ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರುವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶಾಸಕ ಬಾಬಾಸಾಹೇಬ ಪಾಟೀಲ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಚನ್ನಮ್ಮನ ಕಿತ್ತೂರು
ವೀರವನಿತೆ ಕಿತ್ತೂರು ರಾಣಿ ಚನ್ನಮ್ಮ ಅವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೂಡಲೇ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಅಭಿವೃದ್ಧಿ ಹೋರಾಟ ಸಮಿತಿಯ ಪದಾಧಿಕಾರಿಗಳು ಶಾಸಕ ಬಾಬಾಸಾಹೇಬ ಪಾಟೀಲ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ಪಟ್ಟಣದ ರಾಜಗುರು ಸಂಸ್ಥಾನ ಕಲ್ಮಠದಲ್ಲಿ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಮನವಿ ಸಲ್ಲಿಸಿದ ಸಮಿತಿ ಸದಸ್ಯರು, ಬ್ರಿಟಿಷರ ವಸಾಹತುಶಾಹಿ ಆಡಳಿತದ ವಿರುದ್ಧ 1824ರಲ್ಲಿಯೇ ಕೆಚ್ಚೆದೆಯಿಂದ ಹೋರಾಡಿದ ಕಿತ್ತೂರು ರಾಣಿ ಚನ್ನಮ್ಮ ಅವರು ದೇಶದ ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಸ್ವತಂತ್ರ ಅಸ್ತಿತ್ವಕ್ಕಾಗಿ ತಮ್ಮ ಪ್ರಾಣವನ್ನೇ ಪಣಕ್ಕಿಟ್ಟ ಧೀರ ಮಹಿಳೆಯಾಗಿದ್ದಾರೆ ಎಂದರು.
1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮಕ್ಕೂ ಸುಮಾರು 33 ವರ್ಷಗಳ ಮೊದಲೇ ಬ್ರಿಟಿಷರ ವಿರುದ್ಧ ಸಶಸ್ತ್ರ ಹೋರಾಟ ನಡೆಸಿದ ಹೆಗ್ಗಳಿಕೆ ರಾಣಿ ಚನ್ನಮ್ಮ ಅವರಿಗೆ ಸಲ್ಲುತ್ತದೆ. ಇಂತಹ ಮಹಾನ್ ಸ್ವಾತಂತ್ರ್ಯ ಹೋರಾಟಗಾರ್ತಿಯ ಇತಿಹಾಸ, ತ್ಯಾಗ ಮತ್ತು ಹೋರಾಟಕ್ಕೆ ರಾಷ್ಟ್ರಮಟ್ಟದಲ್ಲಿ ಅಧಿಕೃತ ಮನ್ನಣೆ ದೊರೆಯಬೇಕಿದೆ ಎಂದು ಮನವಿಯಲ್ಲಿ ಒತ್ತಾಯಿಸಿದರು.ರಾಣಿ ಚನ್ನಮ್ಮ ಅವರನ್ನು ಭಾರತದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು. 1824ರ ಕಿತ್ತೂರು ಹೋರಾಟವನ್ನು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಆರಂಭಿಕ ಮಹತ್ವದ ಅಧ್ಯಾಯವೆಂದು ರಾಷ್ಟ್ರಮಟ್ಟದಲ್ಲಿ ಗುರುತಿಸಬೇಕು. ಅವರ ಜೀವನ ಚರಿತ್ರೆ, ಹೋರಾಟ ಹಾಗೂ ತ್ಯಾಗವನ್ನು ರಾಷ್ಟ್ರೀಯ ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕು. ಅವರ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಸ್ಮಾರಕ ಹಾಗೂ ಅಧ್ಯಯನ ಕೇಂದ್ರ ಸ್ಥಾಪಿಸಬೇಕು. ಪ್ರತಿವರ್ಷ ಅಕ್ಟೋಬರ್ 23ರಂದು ಆಚರಿಸುವ ಕಿತ್ತೂರು ವಿಜಯೋತ್ಸವವನ್ನು ರಾಷ್ಟ್ರಮಟ್ಟದ ಉತ್ಸವವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರು ಈ ಐತಿಹಾಸಿಕ ಬೇಡಿಕೆಗಳ ಕುರಿತು ಧ್ವನಿ ಎತ್ತಬೇಕು ಎಂದು ಸಮಿತಿ ಪದಾಧಿಕಾರಿಗಳು ಮನವಿ ಮಾಡಿದರು.ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಬಾಬಾಸಾಹೇಬ ಪಾಟೀಲ, ರಾಣಿ ಚನ್ನಮ್ಮ ಅವರ ಹೋರಾಟವನ್ನು ರಾಷ್ಟ್ರಮಟ್ಟದಲ್ಲಿ ದಾಖಲಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಕಿತ್ತೂರನ್ನು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ಅಗತ್ಯ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ಅಷ್ಪಾಕ ಹವಾಲ್ದಾರ, ಕೃಷ್ಣಾ ಬಾಳೆಕುಂದರಗಿ ಸೇರಿದಂತೆ ಹೋರಾಟ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.ರಾಣಿ ಚನ್ನಮ್ಮ ಅವರಿಗೆ ದೇಶದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಎಂಬ ಅಧಿಕೃತ ಮಾನ್ಯತೆ ದೊರಕಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸೋಣ. ಈ ವಿಷಯವಾಗಿ ನಮ್ಮ ಪಕ್ಷದ ನಾಯಕರ ಮೇಲೆ ಒತ್ತಡ ತಂದು ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸುತ್ತೇನೆ. ಕಲ್ಮಠದ ಶ್ರೀಗಳು ಹಾಗೂ ಹೋರಾಟ ಸಮಿತಿಯೊಂದಿಗೆ ಕೈಜೋಡಿಸಿ ನನಗೆ ವಹಿಸಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. -ಮಹಾಂತೇಶ ದೊಡ್ಡಗೌಡ, ಮಾಜಿ ಶಾಸಕ