ಅಟ್ರಾಸಿಟಿ ದೂರು ದಾಖಲು ಮುನ್ನ ಸತ್ಯಾಸತ್ಯತೆ ಪರಿಶೀಲಿಸಿ

| Published : Oct 01 2024, 01:20 AM IST

ಅಟ್ರಾಸಿಟಿ ದೂರು ದಾಖಲು ಮುನ್ನ ಸತ್ಯಾಸತ್ಯತೆ ಪರಿಶೀಲಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಚಿತ್ರದುರ್ಗದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಡಿಸಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದೌರ್ಜನ್ಯ ನಿಯಂತ್ರಣ ಕಾಯ್ದೆಯ ದುರುಪಯೋಗ ಪಡಿಸಿಕೊಂಡು ಸುಳ್ಳು ಪ್ರಕರಣಗಳು ದಾಖಲಾಗಬಾರದು. ಈ ಕುರಿತು ಸತ್ಯಾಸತ್ಯತೆ ಪರಿಶೀಲಿಸಿ ಪೊಲೀಸರು ಪ್ರಕರಣಗಳನ್ನು ದಾಖಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟರ ಮೇಲಿನ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ದಾಖಲಾಗುವ ಪ್ರಕರಣಗಳಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಬಾಧಿತರಿಗೆ ಶೀಘ್ರ ಪರಿಹಾರ ನೀಡಬೇಕು. ದಾಖಲಾಗಿರುವ ಪ್ರಕರಣಗಳಲ್ಲಿ ಆರೋಪಿತರು ಪ್ರಕರಣಗಳಿಂದ ಮುಕ್ತರಾಗುತ್ತಿದ್ದಾರೆ. ದಾಖಲಾದ ಪ್ರಕರಣಗಳಿಗೆ ಹೊಲಿಸಿದರೆ ಶಿಕ್ಷೆಗೆ ಗುರಿಯಾದವರ ಪ್ರಮಾಣ ಅತ್ಯಂತ ಕಡಿಮೆ ಇರುವುದು ಕಳವಳಕಾರಿಯಾಗಿದೆ. ಇದರಿಂದ ಕಾಯ್ದೆ ಉದ್ದೇಶ ಈಡೇರಿದಂತೆ ಆಗುವುದಿಲ್ಲ ಎಂದು ಹೇಳಿದರು.

ಕಳೆದ ಜೂನ್ ತಿಂಗಳಿಂದ ಇಲ್ಲಿಯವರೆಗೆ ಜಿಲ್ಲೆಯಾದ್ಯಂತ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ 32 ಹೊಸ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ 3 ಪ್ರಕರಣಗಳಲ್ಲಿ ಸುಳ್ಳು ಆರೋಪ ಮಾಡಿರುವುದು ತನಿಖೆಯಿಂದ ಧೃಡಪಟ್ಟಿದೆ. ಈ ಕುರಿತು ವಿಶೇಷ ಜಿಲ್ಲಾ ನ್ಯಾಯಾಲಯದಲ್ಲಿ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಹೇಳಿದರು.

ಜಿಲ್ಲೆಯಲ್ಲಿ ಪ್ರಸಕ್ತ ತ್ರೈಮಾಸಿಕದಲ್ಲಿ ದಾಖಲಾದ 32 ಪ್ರಕರಣಗಳಲ್ಲಿ 42 ಜನ ಸಂತ್ರಸ್ತರಿದ್ದು, ಇವರೆಗೆ ಒಟ್ಟು ₹29.77 ಲಕ್ಷ ಪರಿಹಾರ ಧನವನ್ನು ಸಂತ್ರಸ್ತರ ಖಾತೆಗೆ ಜಮೆ ಮಾಡಲಾಗಿದೆ. ಜಿಲ್ಲೆಯಲ್ಲಿ ಆಗಸ್ಟ್ ಅಂತ್ಯದ ವೇಳೆ 116 ದೌರ್ಜನ್ಯ ಪಕ್ರರಣಗಳು ದಾಖಲಾಗಿದ್ದು, ಈ ಪೈಕಿ ಜನವರಿಯಲ್ಲಿ 6, ಫೆಬ್ರವರಿ ಹಾಗೂ ಮಾರ್ಚ್‍ನಲ್ಲಿ 2 ಹಾಗೂ ಏಪ್ರಿಲ್‍ನಲ್ಲಿ 1 ಪ್ರಕರಣಗಳಲ್ಲಿ ಆರೋಪಿಗಳು ನ್ಯಾಯಾಲಯದಿಂದ ಬಿಡುಗಡೆ ಹೊಂದಿದ್ದಾರೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಯಲ್ಲಿ ಮಾಹಿತಿ ನೀಡಿದರು.

