ಸಾರಾಂಶ
ಉಡುಪಿ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆ ನಡೆಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ನೈರುತ್ಯ ಶಿಕ್ಷಕರ ಮತ್ತು ಪರವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಖಚಿತ. ಜನತೆ ವಿಧಾನಸಭೆಯಲ್ಲಿ ಬದಲಾವಣೆ ಬಯಸಿದಂತೆ ಈ ಕ್ಷೇತ್ರಗಳಲ್ಲಿಯೂ ಬದಲಾವಣೆ ಬಯಸಿದ್ದಾರೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ್ ಹೇಳಿದರು.ಅವರು ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಪೂರ್ವ ತಯಾರಿ ಸಭೆಯಲ್ಲಿ ಮಾತನಾಡಿದರು.
ದೇಶದಲ್ಲಿಯೂ ಬದಲಾವಣೆಯ ಗಾಳಿ ಬೀಸುತ್ತಿದ್ದು, ಪ್ರಧಾನಿಗಳ ವಿಚಲಿತ ಹೇಳಿಕೆಗಳು ಇದಕ್ಕೆ ಸಾಕ್ಷಿ ಎಂದವರು ಹೇಳಿದರು.ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಮಾತನಾಡಿ, ನೈರುತ್ಯ ಶಿಕ್ಷಣ ಹಾಗೂ ಪದವೀಧರ ಕ್ಷೇತ್ರವು ಶಿಕ್ಷಣದಲ್ಲಿಯೂ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಕಾಂಗ್ರೆಸ್ ಪಕ್ಷ ಎಲ್ಲರ ಹಿತ ಕಾಪಾಡುವಲ್ಲಿ ಕಂಕಣ ಬದ್ಧವಾಗಿದೆ. ಜನರು ಕೋಮು ದ್ವೇಷವನ್ನು ಒಪ್ಪುವುದಿಲ್ಲ ಎಂದು ವಿಧಾನಸಭಾ ಚುನಾವಣೆಯಲ್ಲಿ ಸಾಬೀತಾಗಿದೆ. ನಮ್ಮ ಸರ್ಕಾರ ಒಂದು ವರ್ಷ ಪೂರೈಸಿದ್ದು, ಈ ಅವಧಿಯ ಜನಪರ ಕೆಲಸಗಳನ್ನು ಮುಂದಿಟ್ಟು ಗೆಲುವು ಸಾಧಿಸಬಹುದು ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್, ಕೆಪಿಸಿಸಿ ಪ್ರ.ಕಾರ್ಯದರ್ಶಿ ಎಂ.ಎ.ಗಫೂರ್, ಜಿಲ್ಲಾ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ ಕೊಳ್ಕೆಬೈಲು, ನಾಯಕರಾದ ಉದಯ ಕುಮಾರ್ ಶೆಟ್ಟಿ ಮುನಿಯಾಲ್, ದಿನೇಶ್ ಹೆಗ್ಡೆ ಮುಳುವಳ್ಳಿ, ರಮೇಶ್ ಕಾಂಚನ್ ಭಾಗವಹಿಸಿದ್ದರು. ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.