ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌.ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು : ಚೆಕ್‌ ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕ ಎಂ.ಎನ್‌.ಕುಮಾರ್‌ ಅವರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

4ನೇ ಎಸಿಎಂಎಂ ನ್ಯಾಯಾಲಯವು ಆರೋಪಿ ಎಂ.ಎನ್‌.ಕುಮಾರ್‌ ವಿರುದ್ಧ ಅಪರಾಧ ನಿರ್ಣಯ (ಕನ್ವಿಕ್ಷನ್‌ ) ವಾರೆಂಟ್‌ ಜಾರಿಗೊಳಿಸಿತ್ತು. ಆರೋಪಿಯ ಕಚೇರಿ ಉಪ್ಪಾರಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಗಾಂಧಿನಗರದಲ್ಲಿ ಇರುವುದರಿಂದ ಆರೋಪಿಯ ಬಂಧನಕ್ಕೆ ನ್ಯಾಯಾಲಯವು ಉಪ್ಪಾರಪೇಟೆ ಠಾಣೆ ಪೊಲೀಸರಿಗೆ ಸೂಚಿಸಿತ್ತು.

ನ್ಯಾಯಾಲಯದ ಸೂಚನೆಯಂತೆ ಉಪ್ಪಾರಪೇಟೆ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕೊಡಗು ಜಿಲ್ಲೆಯ ಶನಿವಾರಸಂತೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕುಮಾರ್‌ನನ್ನು ಬುಧವಾರ ತಡರಾತ್ರಿ ಬಂಧಿಸಿದ್ದರು. ಬಳಿಕ ಗುರುವಾರ ಬೆಳಗ್ಗೆ ನಗರಕ್ಕೆ ಕರೆತಂದು 4ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯದ ಸೂಚನೆ ಮೇರೆಗೆ ಆರೋಪಿ ಕುಮಾರ್‌ನನ್ನು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹಕ್ಕೆ ಒಪ್ಪಿಸಿದ್ದಾರೆ.

ಪ್ರಕರಣದ ವಿವರ:

ಕನ್ನಡದ ಹಲವು ಸ್ಟಾರ್‌ ನಟರ ಸಿನಿಮಾಗಳನ್ನು ನಿರ್ಮಿಸಿರುವ ನಿರ್ಮಾಪಕ ಎಂ.ಎನ್.ಕುಮಾರ್‌ ಈ ಹಿಂದೆ ಹಿರಿಯ ನಟರೊಬ್ಬರಿಂದ ಸುಮಾರು ₹1.25 ಕೋಟಿ ಸಾಲ ಪಡೆದುಕೊಂಡಿದ್ದರು ಎನ್ನಲಾಗಿದೆ. ಈ ಸಾಲ ಮರು ಪಾವತಿಸದ ಹಿನ್ನೆಲೆಯಲ್ಲಿ ಕುಮಾರ್‌ ವಿರುದ್ಧ ಆ ಹಿರಿಯ ನಟ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ವಂಚನೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿ ಕುಮಾರ್‌ಗೆ ಶಿಕ್ಷೆ ಪ್ರಕಟಿಸಿ ಆದೇಶಿಸಿತ್ತು. ಈ ನಡುವೆ ಆರೋಪಿ ಕುಮಾರ್‌ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದರು. ಹೀಗಾಗಿ ನ್ಯಾಯಾಲಯ ಆರೋಪಿ ವಿರುದ್ಧ ಕನ್ವಿಕ್ಷನ್‌ ವಾರೆಂಟ್‌ ಜಾರಿಗೊಳಿಸಿತ್ತು.