಂಕಿ ಅಂಶಗಳ ಅಧಿಕೃತ ಮಾಹಿತಿ ಮಾತ್ರ ಲಭ್ಯವಿದ್ದು, ಇದರಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ದತ್ತಾಂಶ ಇರುವುದಿಲ್ಲ. ರಾಜ್ಯ ಸರ್ಕಾರ ಆಯೋಗಕ್ಕೆ ನೀಡಿರುವ 2 ತಿಂಗಳ ಕಾಲಾವಕಾಶದಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ದತ್ತಾಂಶ ಸಂಗ್ರಹಿಸಿ ವರದಿ ಸಲ್ಲಿಸುವುದು ಅಸಾಧ್ಯವಾದುದು ಎಂದರು.ಪತ್ರಿಕಾಗೋಷ್ಠಿಯಲ್ಲಿ ತಾಲೂಕು ಬಂಜಾರ ಸಂಘದ ಅಧ್ಯಕ್ಷ ಮಂಜುನಾಥ್ ನಾಯ್ಕ್, ಮಾಜಿ ಅಧ್ಯಕ್ಷ ಹೇಮೇಶ್ ನಾಯ್ಕ್, ಮಹಿಳಾ ಮುಖಂಡರಾದ ಪುಷ್ಪ ಬಾಯಿ, ಉಮಾಮಹೇಶ್ವರ ನಾಯ್ಕ್, ಮಂಜುನಾಯ್ಕ್ ಉಪಸ್ಥಿತರಿದ್ದರು.