ಚಾಮರಾಜನಗರ ದಸರಾ ಅದ್ಧೂರಿ ಆಚರಣೆಗೆ ಸಿದ್ಧತೆ

| Published : Sep 24 2024, 01:45 AM IST

ಸಾರಾಂಶ

ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಭಾಗವಾಗಿ ಜಿಲ್ಲೆಯಲ್ಲೂ ಅ. 7 ರಿಂದ 9ರವರೆಗೆ ಚಾಮರಾಜನಗರ ದಸರಾ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಚಾಮರಾಜನಗರ ದಸರಾ ಮಹೋತ್ಸವ ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ದೀಪಾಲಂಕಾರವನ್ನು ಹೆಚ್ಚು ಜನರನ್ನು ಸೆಳೆಯುವಂತೆ ಕೈಗೊಳ್ಳಬೇಕು. ಪ್ರಮುಖ ವೃತ್ತಗಳಲ್ಲಿ ವಿಶೇಷವಾಗಿ ದೀಪಾಲಂಕಾರ ವ್ಯವಸ್ಥೆಯಾಗಬೇಕಿದ್ದು, ಇದಕ್ಕಾಗಿ ಹೆಚ್ಚಿನ ಅನುದಾನ ನಿಗಧಿಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ವಿಶೇಷ ಗಮನ ನೀಡುವಂತೆ ಸಚಿವರು ತಿಳಿಸಿದರು.

ಎಂಎಸ್‌ಐಎಲ್ ಅಧ್ಯಕ್ಷರು ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, ವಿದ್ಯುತ್ ದೀಪಾಲಂಕಾರ ಎಲ್ಲಾ ಕಡೆಯಲ್ಲೂ ಇರಬೇಕು. ದೀಪಾಲಂಕಾರ ಹೆಚ್ಚು ಜನರ ಗಮನ ಸೆಳೆಯಲಿದೆ. ದಸರಾ ಹಬ್ಬದಲ್ಲಿ ವ್ಯಾಪಕವಾಗಿ ಎಲ್ಲಾ ಭಾಗಗಳಲ್ಲಿಯೂ ದೀಪಾಲಂಕಾರ ಇರುವಂತೆ ನೋಡಿಕೊಳ್ಳಬೇಕು ಎಂದರು.

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಮಾತನಾಡಿ, ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಸಾಧನೆ ಬಗ್ಗೆ ದಸರಾ ಕಾರ್ಯಕ್ರಮಗಳಲ್ಲಿ ತಿಳಿಸಬೇಕು. ಸರ್ಕಾರದ ಕಾರ್ಯಕ್ರಮಗಳು ಹೆಚ್ಚು ಜನರಿಗೆ ತಲುಪುತ್ತಿರುವ ಬಗ್ಗೆ ವೈವಿಧ್ಯಮಯ ಕಾರ್ಯಕ್ರಮಗಳ ಮೂಲಕ ಪ್ರಸ್ತುತ ಪಡಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ, ಈಗಾಗಲೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆ ನೀಡಲಾಗಿದೆ. ಯುವ ಸಂಭ್ರಮ, ದಸರಾ ಕ್ರಿಕೆಟ್ ಕಪ್, ಗ್ರಾಮೀಣ ಕ್ರೀಡಾಕೂಟದಂತಹ ವಿಶೇಷ ಕಾರ್ಯಕ್ರಮಗಳನ್ನು ಈ ಬಾರಿ ನಡೆಸಲಾಗುತ್ತಿದೆ. ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸುತ ಪಡಿಸಲು ರೂಪುರೇಷೆ ತಯಾರಿಸಿದ್ದು ಸಮಿತಿಗಳು ಕಾರ್ಯೋನ್ಮುಖವಾಗಿವೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಮಾತನಾಡಿ, ದಸರಾ ಹಿನ್ನೆಲೆಯಲ್ಲಿ ವಾಹನಗಳು ಮತ್ತು ಜನರ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗುತ್ತಿದೆ ಎಂದರು.

ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಸಿ.ಎನ್. ಮಂಜೇಗೌಡ, ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್. ಜಯಣ್ಣ, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಉಪಾಧ್ಯಕ್ಷ ಮಮತಾ ಬಾಲಸುಬ್ರಹ್ಮಣ್ಯಂ, ಜಿಪಂ ಸಿಇಒ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಬಿ.ಆರ್.ಟಿ ಅರಣ್ಯ ಸಂರಕ್ಷಿತ ಪ್ರದೇಶದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರತಾತ್ ಅಕ್ಷಯ್ ಅಶೋಕ್, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮಹಿಳಾ ದಸರಾ, ರೈತ ದಸರಾ, ಯುವ ಸಂಭ್ರಮಕ್ಕೆ ಆದ್ಯತೆ:

ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಮಾತನಾಡಿ, ಮೂರು ದಿನಗಳ ದಸರಾದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು ಮೂಡಿಬರಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳು, ಫಲಪುಷ್ಪ ಪ್ರದರ್ಶನ, ಮಹಿಳಾ ದಸರಾ, ರೈತ ದಸರಾ, ಯುವ ಸಂಭ್ರಮ, ಗ್ರಾಮೀಣ ಕ್ರೀಡಾಕೂಟ, ಮ್ಯಾರಥಾನ್, ಪಾರಂಪರಿಕ ನಡಿಗೆ ಹೀಗೆ ಎಲ್ಲಾ ಕಾರ್ಯಕ್ರಮಗಳು ಅಚ್ಚುಕಟ್ಟಾಗಿ ಆಯೋಜಿತವಾಗಬೇಕು. ಇದಕ್ಕಾಗಿ ನಿಯೋಜಿತರಾಗಿರುವ ವಿವಿಧ ಸಮಿತಿಗಳಲ್ಲಿರುವ ಅಧಿಕಾರಿಗಳು ಪರಿಪೂರ್ಣ ಸಿದ್ಧತೆ ಮಾಡಬೇಕೆಂದು ನಿರ್ದೇಶನ ನೀಡಿದರು. ಕಲಾ ತಂಡಗಳ ಮೆರವಣಿಗೆಯನ್ನು ಹೆಚ್ಚು ಆಕರ್ಷಕಗೊಳಿಸಿ. ಆನೆ ಕರೆಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ವಿಸೃತವಾಗಿ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಿ. ಈಗಾಗಲೇ ಪ್ರಸ್ತಾಪವಾಗಿರುವ ಜನನ ಮಂಟಪದಲ್ಲಿ ಸಾಂಪ್ರದಾಯಿಕ ದರ್ಬಾರ್ ಆಚರಣೆಗೂ ಅಗತ್ಯ ಸಲಹೆ, ಅಭಿಪ್ರಾಯಗಳನ್ನು ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಿ. ಜನರ ಅಭಿಲಾಷೆಯಂತೆ ದಸರಾ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸಿ ಎಂದು ತಿಳಿಸಿದರು. ವೇದಿಕೆ ನಿರ್ಮಾಣವೂ ಆಕರ್ಷಕವಾಗಿರಲಿ. ಸ್ವಚ್ಛತೆ, ಕುಡಿಯುವ ನೀರು, ಇನ್ನಿತರ ವ್ಯವಸ್ಥೆಗಳು ಸಮರ್ಪಕವಾಗಿ ಇರಲಿ. ಕಾರ್ಯಕ್ರಮ ನೀಡುವ ಕಲಾವಿದರಿಗೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಒದಗಿಸಿ. ಈ ಬಾರಿ ದಸರಾವನ್ನು ಯಶಸ್ವಿ ಹಾಗೂ ಜನಾಕರ್ಷಕಗೊಳಿಸಲು ಸಿದ್ಧತೆಗಳನ್ನು ಬೇಗನೆ ಪೂರ್ಣಗೊಳಿಸಿ. ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.