18ರಿಂದ ಚಾಮರಾಜನಗರ ದಸರಾ ಮಹೋತ್ಸವ

| Published : Oct 17 2023, 12:45 AM IST

ಸಾರಾಂಶ

ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ
ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕ ಪೂಜಾ ಕೈಂಕರ್ಯ ಜತೆ ಉತ್ಸವಕ್ಕೆ ಚಾಲನೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಸಮಿತಿ ವತಿಯಿಂದ ಜಿಲ್ಲೆಯಲ್ಲಿ ಅ.17 ರಿಂದ 20ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಅ. 17ರಂದು ದಸರಾ ಕಾರ್ಯಕ್ರಮಗಳು ಉದ್ಘಾಟನೆ ನೆರವೇರಲಿದೆ. ಅ. 17ರಂದು ಬೆಳಗ್ಗೆ 10.15ಕ್ಕೆ ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದಲ್ಲಿ ಸಾಂಪ್ರಾದಾಯಿಕ ಪೂಜಾ ಕೈಂಕರ್ಯದೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. 11ಕ್ಕೆ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ದಸರಾ ಕವಿಗೋಷ್ಠಿ ನಡೆಯಲಿದೆ.11.15 ಕ್ಕೆ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲೆಯ ವಿವಿಧ ಮಹಿಳಾ ಸ್ವಸಹಾಯ ಸಂಘಗಳ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳ ಉದ್ಘಾಟನೆ ಹಮ್ಮಿಕೊಳ್ಳಲಾಗಿದೆ. 11.30 ಕ್ಕೆ ಚಾಮರಾಜೇಶ್ವರ ಉದ್ಯಾನದ ಮುಂಭಾಗದಲ್ಲಿ ಚಿತ್ರಕಲಾ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 2.30ಕ್ಕೆ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಶ್ರೀ ಚಾಮುಂಡೇಶ್ವರಿ ವಿಗ್ರಹದೊಂದಿಗೆ ದಸರಾ ಮೆರವಣಿಗೆಗೆ ಜಿಲ್ಲೆಯ ವಿವಿಧ ಕಲಾತಂಡಗಳು, ವಿವಿಧ ಇಲಾಖೆಗಳ ಸ್ತಬ್ಧಚಿತ್ರಗಳ (ಟ್ಯಾಬ್ಲೋ) ಮೆರವಣಿಗೆಗೆ ಚಾಲನೆ ನೀಡಲಾಗುವುದು. ಸಂಜೆ 5.30ಕ್ಕೆ ಚಾಮರಾಜೇಶ್ವಸ್ವಾಮಿ ದೇವಾಲಯ ಮುಂಭಾಗದ ಪ್ರಧಾನ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್‍ಯಕ್ರಮಗಳ ಉದ್ಘಾಟನೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಕಾರ್‍ಯಕ್ರಮ ಉದ್ಘಾಟಿಸುವರು. ಶಾಸಕ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆ ವಹಿಸುವರು ಸಂಸದ ವಿ. ಶ್ರೀನಿವಾಸ ಪ್ರಸಾದ್, ಶಾಸಕ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್‌ಪ್ರಸಾದ್, ಎಂ.ಆರ್. ಮಂಜುನಾಥ್, ಡಾ. ಡಿ. ತಿಮ್ಮಯ್ಯ, ಮರಿತಿಬ್ಬೇಗೌಡ, ಮಧು. ಜಿ. ಮಾದೇಗೌಡ, ಸಿ.