ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಜಿಲ್ಲಾ ಕೇಂದ್ರದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವಕ್ಕೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ನಗರದಲ್ಲಿ ಸೋಮವಾರ ವಿಧ್ಯುಕ್ತ ಚಾಲನೆ ನೀಡಿದರು.ಮೊದಲಿಗೆ ನಗರದ ಶ್ರೀ ಚಾಮರಾಜೇಶ್ವರ ದೇವಾಲಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಂ.ಆರ್.ಮಂಜುನಾಥ್, ಇತರೆ ಗಣ್ಯರು ವಿಶೇಷ ಪೂಜಾ ಕೈಂಕರ್ಯ ಕಾರ್ಯ ನೆರವೇರಿಸಿ ಜಿಲ್ಲಾ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.
ಶ್ರೀ ಚಾಮರಾಜೇಶ್ವರ ದೇವಾಲಯಕ್ಕೆ ಆಗಮಿಸಿದ ಗಣ್ಯರು ಮೊದಲು ಚಾಮರಾಜೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿ ದೇವಾಲಯದ ಗರ್ಭಗುಡಿಯಲ್ಲಿರುವ ಉತ್ಸವಮೂರ್ತಿಯ ಜ್ಯೋತಿ ಬೆಳಗಿಸಿದರು. ಶ್ರೀ ಚಾಮುಂಡೇಶ್ವರಿ, ಶ್ರೀ ಕೆಂಪನಂಜಾಂಬ ದೇವಿ ಅಮ್ಮನವರಿಗೂ ಪೂಜಾ ಕಾರ್ಯ ನೆರವೇರಿಸಿದರು. ಬಳಿಕ ನಂದಿಧ್ವಜ ಕಂಬಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿದರು.ಬಳಿಕ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಸ್ಥಳದಲ್ಲಿಯೇ ಚಿತ್ರ ಬಿಡಿಸುವ ಸ್ಪರ್ಧೆಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಇತರೆ ಗಣ್ಯರು ಚಿತ್ರಕ್ಕೆ ಬಣ್ಣ ಹಚ್ಚುವ ಮೂಲಕ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಅಲ್ಲದೆ ದೇವಾಲಯದ ಉದ್ಯಾನದಲ್ಲಿರುವ ಕನ್ನಡತಾಯಿ ಭುವನೇಶ್ವರಿ ದೇವಿಯ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ನಂತರ ದೇವಾಲಯದ ಮುಂಭಾಗದಲ್ಲಿ ಹಾಕಲಾಗಿರುವ ಚಾಮರಾಜನಗರ ದಸರಾ ಮಹೋತ್ಸವದ ಮುಖ್ಯ ವೇದಿಕೆಯಲ್ಲಿ ಸಚಿವ ಕೆ. ವೆಂಕಟೇಶ್ ಡೊಳ್ಳು ಬಾರಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.ಇದೇ ವೇಳೆ ಮಾತನಾಡಿದ ಸಚಿವ ಕೆ.ವೆಂಕಟೇಶ್, ಚಾಮರಾಜನಗರ ಜಿಲ್ಲೆಯಲ್ಲಿ ಆಚರಿಸಲಾಗುತ್ತಿರುವ ದಸರಾ ಮಹೋತ್ಸವಕ್ಕೆ ಸಂಭ್ರಮದ ಚಾಲನೆ ನೀಡಲಾಗಿದೆ. ಮೈಸೂರು ಅರಸರು ದಸರಾವನ್ನು ಕಳೆದ ೪೦೦ ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದ್ದಾರೆ. ಮೈಸೂರಿನಿಂದ ಚಾಮರಾಜನಗರ ಪ್ರತ್ಯೇಕ ಜಿಲ್ಲೆಯಾಗಿ ವಿಭಜನೆಯಾದ ನಂತರ ಇಲ್ಲಿಯೂ ದಸರಾವನ್ನು ಮುಂದುವರಿಸುವ ನಿಟ್ಟಿನಲ್ಲಿ ಮೈಸೂರಿನ ಮಾದರಿಯಲ್ಲಿಯೇ ದಸರಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.
