ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ

| Published : May 19 2024, 01:46 AM IST

ಆಹಾರ ಪದಾರ್ಥಗಳ ತಯಾರಿಕೆಯಲ್ಲಿ ರಾಸಾಯನಿಕ ಬಳಕೆ ಕುರಿತು ಪರಿಶೀಲಿಸಿ: ಗಂಗೂಬಾಯಿ ಮಾನಕರ
Share this Article
  • FB
  • TW
  • Linkdin
  • Email

ಸಾರಾಂಶ

ಉತ್ತರ ಕನ್ನಡ ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸುವಂತೆ ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದ್ದಾರೆ.

ಕಾರವಾರ: ಜಿಲ್ಲೆಯಲ್ಲಿನ ಆಹಾರ ತಯಾರಿಕಾ ಘಟಕಗಳು, ಬೀದಿ ಬದಿ ವ್ಯಾಪಾರಿಗಳು ತಯಾರಿಸುವ ಆಹಾರ ಪದಾರ್ಥಗಳಲ್ಲಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ನಿಷೇಧಿತ ರಾಸಾಯನಿಕ ಬಳಕೆ, ಬಣ್ಣಗಳ ಬಳಕೆ ಮಾಡುತ್ತಿರುವ ಕುರಿತಂತೆ ಪರಿಶೀಲಿಸಿ, ಅವುಗಳ ಗುಣಮಟ್ಟದ ಮಾದರಿಗಳನ್ನು ಸಂಗ್ರಹಿಸಬೇಕು ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಸೂಚನೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಸಮಿತಿಯ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಮನೆಯಿಂದ ಹೊರಗಡೆ, ವಿವಿಧ ಆಹಾರ ಪದಾರ್ಥಗಳನ್ನು ಸಿದ್ಧಪಡಿಸುವ ಹಾಗೂ ಮಾರಾಟದ ಸ್ಥಳಗಳಲ್ಲಿ ಸೇವಿಸುವ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣ ಮತ್ತು ರುಚಿ ಹೆಚ್ಚಿಸುವ ನಿಷೇಧಿತ ಮತ್ತು ಅಪಾಯಕಾರಿ ರಾಸಾಯನಿಕಗಳ ಬಳಕೆ ನಡೆಯುತ್ತಿರುವ ಕುರಿತಂತೆ, ಆಹಾರ ತಯಾರಿಕಾ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆಹಾರದ ಮಾದರಿಗಳನ್ನು ತೆಗೆದುಕೊಂಡು ಪ್ರಯೋಗಾಲಯದ ಮೂಲಕ ವರದಿ ಸಂಗ್ರಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನಿನಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಸಾರ್ವಜನಿಕ ಸ್ಥಳಗಳಲ್ಲಿ ಮಾತ್ರವಲ್ಲದೇ, ಜಿಲ್ಲೆಯ ವಿವಿಧ ಸರ್ಕಾರಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಸಿದ್ಧಪಡಿಸುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಕೂಡ ಪರಿಶೀಲಿಸಿ ವರದಿ ನೀಡಬೇಕು. ತಂಬಾಕು ಉತ್ಪನ್ನಗಳ ಬಳಕೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ತಿಳಿಸಿದ ಜಿಲ್ಲಾಧಿಕಾರಿ, ತಂಬಾಕು ಉತ್ಪನ್ನಗಳ ಮಾರಾಟ ಸ್ಥಳಗಳ ಮೇಲೆ ಅನಿರೀಕ್ಷಿತ ದಾಳಿಗಳನ್ನು ನಡೆಸುವಂತೆ ಮತ್ತು ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡುವವರಿಂದ ದಂಡ ವಸೂಲಿ ಮಾಡಬೇಕು ಎಂದು ತಿಳಿಸಿದರು.

ತಂಬಾಕು ಉತ್ಪನ್ನಗಳ ಮಾರಾಟ ಮಾಡಲು ನಿಯಮಾನುಸಾರ ಪ್ರತ್ಯೇಕ ಅನುಮತಿ ಪಡೆಯಬೇಕಿದ್ದು, ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ, ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಪ್ರತ್ಯೇಕ ಅನುಮತಿ ಪಡೆದಿರುವ ಬಗ್ಗೆ ಪರಿಶೀಲಿಸಬೇಕು. ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತಂತೆ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿ, ಗ್ರಾಮಮಟ್ಟದಲ್ಲೂ ಹೆಚ್ಚಿನ ಅರಿವು ಕಾರ್ಯಕ್ರಮ ಏರ್ಪಡಿಸಬೇಕು ಎಂದು ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಏಪ್ರಿಲ್ 2023ರಿಂದ ಮಾರ್ಚ್ 2024ರ ವರೆಗೆ ಕೋಟ್ಪಾ ಅಡಿಯಲ್ಲಿ 954 ಪ್ರಕರಣಗಳನ್ನು ದಾಖಲಿಸಿದ್ದು, ₹1,48,290 ದಂಡ ವಸೂಲಿ ಮಾಡಲಾಗಿದೆ. ಆದರೂ ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟ ಕಡಿಮೆಯಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕೂಡ ಹೆಚ್ಚಿನ ಪ್ರಮಾಣದಲ್ಲಿ ತಂಬಾಕು ಉತ್ಪನ್ನಗಳ ಅನಧಿಕೃತ ಮಾರಾಟ ನಡೆಯುತ್ತಿದ್ದು, ಆ ಪ್ರದೇಶದಲ್ಲೂ ದಾಳಿಗಳನ್ನು ನಡೆಸಿ, ಎಚ್ಚರ ಮೂಡಿಸಿ ಎಂದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ ರಜಪೂತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನೀರಜ್ ಬಿ.ವಿ., ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಅರ್ಚನಾ ನಾಯಕ, ಆರ್.ಸಿ.ಎಚ್.ಒ. ಡಾ. ನಟರಾಜ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಕ್ಯಾ. ರಮೇಶ ರಾವ್ ಇದ್ದರು.