ಎನ್. ಮಂಜೇಗೌಡ, ನಗರಸಭಾ ಸದಸ್ಯರಾದ ಅಬ್ರಾರ್ ಅಹಮದ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಇಂದು ದಸರಾ ಕವಿಗೋಷ್ಠಿ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ, ದಸರಾ ಮಹೋತ್ಸವ ಸಮಿತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ದಸರಾ ಕವಿಗೋಷ್ಠಿ ಅ.17ರಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ನಡೆಯಲಿದೆ. ಬೆಳಿಗ್ಗೆ 11 ಕ್ಕೆ ಯುವಕವಿಗೋಷ್ಠಿ ನಡೆಯಲಿದ್ದು, ಕವಿ ಡಾ. ಎಸ್. ನರೇಂದ್ರಕುಮಾರ್ ಉದ್ಘಾಟಿಸುವರು. ಕವಿ ಶೀಲ ಸತ್ಯೇಂದ್ರಸ್ವಾಮಿ ಅಧ್ಯಕ್ಷತೆ ವಹಿಸುವರು. ಕವಿ ಯರಗನಹಳ್ಳಿಯ ಬಿ. ಗುರುರಾಜು ಆಶಯ ನುಡಿಗಳನ್ನಾಡುವರು. ಸಾಂಸ್ಕೃತಿಕ ಕಾರ್‍ಯಕ್ರಮಗಳು ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಚಾಮರಾಜೇಶ್ವರ ದೇವಸ್ಥಾನದ ಆವರಣದ ಪ್ರಧಾನ ವೇದಿಕೆ, ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಎಚ್. ಪಟೇಲ್ ಸಭಾಂಗಣ ಹಾಗೂ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅ. 17ರಂದು ಸಾಂಸ್ಕೃತಿಕ ಕಾರ್‍ಯಕ್ರಮಗಳು ನಡೆಯಲಿವೆ. ಪ್ರದರ್ಶನ ಮತ್ತು ಮಾರಾಟ ಮೇಳ ಚಾಮರಾಜನಗರ ದಸರಾ ಮಹೋತ್ಸವ 2023ರ ಅಂಗವಾಗಿ ಜಿಲ್ಲಾ ಪಂಚಾಯತಿಯ ನಲ್ಮ್ (ಎನ್‌ಎಲ್‌ಆರ್‌ಎಂ) ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ (ನಲ್ಮ್) ಯಡಿ ಜಿಲ್ಲೆಯ ವಿವಿಧ ಮಹಿಳಾ ಸಂಘಗಳಿಂದ ತಯಾರಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಅ. 17 ರಿಂದ 20ರವರೆಗೆ ಬೆಳಿಗ್ಗೆ 10 ರಿಂದ ರಾತ್ರಿ 9 ರವರೆಗೆ ನಗರದ ಸರ್ಕಾರಿ ಪೇಟೆ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿದೆ. 18ರಿಂದ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆ ಚಾಮರಾಜನಗರ ದಸರಾ ಮಹೋತ್ಸವದ ಅಂಗವಾಗಿ ಅ. 18 ರಂದು ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಹಿಳೆಯರಿಗಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸುವವರು 18 ವರ್ಷ ಮೇಲ್ಪಟ್ಟಿರಬೇಕು. ಭಾಗವಹಿಸುವವರಿಗೆ ಯಾವುದೇ ಭತ್ಯೆ ಇರುವುದಿಲ್ಲ. ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ. ಆಸಕ್ತಿಯುಳ್ಳ ಮಹಿಳೆಯರು ಅ. 17ರ ಸಂಜೆ 5 ರಗೆ ಹೆಸರನ್ನು ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಚಾಮರಾಜನಗರ ದೂ.ಸಂ 08226-222603, ಸಂತೇಮರಹಳ್ಳಿ ದೂ.ಸಂ 08226-240215, ಗುಂಡ್ಲುಪೇಟೆ ದೂ.ಸಂ 08226-222286, ಕೊಳ್ಳೇಗಾಲ ದೂ.ಸಂ 08226-252367, ಯಳಂದೂರು ದೂ.ಸಂ 08226-224204 ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಾಮರಾಜನಗರ ದಸರಾ ಮಹೋತ್ಸವಕ್ಕೆ ಚಾಮರಾಜೇಶ್ವರ ದೇವಸ್ಥಾನ ಮುಂಭಾಗ ಆಕರ್ಷಿಸುತ್ತಿರುವ ವಿದ್ಯುತ್‌ ಅಲಂಕಾರ. ಚಾಮರಾಜೇಶ್ಚರ ದೇವಸ್ಥಾನದ ಮುಂಭಾಗ ದಸರಾ ಅಂಗವಾಗಿ ಸಾಂಸ್ಕೃತಿಕ ಕಾರ್‍ಯಕ್ರಮಗಳು ಪ್ರದರ್ಶನಕ್ಕಾಗಿ ಸಿದ್ಧಗೊಂಡಿರುವ ವೇದಿಕೆ.