ಈ ಬಾರಿ ರಾಜ್ಯದೆಲ್ಲೆಡೆ ಸಾಕಷ್ಟು ಮಳೆಯಾಗಿದೆ. ಜಿಲ್ಲೆಯಲ್ಲಿಯೂ ಮಳೆ-ಬೆಳೆ ಚೆನ್ನಾಗಿ ಆಗಿರುವುದರಿಂದ ಚಾಮರಾಜನಗರದಲ್ಲಿಯೂ ಅದ್ಧೂರಿ ದಸರಾ ಆಚರಿಸುವಂತೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಬಾರಿ ಯುವ ದಸರಾ, ಮಹಿಳಾ ದಸರಾ, ರೈತ ದಸರಾ. ಪಾರಂಪರಿಕ ನಡಿಗೆ, ಮ್ಯಾರಥಾನ್ ಸೇರಿದಂತೆ ಹಲವಾರು ವಿಭಿನ್ನ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ರೂಪಿಸಿದೆ. ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಕಲಾವಿದರಿದ್ದಾರೆ. ದಸರಾ ಕಾರ್ಯಕ್ರಮಗಳಲ್ಲಿ ಕಲಾವಿದರನ್ನು ಪ್ರೋತ್ಸಾಹಿಸುವ ಸಲುವಾಗಿ ಅವರೆಲ್ಲರಿಗೂ ಸಮಾನ ಅವಕಾಶಗಳನ್ನು ನೀಡಲಾಗಿದೆ ಎಂದು ತಿಳಿಸಿದರು.ಆರಂಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ.ಲಕ್ಷ್ಮೀ ಸಂವಿಧಾನ ಪ್ರಸ್ತಾವನೆ ಬೋಧಿಸಿದರು. ವೇದಿಕೆ ಕಾರ್ಯಕ್ರಮದ ಬಳಿಕ ಚಾಮರಾಜೇಶ್ವರ ದೇವಾಲಯದ ಪಕ್ಕದಲ್ಲಿಯೇ ಮಹಿಳಾ ದಸರಾ ಅಂಗವಾಗಿ ಆಯೋಜಿಸಲಾಗಿದ್ದ ಮಹಿಳಾ ಸಂಘಗಳು ತಯಾರಿಸಿದ ಉತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮಳಿಗೆಗಳಿಗೆ ಸಚಿವ ಕೆ. ವೆಂಕಟೇಶ್ ಹಾಗೂ ಶಾಸಕ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು. ಪ್ರತಿ ಮಳಿಗೆಗೂ ಭೇಟಿ ನೀಡಿ ಮಾಹಿತಿ ಪಡೆದರು. ಅಲ್ಲದೆ ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಖರೀದಿಸಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟಕ್ಕೆ ಉತ್ತೇಜನ ನೀಡಿದರು.
ಶಾಸಕ ಎ.ಆರ್.ಕೃಷ್ಣಮೂರ್ತಿ, ಶಾಸಕ ಸಿ.ಪುಟ್ಟರಂಗಶೆಟ್ಟಿ, ಸಂಸದ ಸುನೀಲ್ ಬೋಸ್, ಶಾಸಕರಾದ ಎಚ್.ಎಂ.ಗಣೇಶ್ ಪ್ರಸಾದ್, ಡಾ.ಡಿ.ತಿಮ್ಮಯ್ಯ, ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಪಂಚ ಗ್ಯಾರೆಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ನಗರಸಭೆ ಅಧ್ಯಕ್ಷ ಎಸ್.ಸುರೇಶ್, ಉಪಾಧ್ಯಕ್ಷ ಮಮತಾ, ಸದಸ್ಯರಾದ ಕುಮುದಾ ಕೇಶವಮೂರ್ತಿ, ಅಬ್ರಾರ್ ಅಹಮದ್, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪ ವಿಭಾಗಾಧಿಕಾರಿ ಮಹೇಶ್, ಇತರರು ಹಾಜರಿದ್ದರು.