ಜಿಲ್ಲೆಯಿಂದ ಇತರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಗೆ ವಲಸೆ ಹೋದ 27 ಮಕ್ಕಳ ಪೈಕಿ ವಿವರ ಪತ್ತೆಯಾಗದ 18 ಮಕ್ಕಳನ್ನು ಪೊಲೀಸ್, ಗ್ರಾಮಲೆಕ್ಕಾಧಿಕಾರಿ ಹಾಗೂ ಪಿಡಿಒಗಳ ಸಹಾಯದಿಂದ ಪತ್ತೆ ಹಚ್ಚಿ ಮುಖ್ಯವಾಹಿನಿಗೆ ತರುವ ಕೆಲಸ ಮಾಡಬೇಕು. ಪತ್ರ ವ್ಯವಹಾರ ನಡೆಸಿ ಸುಮ್ಮನೆ ಕುಳಿತುಕೊಳ್ಳದೇ, ಬಿಇಒ ಹಾಗೂ ತಾಲೂಕು ಪಂಚಾಯಿತಿ ಇಒ ಗಳು ಸ್ಥಳ ಪರಿಶೀಲನೆ ನಡೆಸಿ ವಿವರ ಸಂಗ್ರಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಚಳ್ಳಕೆರೆ ತಾಲೂಕಿನಲ್ಲಿ ಒಟ್ಟು 74 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಈ ಪೈಕಿ 69 ಮಕ್ಕಳನ್ನು ಮುಖ್ಯವಾಹಿನಿಗೆ ತರಲಾಗಿದೆ. ಬೇರೆ ಜಿಲ್ಲೆಯಿಂದ ಜಿಲ್ಲೆಗೆ ವಲಸೆ ಬಂದು, ಇಲ್ಲಿ ನೆಲೆಸಿರುವವರ ಮಕ್ಕಳ ವಿವರಗಳನ್ನು ಪಡೆದು, ಆಯಾ ಉಪ ನಿರ್ದೇಶಕರಿಗೆ ಮಾಹಿತಿ ನೀಡಲಾಗಿದೆ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಅವರು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಜಾಗೃತಿ ಸಮಿತಿ ಸದಸ್ಯರಾದ ಡಿ.ಒ.ಮೊರಾರ್ಜಿ, ಎಂ.ಡಿ.ನವಕೋಟಿ, ಬೋರಸ್ವಾಮಿ, ಹೇಮೇಗೌಡ ಸೇರಿ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಅಕ್ರಮ ಮದ್ಯ ಮಾರಾಟಗಾರರ ಹೆಡೆಮುರಿ ಕಟ್ಟಿ

ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ಪೆಟ್ಟಿಗೆ ಹಾಗೂ ತರಕಾರಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಖೇಧಕರ. ಅಬಕಾರಿ ಇಲಾಖೆಯಿಂದ ಹೆಚ್ಚಿನ ದಾಳಿ ನಡೆಸಿ, ಅಕ್ರಮ ಮದ್ಯ ಮಾರಾಟಗಾರರ ಹೆಡೆಮುರಿ ಕಟ್ಟಬೇಕು. ಶಾಲಾ ಕಾಲೇಜು ವಿದ್ಯಾರ್ಥಿಗಳು ಸಹ ಇಂತಹ ಸ್ಥಳಗಲ್ಲಿ ಮದ್ಯ ಖರೀದಿಸಿ ಸೇವನೆ ಮಾಡಿರುವ ಪ್ರಕರಣಗಳು ಜಿಲ್ಲೆಯಲ್ಲಿ ಬೆಳಕಿಗೆ ಬಂದಿವೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಪ್ರದೇಶದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿ ಕಂಡುಬರುತ್ತಿದೆ ಇವುಗಳ ತಡೆಗೆ ಅಬಕಾರಿ ಇಲಾಖೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶನ ನೀಡಿದರು.

ಪ್ರಸಕ್ತ ವರ್ಷದಲ್ಲಿ ಜನವರಿಯಿಂದ ಆಗಸ್ಟ್‌ವರೆಗೆ ಅಬಕಾರಿ ಇಲಾಖೆಯಿಂದ 1,313 ದಾಳಿಗಳನ್ನು ನಡೆಸಲಾಗಿದೆ. ಅಬಕಾರಿ ಕಾಯ್ದೆ ಕಲಂ 15ಎ ಅಡಿ 801 ಹಾಗೂ 61 ಘೋರ ಪ್ರಕರಣಗಳನ್ನು ದಾಖಲಿಸಲಾಗಿದೆ. 1,570 ಲೀಟರ್ ಮದ್ಯ, 210 ಲೀಟರ್ ಬಿಯರ್ ಹಾಗೂ ಮದ್ಯ ಸಾಗಾಣಿಕೆಗೆ ಬಳಸಲಾದ 39 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಬಕಾರಿ ಇಲಾಖೆ ಅಧೀಕ್ಷಕರು ಸಭೆಗೆ ಮಾಹಿತಿ ನೀಡಿದರು.