ಸಾರಾಂಶ
ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯು ಇಕ್ಕಟ್ಟಿಗೆ ಸಿಲುಕಿದ್ದು, ಟಿಕೆಟ್ ಆಕಾಂಕ್ಷಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೇಂದ್ರದ ಅಧೀನದಲ್ಲಿರುವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮನವೊಲಿಕೆ ಪ್ರಯತ್ನ ಕಸರತ್ತು
ಬೆಂಗಳೂರು : ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯ ಆಯ್ಕೆಯು ಇಕ್ಕಟ್ಟಿಗೆ ಸಿಲುಕಿದ್ದು, ಟಿಕೆಟ್ ಆಕಾಂಕ್ಷಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರಿಗೆ ಕೇಂದ್ರದ ಅಧೀನದಲ್ಲಿರುವ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡಲು ಮನವೊಲಿಕೆ ಪ್ರಯತ್ನ ಕಸರತ್ತು ನಡೆದಿದೆ ಎಂದು ಹೇಳಲಾಗಿದೆ.
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿ.ಪಿ.ಯೋಗೇಶ್ವರ್‌ಗೆ ಟಿಕೆಟ್ ನೀಡಲು ಜೆಡಿಎಸ್ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಒಲವು ಇಲ್ಲ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಅವರಿಗೆ ಕೇಂದ್ರದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಮೂಲಕ ಸಮಾಧಾನಪಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದರಿಂದ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ಅಡಗಿದೆ.
ಕುಮಾರಸ್ವಾಮಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಮಗೆ ಬೇಕಾದ ಅಭ್ಯರ್ಥಿಯನ್ನು ಎನ್‌ಡಿಎ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲು ಪಣತೊಟ್ಟಿದ್ದಾರೆ. ಹೀಗಾಗಿ ಯೋಗೇಶ್ವರ್ ವಿಶ್ವಾಸಕ್ಕೆ ತೆಗೆದುಕೊಂಡು ಎನ್‌ಡಿಎ ಒಗ್ಗಟ್ಟಾಗಿ ಕೆಲಸ ಮಾಡಿ ತಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವ ತಂತ್ರಗಾರಿಕೆಯಾಗಿದೆ. ಅಲ್ಲದೇ, ರಾಜ್ಯ ಬಿಜೆಪಿ ನಾಯಕರ ಮೂಲಕ ಯೋಗೇಶ್ವರ್ ಮನವೊಲಿಕೆ ಪ್ರಯತ್ನ ನಡೆಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.