ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ SIR-2026ರ ವಿಶೇಷ ಆಂದೋಲನದ ಅಂಗವಾಗಿ ಬೈಕ್ ಜಾಥಾ ನಡೆಸಲಾಯಿತು

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಸ್ವೀಪ್ ಸಮಿತಿ ಹಾಗೂ ದೊಡ್ಡಬಳ್ಳಾಪುರ ತಾಲೂಕು ಸ್ವೀಪ್ ಸಮಿತಿ ಸಹಯೋಗದಲ್ಲಿ SIR-2026ರ ವಿಶೇಷ ಆಂದೋಲನದ ಅಂಗವಾಗಿ ಬೈಕ್ ಜಾಥಾ ನಡೆಸಲಾಯಿತು.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ವಾಸಂತಿ ಅಮರ್ ಅಧ್ಯಕ್ಷತೆಯಲ್ಲಿ ಶಾಂತಿನಗರದ ಮುತ್ಯಾಲಮ್ಮ ದೇವಸ್ಥಾನದಿಂದ ಬೈಕ್ ಜಾಥಾಗೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, SIR-2026ರ ಅಂಗವಾಗಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಮತದಾರರು ತಮ್ಮ ಹೆಸರು ಮತ್ತು ವಿವರಗಳು ಮತದಾರರ ಪಟ್ಟಿಯಲ್ಲಿ ಸರಿಯಾಗಿರುವುದನ್ನು ಪರಿಶೀಲಿಸಿ ಕೊಳ್ಳಬೇಕು ಹಾಗೂ ಅಗತ್ಯವಿದ್ದಲ್ಲಿ ನಿಗದಿತ ಅವಧಿಯಲ್ಲಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಜಾಗೃತಿ ಮೂಡಿಸಿದರು.

ಉಪ ಕಾರ್ಯದರ್ಶಿ ಶಿವಕುಮಾರ್ ಮಾತನಾಡಿ, SIR-2026ರ ಪ್ರಕ್ರಿಯೆ, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಸಾರ್ವಜನಿಕರು ಈ ಪ್ರಕ್ರಿಯೆ ಯಲ್ಲಿ ಭಾಗವಹಿಸುವ ಕುರಿತು ಮಾಹಿತಿ ನೀಡಿದರು.

SIR-2026ರ ಪ್ರಕ್ರಿಯೆಯು ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹೆಸರುಗಳು ಪಟ್ಟಿಯಲ್ಲಿ ಇರುವಂತೆ ಹಾಗೂ ಮತದಾರರ ವಿವರಗಳು ನಿಖರವಾಗಿರುವಂತೆ ಕ್ರಮ ಕೈಗೊಳ್ಳುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆ ಯಲ್ಲಿ ಸಾರ್ವಜನಿಕರು ಮತದಾರರ ಪಟ್ಟಿಯನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ನಮೂನೆಯಲ್ಲಿ ಹಕ್ಕುಗಳು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಅಧಿಕಾರಿಗಳು ಮನವಿ ಮಾಡಿದರು.

“ಮತದಾರರ ಪಟ್ಟಿ – ನಮ್ಮ ಹಕ್ಕು, ನಮ್ಮ ಜವಾಬ್ದಾರಿ” ಎಂಬ ಸಂದೇಶದೊಂದಿಗೆ ಜಾಥಾದ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಮುತ್ಯಾಲಮ್ಮ ದೇವಸ್ಥಾನದಿಂದ ಆರಂಭಗೊಂಡ ಬೈಕ್ ಜಾಥಾವು ದೊಡ್ಡಬಳ್ಳಾಪುರ ನಗರದ ತಾಲ್ಲೂಕು ಕಚೇರಿ, ತಾಲ್ಲೂಕು ಪಂಚಾಯಿತಿ ಹಾಗೂ ಬಸವ ಭವನ ರಸ್ತೆಯ ಮೂಲಕ ಸಾಗಿ, ಕುರುಬರಹಳ್ಳಿ–ಕೊಡಿಗೇಹಳ್ಳಿ ವೃತ್ತದಲ್ಲಿ ಮುಕ್ತಾಯಗೊಂಡಿತು.ಜಾಥಾದ ಸಂದರ್ಭದಲ್ಲಿ SIR-2026ರ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಯೋಜನಾಧಿಕಾರಿ ರಾಮಕೃಷ್ಣಪ್ಪ, ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಹರ್ತಿ ಸೇರಿದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಿದ್ದರು.

18ಕೆಡಿಬಿಪಿ3-

ದೊಡ್ಡಬಳ್ಳಾಪುರದಲ್ಲಿ SIR-2026 ವಿಶೇಷ ಆಂದೋಲನದ ಅಂಗವಾಗಿ ಬೈಕ್ ಜಾಥಾ ನಡೆಯಿತು.